ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರು
ಮಲೆ ಮಾದೇಶ್ವರನ ಬೆಟ್ಟಕ್ಕೆ ರಾಜ್ಯದ ಹಾಗೂ ವಿವಿಧ ಜಿಲ್ಲೆ ಮತ್ತು ತಮಿಳುನಾಡಿನಿಂದ ಮಹಾಲಯ ಅಮವಾಸ್ಯೆ, ದಸರಾ, ದೀಪಾವಳಿ ಜಾತ್ರೆ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಬರಲಿದ್ದು, ಯಾವುದೇ ಲೋಪದೋಷವಾಗದಂತೆ ಅಧಿಕಾರಿಗಳು ವ್ಯವಸ್ಧೆ ಕಲ್ಪಿಸಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಅವರು ಸೂಚನೆ ನೀಡಿದರು.ಮಲೆಮಾದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ, ದಸರಾ ಹಾಗೂ ದೀಪಾವಳಿ ಜಾತ್ರಾ ವಿಶೇಷ ಪ್ರಯುಕ್ತ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಾಗಮಲೆ ಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಜಾತ್ರಾ ವಿಶೇಷ ದಿನಗಳಲ್ಲಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವ ಮೂಲಕ ಭಕ್ತರಿಗೆ ದೇವರ ದರ್ಶನ ಪಡೆದು, ದಾಸೋಹ ಸವಿಯಲು ಉತ್ತಮ ವಾತಾವರಣ ನಿರ್ಮಾಣ ಮಾಡಲು ಸೂಚನೆ ನೀಡಿದರು.ದಾಸೋಹ ವ್ಯವಸ್ಥೆ: ಜಾತ್ರಾ ಹಾಗೂ ಹಬ್ಬದ ವಿಶೇಷ ದಿನಗಳಲ್ಲಿ ಮಲೆ ಮಾದೇಶ್ವರನ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬಂದು ಹೋಗುವ ಈ ಧಾರ್ಮಿಕ ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ದಾಸೋಹ ವ್ಯವಸ್ಥೆಯನ್ನು ಗುಣಮಟ್ಟದಿಂದ ನೀಡುವಂತೆ ಜೊತೆಗೆ ಸ್ವಚ್ಛತೆಗೂ ಸಹ ಆದ್ಯತೆ ನೀಡುವಂತೆ ಸಲಹೆ ನೀಡಿದರು. ಭಕ್ತಾದಿಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆ ದೋರದಂತೆ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.
ದೇವರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ:ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ವಿಶೇಷ ದೇವರ ದರ್ಶನ ಸೌಲಭ್ಯ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಲಕ್ಷಾಂತರ ಭಕ್ತರು ಬಂದು ಹೋಗುವ ಈ ಧಾರ್ಮಿಕ ಕ್ಷೇತ್ರದಲ್ಲಿ ಬರುವಂತಹ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಸಹ ಕಲ್ಪಿಸುವ ಮೂಲಕ ಕ್ರಮ ಕೈಗೊಳ್ಳಬೇಕು. ಜೊತೆಗೆ ಆರಕ್ಷಕ ಠಾಣೆಯ ಮುಂಭಾಗ ರಸ್ತೆಯಲ್ಲಿ ಗಣ್ಯ ವ್ಯಕ್ತಿಗಳ ವಾಹನ ಪಾರ್ಕಿಂಗ್ ಸೌಲಭ್ಯ ವ್ಯವಸ್ಥೆ ಕಲ್ಪಿಸಬೇಕು. ತಮಿಳುನಾಡಿನಿಂದ ಬರುವ ಸಾರಿಗೆ ವಾಹನಗಳನ್ನು ಪಾಲಾರ ರಸ್ತೆಯಲ್ಲಿರುವ ಪಾರ್ಕಿಂಗ್ ಮೈದಾನದಲ್ಲಿ ವ್ಯವಸ್ಥ ಕಲ್ಪಿಸಿ ಭಕ್ತಾದಿಗಳಿಗೆ ಲಘು ವಾಹನಗಳಿಗೆ ಆಸ್ಪತ್ರೆ ಮುಂಭಾಗದಲ್ಲಿರುವ ಖಾಲಿ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.
ಸಾರಿಗೆ ವ್ಯವಸ್ಥೆ ಕಲ್ಪಿಸಿ: ಮಲೆ ಮಾದೇಶ್ವರನ ಬೆಟ್ಟಕ್ಕೆ ರಾಜ್ಯದ ನಾನಾ ಭಾಗಗಳಿಂದ ಬರುವ ಭಕ್ತಾದಿಗಳಿಗೆ ಅನುಕೂಲಕಲ್ಪಿಸುವ ನಿಟ್ಟಿನಲ್ಲಿ ಹನೂರು, ಕೊಳ್ಳೇಗಾಲ, ಗುಂಡ್ಲುಪೇಟೆ, ಮೈಸೂರು ವಿಭಾಗದಿಂದ ಹೆಚ್ಚುವರಿಯಾಗಿ ಬಸ್ ಗಳನ್ನು ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು. ಆರೋಗ್ಯ ಇಲಾಖೆ ಸಹ ಹೆಚ್ಚುವರಿ ಆ್ಯಂಬುಲೆನ್ಸ್‌ಗಳ ವ್ಯವಸ್ಥೆ ಕಲ್ಪಿಸಿ ಜಾತ್ರೆಯ ಸಂದರ್ಭದಲ್ಲಿ ಹೆಚ್ಚಿನ ಸಿಬ್ಬಂದಿ ಕಲ್ಪಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆದ್ಯತೆ ನೀಡಿ:ಮಲೆ ಮಹದೇಶ್ವರ ಬೆಟ್ಟದಲ್ಲಿ ಬರುವ ಭಕ್ತಾದಿಗಳಿಗೆ ರಂಗಮಂದಿರ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಜಾನಪದ ನೃತ್ಯ ರೂಪಕಗಳ ನಾಟಕ ಮತ್ತು ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ವಿಶೇಷ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಇನ್ಸ್‌ಪೆಕ್ಟರ್ ಜಗದೀಶ್, ಸಬ್ ಇನ್ಸ್‌ಪೆಕ್ಟರ್ ಬಸವರಾಜ್, ಲೋಕೋಪಯೋಗಿ ಇಲಾಖೆ ಎಇಇ ಚಿನ್ನಣ್ಣ, ವೈದ್ಯಾಧಿಕಾರಿ ಜಾಹ್ನವಿ , ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕಿರಣ್ ಕುಮಾರ್. ಚೆಸ್ಕಾಂ ಜೆಇ ಮಹೇಶ್, ಕೆಎಸ್ಆರ್‌ಟಿಸಿ ವಿಭಾಗದ ಅಧಿಕಾರಿ ಚಿನ್ನಪ್ಪ, ಪ್ರಾಧಿಕಾರದ ಅಧಿಕಾರಿ ಸಿಬ್ಬಂದಿ ಇದ್ದರು.