ಮಕ್ಕಳು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಹಾಗೂ ಸಾರ್ವಜನಿಕರು ಗ್ರಂಥಾಲಯದ ಪುಸ್ತಕಗಳು ಮತ್ತು ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು.
ಬಳ್ಳಾರಿ ನಗರ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2026 ಪ್ರಶಸ್ತಿ ಪ್ರಧಾನ ಸಮಾರಂಭ
ಕನ್ನಡಪ್ರಭ ವಾರ್ತೆ ಬಳ್ಳಾರಿಮಕ್ಕಳು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಹಾಗೂ ಸಾರ್ವಜನಿಕರು ಗ್ರಂಥಾಲಯದ ಪುಸ್ತಕಗಳು ಮತ್ತು ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷ ಪಿ. ಗಾದೆಪ್ಪ ಹೇಳಿದರು.
ಇಲ್ಲಿನ ನಗರ ಕೇಂದ್ರ ಗ್ರಂಥಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2026ರ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಡಾ. ಎಸ್.ಆರ್. ರಂಗನಾಥನ್ ಮತ್ತು ಸರಸ್ವತಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಉದ್ಘಾಟಿಸಿ ಮಾತನಾಡಿದರು.ಡಾ.ಬಿ.ಆರ್. ಅಂಬೇಡ್ಕರ್ ಓದುವ ಹವ್ಯಾಸದಿಂದಲೇ ದೇಶಕ್ಕೆ ಸಂವಿಧಾನ ನೀಡಿದ್ದಾರೆ, ಸ್ವಾಮಿ ವಿವೇಕಾನಂದರು ಸೇರಿದಂತೆ ಹಲವು ಮಹನೀಯರು ಗ್ರಂಥಾಲಯಗಳ ಬಳಕೆಯಿಂದ ದೇಶಕ್ಕೆ ಕೊಡುಗೆ ನೀಡಿದ್ದಾರೆ ಎಂದರು.
ಕಳೆದ ವಾರ ವಿವಿಧ ಶಾಖಾ ಗ್ರಂಥಾಲಯಗಳನ್ನು ವೀಕ್ಷಿಸಿ ವಾರ್ಡ್ ಸದಸ್ಯರೊಂದಿಗೆ ಚರ್ಚಿಸಿದ್ದು, ಮಹಾನಗರ ಪಾಲಿಕೆ ಹಾಗೂ ಗ್ರಂಥಾಲಯ ಪ್ರಾಧಿಕಾರದಿಂದ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಗ್ರಾಮೀಣ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಡಾ. ನರಸಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ, ಜಿಲ್ಲೆ ಹಾಗೂ ನಗರದ ಗ್ರಂಥಾಲಯಗಳ ಅಂಕಿ-ಅಂಶ ನೀಡಿದ ಅವರು, ಕಳೆದ ನಾಲ್ಕು ವರ್ಷಗಳಲ್ಲಿ ಗ್ರಂಥಾಲಯದ ಅಭಿವೃದ್ಧಿ ಕಾರ್ಯಗಳ ಜತೆಗೆ ಕಳೆದ ವರ್ಷ ಪ್ರಥಮ ಬಾರಿಗೆ ಓದುಗರಿಗೆ ಪುಸ್ತಕ ಮಾಹಿತಿಗಾಗಿ ಗ್ರಂಥಾಲಯ ಮಾಹಿತಿ ಕಿಯೋಸ್ಕ್ ಅಳವಡಿಸಲಾಗಿದ್ದು, ಎಲ್ಲರೂ ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.ನ.14ರಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕಿ ಬಿ.ಕೆ.ಲಕ್ಷ್ಮಿಕಿರಣ್ ಪುಸ್ತಕ ಪ್ರದರ್ಶನಕ್ಕೆ ಚಾಲನೆ ನೀಡಿದ ವಿಚಾರ ಪ್ರಸ್ತಾಪಿಸಿದರು.
ವೀರಶೈವ ಮಹಾವಿದ್ಯಾಲಯದ ನಿವೃತ್ತ ಹಿರಿಯ ಗ್ರಂಥಪಾಲಕ ಡಾ.ಬಿ.ಆರ್. ಗದಗಿನ್,ಸಾರ್ವಜನಿಕ ಗ್ರಂಥಾಲಯಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ನಗರ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಹಾಗೂ ನಿವೃತ್ತ ಉಪನ್ಯಾಸಕ ಎನ್. ಬಸವರಾಜ ಮಾತನಾಡಿದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕಿ ಬಿ.ಕೆ. ಲಕ್ಷ್ಮಿಕಿರಣ್ ವಿದ್ಯಾರ್ಥಿಗಳು ಗ್ರಂಥಾಲಯ ಸದುಪಯೋಗಪಡಿಸಿಕೊಂಡು ಭವ್ಯ ಭವಿಷ್ಯ ರೂಪಿಸಿಕೊಳ್ಳಬೇಕು ಹಾಗೂ ಸಾರ್ವಜನಿಕರು ಸದಸ್ಯತ್ವ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಪ್ತಾಹದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನದಲ್ಲಿ ಗ್ರಂಥಾಲಯಗಳ ಪ್ರಾಮುಖ್ಯತೆ ವಿಷಯದ ಮೇಲೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರು, ಉತ್ತಮ ಓದುಗರು ಹಾಗೂ ಉತ್ತಮ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗ್ರಂಥಾಲಯ ಸಹಾಯಕ ಕೆ. ಸಿದ್ದಪ್ಪ, ಗ್ರಂಥಾಲಯ ಸಹಾಯಕ ಸಂತೋಷ್ ಕುಮಾರ್, ಗ್ರಂಥಪಾಲಕಿ ಶಾರದ, ಡೊಳ್ಳಿನ ಮಹೇಂದ್ರ ಹಾಗೂ ಕೆ.ಸುನಿತಾ ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ಕಾಲೇಜುಗಳ ಉಪನ್ಯಾಸಕರು, ವಿದ್ಯಾರ್ಥಿಗಳು, ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯ ಸಿಬ್ಬಂದಿ ಹಾಗೂ ಓದುಗರು ಪಾಲ್ಗೊಂಡಿದ್ದರು.25 ಬಿಆರ್ವೈ 4ಬಳ್ಳಾರಿಯ ಕೇಂದ್ರ ಗ್ರಂಥಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2026ರ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಮೇಯರ್ ಪಿ.ಗಾದೆಪ್ಪ ಚಾಲನೆ ನೀಡಿದರು.