ಪ್ರಕೃತಿ ವಿಕೋಪ ಸಂದರ್ಭ ಸುರಕ್ಷತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿ: ಡಾ.ಎಂ.ಟಿ. ರೇಜು

| Published : May 30 2024, 12:52 AM IST

ಪ್ರಕೃತಿ ವಿಕೋಪ ಸಂದರ್ಭ ಸುರಕ್ಷತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿ: ಡಾ.ಎಂ.ಟಿ. ರೇಜು
Share this Article
  • FB
  • TW
  • Linkdin
  • Email

ಸಾರಾಂಶ

ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ. ರೇಜು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ಮಳೆ, ಗಾಳಿ, ಸಿಡಿಲು, ಪ್ರಕೃತಿ ವಿಕೋಪಗಳಿಂದ ಜೀವಹಾನಿ ಉಂಟಾಗದಂತೆ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಇಂತಹ ಸಂದರ್ಭದಲ್ಲಿ ಜನಸಾಮಾನ್ಯರು ಸುರಕ್ಷತೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ. ರೇಜು ಸೂಚನೆ ನೀಡಿದರು.

ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ಇತರೆ ಇಲಾಖೆಗಳ ಸಹಯೋಗದೊಂದಿಗೆ ತೆರವುಗೊಳಿಸಬೇಕು. ರಸ್ತೆ ಮೇಲೆ ಮರ ಬಿದ್ದಾಗ ಕೂಡಲೇ ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಈಗಾಗಲೇ 876 ವಿದ್ಯುತ್ ಕಂಬಗಳು ಗಾಳಿ ಮಳೆಗೆ ಉರುಳಿ ಬಿದ್ದಿವೆ. ಈ ಪ್ರಮಾಣ ಹೆಚ್ಚಾಗಿದ್ದು, ಇದಕ್ಕೆ ಕಾರಣವನ್ನು ಕಂಡುಕೊಳ್ಳಬೇಕು. ಒಂದೊಮ್ಮೆ ಗುಣಮಟ್ಟದ ಕೊರತೆಯಿಂದ ಆಗಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಪೂರೈಕೆ ವ್ಯತ್ಯಯವಾದಲ್ಲಿ ತಕ್ಷಣ ಸರಿಪಡಿಸಿ, ನಿರ್ವಹಣೆ ಕಾರ್ಯ ತುರ್ತಾಗಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಅನ್ನಭಾಗ್ಯ ಯೋಜನೆಯಡಿ ಕಳೆದ ಏಪ್ರಿಲ್, ಮೇ ಮಾಸಗಳಲ್ಲಿ ಅಕ್ಕಿ ವಿತರಣೆ ಮಾಡಿರುವ ಬಗ್ಗೆ ಹಾಗೂ ಫಲಾನುಭವಿಗಳ ಖಾತೆಗೆ ಹಣ ವಿತರಣೆ ಆಗದಿರುವ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ಡಿ.ಬಿ.ಟಿ. ಮಾಡಲು ಕ್ರಮ ವಹಿಸುವಂತೆ ಮತ್ತು ಯುವನಿಧಿ ಯೋಜನೆಯಡಿ ಪದವೀಧರರ ಖಾತೆಗೆ ಹಣ ವರ್ಗಾವಣೆ ಮಾಡಲು ಕ್ರಮ ವಹಿಸುವಂತೆ ತಿಳಿಸಿದರು.

ಅಂಗನವಾಡಿ ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಣೆಯಲ್ಲಿ ಸ್ಥಳೀಯವಾಗಿ ಹೆಸರುಕಾಳು ಹಾಗೂ ಚಿಕ್ಕಿಯ ಬಗ್ಗೆ ಹೆಚ್ಚು ಬೇಡಿಕೆ ಇದೆ. ಅದನ್ನು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಮಾತನಾಡಿ, ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ, ಪ್ರಕೃತಿ ವಿಕೋಪ ನಿರ್ವಹಣೆಗೆ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳು, ಮುಂಗಾರು ಹಂಗಾಮಿಗೆ ರಸಗೊಬ್ಬರ ದಾಸ್ತಾನು, ಬಿತ್ತನೆ ಬೀಜ ರೈತರಿಗೆ ಸರಬರಾಜು ಮಾಡಲು ಕೈಗೊಂಡಿರುವ ಕ್ರಮಗಳು ಸೇರಿದಂತೆ ಮತ್ತಿತರ ವಿವರಗಳನ್ನು ಸವಿಸ್ತಾರವಾಗಿ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಸಹಾಯಕ ಕಮೀಷನರ್ ರಶ್ಮಿ, ವನ್ಯಜೀವಿ ವಿಭಾಗದ ಡಿಎಫ್‌ಓ ಶಿವರಾಮ ಎಂ. ಬಾಬು, ಡಿಎಫ್‌ಓ ಗಣಪತಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರ್‌ಗಳು ಉಪಸ್ಥಿತರಿದ್ದರು.