ಬೀಜ, ಗೊಬ್ಬರ ವಿತರಣೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಿ

| Published : May 24 2024, 12:46 AM IST

ಸಾರಾಂಶ

ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಸೂಚನೆ ನೀಡಿದ್ದು, ಬೀಜ ಗೊಬ್ಬರ ವ್ಯವಸ್ಥೆ ಮಾಡಿಕೊಳ್ಳುವಂತೆ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮುಂಗಾರು ಹಂಗಾಮಿಗೆ ಬಿತ್ತನೆ ಬೀಜಗಳ ಸಮರ್ಪಕ ವಿತರಣೆಗೆ ಕೃಷಿ ಇಲಾಖೆಯ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಳೆಗಾಲ ಆರಂಭಗೊಳ್ಳಲಿರುವುದರಿಂದ ಬೀಜ ವಿತರಣಾ ಕೇಂದ್ರಗಳಿಗೆ ರೈತರು ಏಕಕಾಲಕ್ಕೆ ಆಗಮಿಸಿದಾಗ ಬೀಜ, ಗೊಬ್ಬರ ವಿತರಣೆಯಲ್ಲಿ ಯಾವುದೇ ರೀತಿಯ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು. ಸರದಿಯ ಪ್ರಕಾರ ಟೋಕನ್ ವಿತರಿಸುವ ಮೂಲಕ ಅನಗತ್ಯ ಗದ್ದಲ, ಗೊಂದಲಗಳಿಗೆ ಕಡಿವಾಣ ಹಾಕಬೇಕು. ಅಗತ್ಯವಿದ್ದರೆ ಹೆಚ್ಚುವರಿ ವಿತರಣಾ ಕೇಂದ್ರಗಳನ್ನು ಆರಂಭಿಸಬೇಕು. ಆಯಾ ಬೀಜ ವಿತರಣಾ‌ ಕೇಂದ್ರಗಳಲ್ಲಿ ಲಭ್ಯವಿರುವ ಬೀಜ ದಾಸ್ತಾನು ಕುರಿತು ರೈತರಿಗೆ ಮಾಹಿತಿಯನ್ನು ನಿರಂತರವಾಗಿ ಒದಗಿಸಬೇಕು ಎಂದು ತಿಳಿಸಿದರು.

ಕಲುಷಿತ ನೀರಿನಿಂದ ಆರೋಗ್ಯ ಸಮಸ್ಯೆ ಉದ್ಭವಿಸುತ್ತಿರುವುದರಿಂದ ಕುಡಿಯುವ ನೀರು ಪೂರೈಸುವಾಗ ಕಡ್ಡಾಯವಾಗಿ ನೀರಿನ ಗುಣಮಟ್ಟವನ್ನು ಪರೀಕ್ಷೆ ನಡೆಸಬೇಕು ಎಂದು ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು. ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳು ನಿರ್ದೇಶನ ನೀಡಿರುವಂತೆ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದರೆ ತಕ್ಷಣವೇ ಕ್ರಮಕೈಗೊಳ್ಳಬೇಕು. ಜಾನುವಾರುಗಳಿಗೆ ಮೇವು, ರೈತರಿಗೆ ಬಿತ್ತನೆ ಬೀಜ, ಗೊಬ್ಬರದ ಕೊರತೆಯಾಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತರ ವಾರಸುದಾರರಿಗೆ ಯಾವುದೇ ರೀತಿಯ ವಿಳಂಬವಿಲ್ಲದೇ ಆದಷ್ಟು ಬೇಗನೇ ಪರಿಹಾರ ಒದಗಿಸಬೇಕು ಎಂದು ಉಪ ವಿಭಾಗಾಧಿಕಾರಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಡಿಸಿ ತಿಳಿಸಿದರು.

ಈ ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಮಹಾನಗರ ಪಾಲಿಕೆಯ ಆಯುಕ್ತ ಪಿ‌.ಎನ್.ಲೋಕೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ರಾಜೀವ್ ಕೂಲೇರ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

------------

ಕೋಟ್‌....

ಈ ಬಾರಿ ಮಳೆ ಜಾಸ್ತಿಯಾಗುವ ಮುನ್ಸೂಚನೆ ಇರುವುದರಿಂದ ನದಿತೀರ ಪ್ರದೇಶಗಳಲ್ಲಿ ಪ್ರವಾಹ ನಿರ್ವಹಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.

-ನಿತೇಶ್ ಪಾಟೀಲ, ಜಿಲ್ಲಾಧಿಕಾರಿ.

-------------ಕೃಷ್ಣಾನದಿಗೆ ನೀರು ಬಿಟ್ಟ ಮಹಾ ಸರ್ಕಾರ

ಬೆಳಗಾವಿ: ನೆರೆಯ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 2500 ಕ್ಯುಸೆಕ್‌ ನೀರು ಗುರುವಾರ ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಬಂದು ತಲುಪಲು ಇನ್ನೂ ನಾಲ್ಕೈದು ದಿನಗಳಾಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಥಣಿ, ರಾಯಬಾಗ, ಚಿಕ್ಕೋಡಿ, ನಿಪ್ಪಾಣಿ ಸೇರಿದಂತೆ ಇನ್ನಿತರೆ ಪ್ರದೇಶಗಳಲ್ಲಿನ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹಿನ್ನೆಲೆ, ರಾಜ್ಯ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕಿ ಶಶಿಕಲಾ ಜೊಲ್ಲೆ ಪ್ರತ್ಯೇಕವಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಕಾರಾತ್ಮವಾಗಿ ಸ್ಪಂದಿಸಿದ ಮಹಾರಾಷ್ಟ್ರ ಸರ್ಕಾರ ರಾಜಾಪೂರ ಬ್ಯಾರೇಜನಿಂದ ಕೃಷ್ಣಾ ನದಿಗೆ 2500 ಕ್ಯುಸೆಕ್‌ ನೀರು ಬಿಟ್ಟಿದೆ. ನಾಲ್ಕೈದು ದಿನಗಳಲ್ಲಿ ಹಿಪ್ಪರಗಿ ಬ್ಯಾರೇಜ್‌ಗೆ ನೀರು ಬಂದು ತಲುಪಲಿದೆ.