ಪೋಲಿಯೋ ಮುಕ್ತ ಭಾರತವನ್ನಾಗಿಸುವ ನಿಟ್ಟಿನಲ್ಲಿ ನಡೆಯುವ ಈ ಬೃಹತ್ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು.

ಕುಂದಗೋಳ:

ತಾಲೂಕಿನಾದ್ಯಂತ ಡಿ. 21ರಿಂದ 24ರ ವರೆಗೆ ಪಲ್ಸ್ ಪೋಲಿಯೋ ಅಭಿಯಾನ ನಡೆಯುತ್ತಿದ್ದು, ಅಧಿಕಾರಿಗಳು, ಟಾಸ್ಕ್‌ ಫೋರ್ಸ್‌ ಸಮಿತಿ ಸದಸ್ಯರು ಯಶಸ್ವಿಗೊಳಿಸುವಂತೆ ತಹಸೀಲ್ದಾರ್‌ ರಾಜು ಮಾವರಕರ್‌ ಹೇಳಿದರು.

ಪಟ್ಟಣದ ತಹಸೀಲ್ದಾರ್‌ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಸಿದ್ಧತೆ ಹಾಗೂ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಪೋಲಿಯೋ ಮುಕ್ತ ಭಾರತವನ್ನಾಗಿಸುವ ನಿಟ್ಟಿನಲ್ಲಿ ನಡೆಯುವ ಈ ಬೃಹತ್ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂಪೂರ್ಣ ಸಹಕಾರ ನೀಡುವ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

​ಕಾರ್ಯಕ್ರಮದ ಕುರಿತು ಆರೋಗ್ಯ ನಿರೀಕ್ಷಣಾ ಅಧಿಕಾರಿ ವೀರೇಶ್ ಅಂಗಡಿ ಮಾತನಾಡಿ, ಡಿ. 21ರಿಂದ ಪಲ್ಸ್ ಪೋಲಿಯೋ ಅಭಿಯಾನ ಜರುಗಲಿದ್ದು, ತಾಲೂಕಿನ ಒಟ್ಟು 59 ಹಳ್ಳಿಗಳಲ್ಲಿ ಈ ಲಸಿಕಾ ಪ್ರಕ್ರಿಯೆ ನಡೆಯಲಿದೆ. ಐದು ವರ್ಷದೊಳಗಿನ ಒಟ್ಟು 13,648 ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿ ತಾಲೂಕಿನಾದ್ಯಂತ ಒಟ್ಟು 99 ಲಸಿಕಾ ಬೂತ್‌ಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 396 ಸದಸ್ಯರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವಿವರಿಸಿದರು.

​ತಾಲೂಕು ಆರೋಗ್ಯ ಅಧಿಕಾರಿ ಡಾ. ರಾಜೇಂದ್ರಗೌಡ್ರ ಮಾತನಾಡಿದರು. ಈ ವೇಳೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.