ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ-ಜಿಲ್ಲಾಧಿಕಾರಿ ವೈಶಾಲಿ

| Published : Jan 13 2024, 01:32 AM IST

ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ-ಜಿಲ್ಲಾಧಿಕಾರಿ ವೈಶಾಲಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾ ಮಟ್ಟದಲ್ಲಿ ಜ. ೨೬ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ವೈಶಾಲಿ. ಎಂ. ಎಲ್. ಸೂಚನೆ ನೀಡಿದರು.

ಗದಗ: ಜಿಲ್ಲಾ ಮಟ್ಟದಲ್ಲಿ ಜ. ೨೬ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ವೈಶಾಲಿ. ಎಂ. ಎಲ್. ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾಮಟ್ಟದ ಗಣರಾಜ್ಯೋತ್ಸವ ದಿನಾಚರಣೆಗೆ ವಿವಿಧ ಸಮಿತಿ ರಚಿಸಲಾಗಿದ್ದು, ಸಮಿತಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ಗಣರಾಜ್ಯೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು. ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿ ಮತ್ತು ಶಾಲಾ ಕಾಲೇಜುಗಳ ಸಿಬ್ಬಂದಿ ತಮ್ಮ ಕಾರ್ಯಾಲಯದ ಧ್ವಜಾರೋಹಣವನ್ನು ಬೆಳಗ್ಗೆ ೭.೩೦ರೊಳಗೆ ನೆರವೇರಿಸಿ ೮.೩೦ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬೇಕು. ಅಂದು ಬೆಳಗ್ಗೆ ೯ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಧ್ವಜಾರೋಹಣ ಜರುಗಲಿದ್ದು, ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಹಾಗೂ ಅತಿಥಿಗಳಿಗೆ ಆಸನದ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು. ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದ ಕುರಿತು ಮುದ್ರಿಸಲಾಗುವ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದ ಪ್ರಕಾರ ಮುದ್ರಿಸಿ ಗಣ್ಯರುಗಳಿಗೆ ಸಾಕಷ್ಟು ಸಮಯದ ಮುಂಚಿತವಾಗಿ ತಲುಪಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನಿಗಾವಹಿಸಲು ನಿರ್ದೇಶನ ನೀಡಿದರು.

ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ವ್ಯವಸ್ಥೆ, ಮೂಲಭೂತ ಸೌಕರ್ಯಗಳ ವ್ಯವಸ್ಥೆ, ವೇದಿಕ ನಿರ್ಮಾಣ ಕುರಿತ ಮುಂತಾದ ವಿಷಯಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ, ತಹಸೀಲ್ದಾರ್‌ ಶ್ರೀನಿವಾಸಮೂರ್ತಿ ಕುಲಕರ್ಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟಪ್ಪನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಡ್ಡೇರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.