ಶ್ರೀಗಳ ಜನ್ಮದಿನ ರಾಜ್ಯ ಸರ್ಕಾರವು ಪ್ರತಿ ವರ್ಷ ಆ.1ರಂದು ವ್ಯಸನ ಮುಕ್ತ ದಿನವನ್ನಾಗಿ ಆಚರಣೆ ಮಾಡುತ್ತಿದ್ದು,ಈ ದಿನಾಚರಣೆ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗಬೇಕಿದೆ

ಕೊಪ್ಪಳ: ಮಹಾಂತ ಶಿವಯೋಗಿ ಸ್ವಾಮೀಜಿ ಜನ್ಮ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಆ.1ರಂದು ಆಚರಿಸುವ ವ್ಯಸನ ಮುಕ್ತ ದಿನಾಚರಣೆಯನ್ನು ಜಿಲ್ಲಾ ಕೇಂದ್ರ ಮತ್ತು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅಚ್ಚುಕಟ್ಟಾಗಿ ಆಚರಣೆ ಮಾಡಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಹಿನ್ನೆಲೆ ವ್ಯಸನಮುಕ್ತ ದಿನಾಚರಣೆಯ ಕುರಿತು ಗುರುವಾರ ಸಂಜೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಾಂತ ಶಿವಯೋಗಿಗಳು ವ್ಯಸನಮುಕ್ತ ಆಂದೋಲನದ ಹರಿಕಾರರಾಗಿದ್ದರು. ಶ್ರೀಗಳ ಜನ್ಮದಿನ ರಾಜ್ಯ ಸರ್ಕಾರವು ಪ್ರತಿ ವರ್ಷ ಆ.1ರಂದು ವ್ಯಸನ ಮುಕ್ತ ದಿನವನ್ನಾಗಿ ಆಚರಣೆ ಮಾಡುತ್ತಿದ್ದು,ಈ ದಿನಾಚರಣೆ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗಬೇಕಿದೆ. ಹಾಗಾಗಿ ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರಣೆ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಬೇಕು ಎಂದರು.

ವ್ಯಸನ ಮುಕ್ತ ದಿನಾಚರಣೆ ಆ.1ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಲು ಯೋಜಿಸಿದ್ದು, ವೇದಿಕೆಯ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಬೇಕು. ಕಾಲೇಜು ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತೆ ನೋಡಿಕೊಳ್ಳಬೇಕು ಎಂದರು.

ಡಾ. ಮಹಾಂತ ಶಿವಯೋಗಿಗಳ ವಿಚಾರಗಳ ಜತೆಗೆ ಮಧ್ಯಪಾನ, ಮಾದಕದ್ರವ್ಯ ಮತ್ತು ತಂಬಾಕು ಸೇವೆನೆಯಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿ ಯುವಜನರಿಗೆ ತಿಳಿಸುವ ದಿಶೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಿ ವಿಜೇತರಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವ್ಯಸನಗಳಿಂದಾಗುವ ದುಷ್ಪರಿಣಾಮ ಹಾಗೂ ಕಾನೂನು ಮತ್ತು ಪರಿಹಾರ ವಿಷಯಗಳ ಬಗ್ಗೆ ಉಪನ್ಯಾಸ ಏರ್ಪಡಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ ಸಭೆಗೆ ಸಲಹೆ ಮಾಡಿದರು.

ಮಹಾಂತ ಶಿವಯೋಗಿಗಳ ಕುರಿತ ಉಪನ್ಯಾಸ ಏರ್ಪಡಿಸಲು ಜಾಗತಿಕ ಲಿಂಗಾಯತ ಮಹಾಸಭಾದ ಡಾ. ಸಂಗಮೇಶ ಕಲಹಾಳ ಸಭೆಗೆ ಸಲಹೆ ಮಾಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ‌ ಹೊಸಮನಿ ಮಾತನಾಡಿದರು. ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಹನುಮೇಶ ಕಲ್ಮಂಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ್, ಡಾ.‌ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎನ್.ಪುಷ್ಪಲತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಎ. ಬಸವರಾಜ, ಮೈ ಭಾರತನ ಜಿಲ್ಲಾ ಯುವ ಅಧಿಕಾರಿ ಮೇಘಾ ಜಿ.ಕೆ., ಪದವಿ ಪೂರ್ವ ಶಿಕ್ಷಣ ಇಲಾಖೆಯ ರಮೇಶ ಎಂ., ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮಾಲೋಚಕ ಸಂಗಪ್ಪ ಮಮಟಗೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಾರ್ತಾ ಇಲಾಖೆಯ ಸಿಬ್ಬಂದಿ ಇತರರಿದ್ದರು.