ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳಿ: ವೈಶಾಲಿ ಎಂ.ಎಲ್.

| Published : Jun 19 2024, 01:06 AM IST

ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳಿ: ವೈಶಾಲಿ ಎಂ.ಎಲ್.
Share this Article
  • FB
  • TW
  • Linkdin
  • Email

ಸಾರಾಂಶ

ಅತಿವೃಷ್ಟಿ ಸಂದರ್ಭ ಉಂಟಾದರೆ ನಿಭಾಯಿಸಲು ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದಾರೆ.

ಗದಗ: ಅತಿವೃಷ್ಟಿ ಸಂದರ್ಭ ಉಂಟಾದರೆ ನಿಭಾಯಿಸಲು ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜೀವಹಾನಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದಾದ ಹಾನಿಯ ಕುರಿತು ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರ ಆಸ್ತಿ-ಪಾಸ್ತಿ ಹಾನಿ ತಪ್ಪಿಸಲು ಅಗತ್ಯದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಉಂಟಾಗಬಹುದಾದ ಜಿಲ್ಲೆಯ 11 ಗ್ರಾಮಗಳು ಹಾಗೂ ನಗರ ಪ್ರದೇಶದ 14 ವಾರ್ಡ್‌ಗಳನ್ನು ಗುರುತಿಸಲಾಗಿದೆ. ಅಧಿಕ ಪ್ರಮಾಣದ ಮಳೆ ಸುರಿದಲ್ಲಿ ತಕ್ಷಣ ಅಧಿಕಾರಿಗಳು ಗುರುತಿಸಲಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣ ಕುರಿತಂತೆ ಕ್ರಮ ವಹಿಸಬೇಕು.ಜಿಲ್ಲೆಯಲ್ಲಿ ಹರಿದಿರುವ ಮಲಪ್ರಭಾ ನದಿ ಹಾಗೂ ಬೆಣ್ಣೆ ಹಳ್ಳ ಪ್ರವಾಹದಿಂದ ನರಗುಂದ ತಾಲೂಕಿನ 16 ಹಾಗೂ ರೋಣ ತಾಲೂಕಿನ 16 ಗ್ರಾಮಗಳು ಪ್ರವಾಹಕ್ಕೊಳಗಾಗುವ ಸಂಭವವಿದ್ದು, ಆ ಭಾಗದ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು ಎಂದು ಸೂಚಿಸಿದರು.

ತುಂಗಭದ್ರಾ ನದಿ ಪ್ರವಾಹದಿಂದ ಶಿರಹಟ್ಟಿ ತಾಲೂಕಿನ 10 ಹಾಗೂ ಮುಂಡರಗಿ ತಾಲೂಕಿನ 11 ಗ್ರಾಮಗಳು ಬಾಧಿತವಾಗುವ ಹಳ್ಳಿಗಳೆಂದು ಗುರುತಿಸಲಾಗಿದ್ದು, ಅಲ್ಲಿಯೂ ಅಧಿಕಾರಿಗಳು ನಿರಂತರ ನಿಗಾ ವಹಿಸುವ ಮೂಲಕ ಜೀವ ಹಾನಿ ತಡೆಗೆ ಮುಂದಾಗಬೇಕು. ಮಲಪ್ರಭಾ ಹಾಗೂ ಬೆಣ್ಣೆಹಳ್ಳ ಪ್ರವಾಹದಿಂದ ಹಾನಿಗೊಳಗಾಗುವ ಜನವಸತಿ ಪ್ರದೇಶಗಳಲ್ಲಿ ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರ ತೆರೆಯಲು ಈಗಾಗಲೇ ನರಗುಂದ ತಾಲೂಕಿನ 12, ರೋಣ ತಾಲೂಕಿನ 16 ಸ್ಥಳಗಳನ್ನು ಗುರುತಿಸಲಾಗಿದೆ. ಮುಂಡರಗಿ ತಾಲೂಕಿನ 8, ಶಿರಹಟ್ಟಿ ತಾಲೂಕಿನ 10 ಸ್ಥಳಗಳನ್ನು ಗುರುತಿಸಿದೆ. 4 ಗೋಶಾಲೆ ತೆರೆಯಲು ಸ್ಥಳ ನಿಗದಿಪಡಿಸಿ ಇಟ್ಟುಕೊಳ್ಳಲಾಗಿದೆ. ಅತಿವೃಷ್ಟಿಯಿಂದಾಗುವ ಮನೆ ಹಾಗೂ ಬೆಳೆ ಹಾನಿಗೆ ಸರ್ಕಾರದ ನಿರ್ದೇಶನದಂತೆ ಕ್ರಮ ವಹಿಸಿ ಪರಿಹಾರ ವಿತರಣೆ ಮಾಡಬೇಕು. ಅಗತ್ಯವಿದ್ದಲ್ಲಿ ಜಂಟಿ ಸಮೀಕ್ಷೆ ಮೂಲಕ ಹಾನಿಯ ಪ್ರಮಾಣ ಗುರುತಿಸಿ ಪರಿಹಾರಕ್ಕೆ ಮುಂದಾಗುವಂತೆ ಸೂಚಿಸಿದರು.

ದಿಢೀರ್ ಅತಿವೃಷ್ಟಿಯಿಂದ ಗ್ರಾಮಗಳು ಜಲಾವೃತವಾದಲ್ಲಿ ತಕ್ಷಣ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ರಕ್ಷಣಾ ಸಾಮಗ್ರಿಗಳೊಂದಿಗೆ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಮಾಡಬೇಕು. ಕಾರ್ಯಾಚರಣೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಭರತ್ ಎಸ್., ಎಡಿಸಿ ಅನ್ನಪೂರ್ಣಾ ಎಂ., ಎಸಿ ವೆಂಕಟೇಶ ನಾಯ್ಕ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ, ಲೋಕೋಪಯೋಗಿ ಇಲಾಖೆಯ ರಮೇಶ ಪಾಟೀಲ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಳ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.