ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ

| Published : Feb 11 2024, 01:49 AM IST

ಸಾರಾಂಶ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂಬರಲಿರುವ ಮಹಾ ಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂಬರಲಿರುವ ಮಹಾ ಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಲೆ ಮಹದೇಶ್ವರ ಬೆಟ್ಟದ ಲೋಕೋಪಯೋಗಿ ಇಲಾಖೆಯ ತಪೋಭವನ ಸಭಾಂಗಣದಲ್ಲಿ ಮಹಾಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಾಶಿವರಾತ್ರಿ ಜಾತ್ರೆಗೆ ಲಕ್ಷಾಂತರ ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡಬೇಕು. ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕು ಎಂದರು. ಭಕ್ತಾಧಿಗಳಿಗೆ ನೆರಳಿನ ವ್ಯವಸ್ಥೆ ಮಾಡಬೇಕು. ತುರ್ತು ಸಂದರ್ಭಗಳಲ್ಲಿ ಅವಶ್ಯವಿರುವ ಕಡೆಗಳಲ್ಲಿ ನೆರಳು ಮತ್ತು ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಖಾಯಂ ಶೌಚಾಲಯಗಳ ಜೊತೆಗೆ ತಾತ್ಕಾಲಿಕ ಶೌಚಾಲಯಗಳನ್ನು ಅಳವಡಿಸಬೇಕು ಎಂದು ಸಚಿವರು ತಿಳಿಸಿದರು.ಜಾತ್ರೆ ಸಂದರ್ಭದಲ್ಲಿ ಹೆಚ್ಚು ಭಕ್ತರು ಬರುವುದರಿಂದ ಸ್ವಚ್ಚತಾ ನಿರ್ವಹಣೆಗೆ ಹೆಚ್ಚು ಪೌರಕಾರ್ಮಿಕರನ್ನು ನಿಯೋಜಿಸಿಕೊಂಡು ಪಾಳಿಯ ಮೇಲೆ ಸ್ವಚ್ಚತಾ ಕಾರ್ಯ ನಿರ್ವಹಣೆಯಾಗಬೇಕು. ಕ್ಷೇತ್ರದಲ್ಲಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ತಾಳುಬೆಟ್ಟದಿಂದಲೇ ಪ್ಲಾಸ್ಟಿಕ್ ವಸ್ತುಗಳನ್ನು ತರದಂತೆ ಭಕ್ತಾಧಿಗಳಿಗೆ ಮನವರಿಕೆ ಮಾಡಿಕೊಡಬೇಕು. ಪ್ಲಾಸ್ಟಿಕ್ ನಿಯಂತ್ರಣದ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಾತ್ರೆ ನಡೆಯುವ ದಿನಗಳಲ್ಲಿ ವಿಶೇಷ ದಾಸೋಹ ವ್ಯವಸ್ಥೆ ಮಾಡಿ, ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಿ ಕೆಎಸ್ಆರ್‌ಟಿಸಿ ಬಸ್ಸುಗಳು, ಇನ್ನಿತರ ಲಘು ವಾಹನಗಳಿಗೂ ನಿಗದಿತ ಸ್ಥಳ ಇರಬೇಕು. ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚು ಜನರು ಆಗಮಿಸುವ ಹಿನ್ನೆಲೆಯಲ್ಲಿ ಕೆಎಸ್ಆರ್‌ಟಿಸಿ ವತಿಯಿಂದ ಹೆಚ್ಚು ಸಂಖ್ಯೆಯಲ್ಲಿ ಬಸ್‌ಗಳ ವ್ಯವಸ್ಥೆ ಮಾಡಿ ಅಧಿಕಾರಿಗಳು ಭಕ್ತಾಧಿಗಳಿಗೆ ಬಸ್ಸಿನ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದರು. ಭದ್ರತೆಗಾಗಿ ಪೊಲೀಸ್ ನಿಯೋಜನೆ, ವಿದ್ಯುತ್ ದೀಪಾಲಂಕಾರ, ನಿರಂತರ ವಿದ್ಯುತ್ ಪೂರೈಕೆ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಇತರೆ ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ತಿಳಿಸಿದರು. ಸಾಲೂರು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಜೀ, ಶಾಸಕ ಎಂ.ಆರ್. ಮಂಜುನಾಥ್, ಡೀಸಿ ಶಿಲ್ಪಾನಾಗ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಎಎಸ್‌ಪಿ ಉದೇಶ, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೋಷ್‌ಕುಮಾರ್, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ತಹಸೀಲ್ದಾರ್ ಮಂಜುಳ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.