ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ನಿಗದಿಯಾಗಿರುವ ಕಾರ್ಯಕ್ರಮವನ್ನು ಕಾಲ ಮಿತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ವಿವಿಧ ಇಲಾಖೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಇಂತಿಷ್ಟು ಹಣ ಹಾಗೂ ಸೌಲಭ್ಯ ನಿಗದಿಮಾಡಿದ್ದು, ಪ್ರಗತಿ ಸಾಧಿಸಿ ವರದಿ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕೃಷಿ ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಾಲಾ ಶಿಕ್ಷಣ, ಯುವ ಸಬಲೀಕರಣ ಮತ್ತು ಕ್ರೀಡೆ, ಕೈಮಗ್ಗ ಮತ್ತು ಜವಳಿ, ಕಾರ್ಮಿಕ, ಲೋಕೋಪಯೋಗಿ, ಸ್ಥಳೀಯ ಸಂಸ್ಥೆಗಳು, ವಿವಿಧ ಎಂಜಿನಿಯರ್ ವಿಭಾಗಗಳು, ಹೀಗೆ ಹಲವು ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ಸಮುದಾಯ ಮತ್ತು ವೈಯಕ್ತಿಕ ಕಾರ್ಯಕ್ರಮಗಳಿದ್ದು, ಅವುಗಳ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನವನ್ನು ಯಾವುದೇ ಕಾರಣಕ್ಕೂ ವಾಪಸ್ಸು ಕಳುಹಿಸಬಾರದು. ಅರ್ಹರಿಗೆ ಸೌಲಭ್ಯ ತಲುಪಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಸಚಿನ್, ಸಹಕಾರ ಇಲಾಖೆಯ ಉಪ ನಿಬಂಧಕರಾದ ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ, ಜಿ.ಪಂ. ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ, ಪುರಸಭೆ ಮುಖ್ಯ ಅಧಿಕಾರಿಗಳಾದ ನಾಚಪ್ಪ, ಕೃಷ್ಣಪ್ರಸಾದ್, ಜಿಲ್ಲಾ ಬಾಲ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕರಾದ ಶಿರಾಝ್ ಅಹಮದ್, ಪ್ರವಾಸೋದ್ಯಮ ಇಲಾಖೆಯ ಜತಿನ್, ವೈದ್ಯಕೀಯ ಶಿಕ್ಷಣ ಇಲಾಖೆ ಹೀಗೆ ವಿವಿಧ ಇಲಾಖೆ ಅಧಿಕಾರಿಗಳು ಇತರರು ಪ್ರಗತಿ ಸಾಧನೆ ಬಗ್ಗೆ ಮಾಹಿತಿ ನೀಡಿದರು.