ಸಾರಾಂಶ
ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ನಿರ್ಮಾಣ ಸೇರಿದಂತೆ ಆಸ್ಪತ್ರೆಗೆ ಅವಶ್ಯಕವಾಗಿರುವ ಬೇಡಿಕೆಗಳ ಕ್ರಿಯಾ ಯೋಜನೆ ತಯಾರಿಸಿ ಕೆಕೆಆರ್‌ಡಿಬಿಗೆ ಕಳುಹಿಸುವಂತೆ ತಾಲೂಕು ಆರೋಗ್ಯ ಅಧಿಕಾರಿಗೆ ಸೂಚನೆ
ಕನ್ನಡಪ್ರಭ ವಾರ್ತೆ ಸಿಂಧನೂರು
ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಇಲ್ಲ. ವೈದ್ಯರು ಸರಿಯಾದ ಸಮಯಕ್ಕೆ ಬರುತ್ತಿಲ್ಲವೆಂಬ ದೂರುಗಳಿವೆ. ಹೆಚ್ಚಿನ ವೈದ್ಯರು ಖಾಸಗಿ ಪ್ರಾಕ್ಟಿಸ್‌ಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಈ ಬಗ್ಗೆ ವೈದ್ಯಾಧಿಕಾರಿಗಳು ಇದುವರೆಗೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಶಾಸಕ ಹಂಪನಗೌಡ ಬಾದರ್ಲಿ ಸರ್ಕಾರಿ ಆಸ್ಪತ್ರೆ ಆರೋಗ್ಯ ಅಧಿಕಾರಿ ಅಯ್ಯನಗೌಡರ ವಿರುದ್ಧ ಹರಿಹಾಯ್ದಿದರು.ಶುಕ್ರವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಸರ್ಕಾರಿ ಆಸ್ಪತ್ರೆಗೆ ಬಡರೋಗಿಗಳೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಅವರಿಗೆ ಸರಿಯಾದ ಚಿಕಿತ್ಸೆ ಮಾಡುವುದು ಅವಶ್ಯಕವಾಗಿದೆ. ವೈದ್ಯರು ರೋಗಿಗಳಿಗೆ ಔಷಧ ಹಾಗೂ ಗುಳಿಗೆಗಳಿಗೆ ಚೀಟಿ ಬರೆದು ಕೊಡುತ್ತಿದ್ದಾರೆ ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ನಿರ್ಮಾಣ ಸೇರಿದಂತೆ ಆಸ್ಪತ್ರೆಗೆ ಅವಶ್ಯಕವಾಗಿರುವ ಬೇಡಿಕೆಗಳ ಕ್ರಿಯಾ ಯೋಜನೆ ತಯಾರಿಸಿ ಕೆಕೆಆರ್‌ಡಿಬಿಗೆ ಕಳುಹಿಸುವಂತೆ ತಾಲೂಕು ಆರೋಗ್ಯ ಅಧಿಕಾರಿಗೆ ಸೂಚಿಸಿದರು.ರಸಗೊಬ್ಬರ ಮತ್ತು ಕ್ರಿಮಿನಾಶಕಗಳಿಂದ ಭೂಮಿಯಲ್ಲಿ ಉಪ್ಪಿನಾಂಶ ಹೆಚ್ಚುತ್ತಿದೆ. ಮುಂಬರುವ ದಿನಗಳಲ್ಲಿ ರೈತರ ಭೂಮಿ ಬಂಜರಾಗದಂತೆ ನೋಡಿಕೊಳ್ಳುವ ಮಹತ್ವದ ಜವಾಬ್ದಾರಿ ಬಗ್ಗೆ ಕೃಷಿ ಇಲಾಖೆ ಗಮನ ಹರಿಸಬೇಕಾಗಿದೆ. ಆದ ಕಾರಣ ರೈತರಿಗೆ ಸಿರಿಧಾನ್ಯ ಬೆಳೆಯುವಂತೆ ಅರಿವು ಮೂಡಿಸಬೇಕು. ತಾಲೂಕಿನಲ್ಲಿ ಹೆಚ್ಚುತ್ತಿರುವ ಸವಳು-ಜವಳು ಬಗ್ಗೆ ಕೃಷಿ ಇಲಾಖೆ ಮತ್ತು ಕಾಡಾ ಇಲಾಖೆಯಿಂದ ಜಂಟಿ ಸಮೀಕ್ಷೆ ಮಾಡಿ ಅದರ ನಿವಾರಣೆಗೆ ಸಂಬಂಧಪಟ್ಟ ಇಲಾಖೆಗೆ ವರದಿ ಸಲ್ಲಿಸುವಂತೆ ಶಾಸಕರು ಕೃಷಿ ಸಹಾಯಕ ನಿರ್ದೇಶಕ ನಜೀರ್ ಅಹ್ಮಮದ್‌ಗೆ ಸೂಚಿಸಿದರು.
ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡ ಬಸವರಾಜ, ತಹಸೀಲ್ದಾರ್ ಅರುಣ ದೇಸಾಯಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಸೇರಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ಇದ್ದರು.