ಹಾವೇರಿ: ಸುಪ್ರೀಂಕೋರ್ಟ್ ಆದೇಶದನ್ವಯ ಮಾರ್ಗಸೂಚಿ ಅನುಸಾರ ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯಗಳನ್ನು ಕಡ್ಡಾಯವಾಗಿ ಪಾಲಿಸಿ ಬೀದಿ ನಾಯಿಗಳ ಸಂತಾನ ಹರಣ ಕಾರ್ಯಕ್ರಮದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ, ಜಿಲ್ಲಾ ಎಸ್‌ಪಿಸಿಎ ಸಭೆ, ಜಿಲ್ಲಾ ಮಟ್ಟದ ಮೇವು ಅಭಿವೃದ್ದಿ ಕಾರ್ಯಪಡೆ ಸಮಿತಿ ಸಭೆ, ಸಂಚಾರಿ ಪಶುಸಂಜೀವಿನಿ ವಾಹನಗಳ 3 ಮತ್ತು 4ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇನ್ನೂ ಅಲ್ಲಲ್ಲಿ ಬೀದಿ ನಾಯಿಗಳ ಹಾವಳಿಯ ಬಗ್ಗೆ ವರದಿಗಳಾಗುತ್ತಿದ್ದು, ನಗರ ಸ್ಥಳೀಯ ಸಂಸ್ಥೆಯವರು ತಮ್ಮ ವ್ಯಾಪ್ತಿಯಲ್ಲಿ ಬರುವ ಬೀದಿನಾಯಿಗಳ ಹಾವಳಿ ತಪ್ಪಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಅದೇ ರೀತಿ ಗ್ರಾಮೀಣ ಸ್ಥಳೀಯ ಸಂಸ್ಥೆಯವರು ಕೂಡ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಕ್ರಮಕೈಗೊಂಡು ಸಾರ್ವಜನಿಕರಿಗೆ ಅನುಕೂಲಕರವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಜಿಲ್ಲೆಯಲ್ಲಿ ಒಟ್ಟು 9 ಪಶು ಸಂಜೀವಿನಿ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ರೈತರ ಮನೆ ಬಾಗಿಲಿಗೆ ಚಿಕಿತ್ಸೆ ಕಾರ್ಯಕೈಗೊಳ್ಳುವುದು ಒಂದು ಉತ್ತಮ ಕಾರ್ಯಕ್ರಮವಾಗಿರುತ್ತದೆ. ಪ್ರಸ್ತುತ ಜಿಲ್ಲೆಯಲ್ಲಿನ 4 ಪಶು ಸಂಜೀವಿನಿ ವಾಹನಗಳಿಗೆ ಪಶುವೈದ್ಯರ ಹುದ್ದೆ ಖಾಲಿ ಇದ್ದು, ಹಾವೇರಿ ಜಿಲ್ಲೆಯವರೇ ಆದ ಪಶುವೈದ್ಯಕೀಯ ಪದವಿ ಪಡೆದ ಅಭ್ಯರ್ಥಿಗಳನ್ನು ಗುರುತಿಸಿ ಈ ಖಾಲಿ ಹುದ್ದೆಗಳಿಗೆ ಕೂಡಲೇ ನೇಮಕ ಮಾಡಿಕೊಳ್ಳಲು ಏಜೆನ್ಸಿಯ ಪ್ರತಿನಿಧಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿರುವ ಸರ್ಕಾರಿ ಗೋಶಾಲೆ ಮತ್ತು ಖಾಸಗಿ ಗೋಶಾಲಗೆಳ ಬಗ್ಗೆ ಮಾಹಿತಿ ಪಡೆದು ಪ್ರಗತಿ ಪರಿಶೀಲನೆ ನಡೆಸಿದರು.ಜಿಪಂ ಸಿಇಒ ರುಚಿ ಬಿಂದಲ್ ಮಾತನಾಡಿ, ಈ ಕಾರ್ಯಕ್ರಮದಿಂದ ರೈತರಿಗೆ ಬಹಳ ಅನುಕೂಲವಾಗಿದ್ದು, ಈ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲೆಯ ಎಲ್ಲ ರೈತರಿಗೆ ಕರೆ ನೀಡಿದರು. ಗ್ರಾಮೀಣ ಸ್ಥಳೀಯ ಸಂಸ್ಥೆಯವರು ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಸಂಸ್ಥೆಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ, ಬೀದಿ ನಾಯಿಗಳ ಮಾಹಿತಿ ನೀಡಲು ತಿಳಿಸಲಾಗಿತ್ತು. ಎಲ್ಲ ತಾಲೂಕಿನವರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಮಾಹಿತಿ ನೀಡಿದ್ದಾರೆ ಎಂದು ಉಪನಿರ್ದೇಶಕ ಡಾ. ಶಿವಯೋಗಿ ಬಿ. ಯಲಿ ಅವರು ಮಾಹಿತಿ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಯೋಜನಾ ನಿರ್ದೇಶಕ ಚಂದ್ರಪ್ಪ, ಡಾ.ಕಿರಣ ಕೊಪ್ಪದ ಮುಖ್ಯ ಪಶುವೈದ್ಯಾಧಿಕಾರಿಗಳು, ಎಲ್ಲಾ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು, ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಎಲ್ಲ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಾಲಿಕ್ಲಿನಿಕ್‌ನ, ಖಾಸಗಿ ಗೋಶಾಲೆಯ ಮಾಲೀಕರು, ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯರುಗಳು ಹಾಗೂ ಪಶುಸಂಜೀವಿನಿ ಕಾರ್ಯಕ್ರಮದ ಪ್ರತಿನಿಧಿಗಳು ಉಪಸ್ಥಿತರಿದ್ದರು.