ಸಾರಾಂಶ
ಪೂರ್ವಭಾವಿ ಸಭೆಯ ಅಪರ ಜಿಲ್ಲಾಧಿಕಾರಿ
ಕನ್ನಡಪ್ರಭ ವಾರ್ತೆ ಕೊಪ್ಪಳಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಸೆ. 18ರಂದು ಆಚರಿಸಲಾಗುವ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೂಚಿಸಿದರು.
ಜಯಂತಿ ಆಚರಣೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳು, ತಾಲೂಕು ಕೇಂದ್ರಗಳಲ್ಲಿ ಮತ್ತು ತಾಲೂಕಾ ಕಚೇರಿ, ಗ್ರಾಮ ಪಂಚಾಯಿತಿಗಳಲ್ಲಿ, ಶಾಲಾ, ಕಾಲೇಜುಗಳ ವಸತಿ ನಿಲಯಗಳಲ್ಲಿ ವಿಶ್ವಕರ್ಮ ಜಯಂತಿಯನ್ನು ಕಡ್ಡಾಯವಾಗಿ ಆಚರಣೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲಾ ಕೇಂದ್ರದಲ್ಲಿ ಜಯಂತಿ ಆಚರಣೆಗಾಗಿ ಸಂಬಂಧಿಸಿದ ಇಲಾಖೆಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು. ಸೆ.18ರ ಬೆಳಗ್ಗೆ 09 ಗಂಟೆಗೆ ನಗರದ ಸಿರಸಪ್ಪಯ್ಯನ ಮಠದ ಆವರಣದಿಂದ ಗಡಿಯಾರ ಕಂಬ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ವಿಶ್ವಕರ್ಮರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮೆರವಣಿಗೆ ಸಾಗುವ ಮಾರ್ಗ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆ ಕಲ್ಪಿಸಬೇಕು. ವೇದಿಕೆ ಅಲಂಕಾರ, ಗಣ್ಯರಿಗೆ ಪುಸ್ತಕ ವಿತರಣೆ, ಪೂಜೆಗೆ ಹೂವು, ಹಾರಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒದಗಿಸಬೇಕು. ಪೊಲೀಸ್ ಇಲಾಖೆಯಿಂದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಬೇಕು. ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ, ಗಣ್ಯರ ಆಹ್ವಾನಕ್ಕೆ ತಹಶೀಲ್ದಾರರು ಕ್ರಮ ವಹಿಸಬೇಕು. ಉಳಿದಂತೆ ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಜಯಂತಿ ಆಚರಣೆಗೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು. ವೇದಿಕೆ ಕಾರ್ಯಕ್ರಮದಲ್ಲಿ ನಾಡಗೀತೆಗಾಗಿ ಕಲಾವಿದರು ಹಾಗೂ ಉಪನ್ಯಾಸ ನೀಡಲು ಉಪನ್ಯಾಸಕರನ್ನು ಆಯ್ಕೆ ಮಾಡಿ ಅವರನ್ನು ಆಹ್ವಾನಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸೆ.18ರಂದು ಆಚರಣೆಗೆ ನಿರ್ಧಾರ:ಸೆ. 17ರಂದು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಡೆಯುವ ಹಿನ್ನೆಲೆ ವಿಶ್ವಕರ್ಮ ಜಯಂತಿಯನ್ನು ಸೆ. 18ರಂದು ಆಚರಣೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಎಲ್ಲರೂ ಅನುಕೂಲ ಮಾಡಿಕೊಡಬೇಕು ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಸಮಾಜದ ಮುಖಂಡರಾದ ನಾಗೇಶ ಕುಮಾರ್, ದೇವಪ್ಪ ಬಡಿಗೇರ್, ಎ. ಪ್ರಕಾಶ, ರುದ್ರಪ್ಪ ಬಡಿಗೇರ್, ಬ್ರಹ್ಮನಾಂದ ಬಡಿಗೇರ್, ಮೌನೇಶ್ ಬಡಿಗೇರ್ ಸೇರಿದಂತೆ ಇನ್ನೂ ಪ್ರಮುಖರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.