ಸಾರಾಂಶ
ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ-ಕುರಿತು ಅಧಿಕಾರಿಗಳಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ, ಸಂವಾದ ಕಾರ್ಯಕ್ರಮಕನ್ನಡಪ್ರಭ ವಾರ್ತೆ ಕೊಪ್ಪಳ
ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಪಾಲಕರನ್ನು ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ನಡೆದ ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ ಎಂಬ ವಿಷಯದ ಕುರಿತು ಇಲಾಖೆಗಳ ಅಧಿಕಾರಿಗಳಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ, ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
6ರಿಂದ 14 ವರ್ಷದೊಳಗಿನ ಎಲ್ಲಾ ಮಕ್ಕಳು ಶಾಲಾ ಅವಧಿಯಲ್ಲಿ ಶಾಲೆಯಲ್ಲಿರುವುದು ವಿವಿಧ ಕಾಯ್ದೆಯಡಿ ಕಡ್ಡಾಯವಾಗಿದೆ. ಒಂದು ವೇಳೆ ಮಕ್ಕಳು ಶಾಲೆಯಿಂದ ಹೊರಗುಳಿದಲ್ಲಿ, ದುಶ್ಚಟಗಳಿಗೆ ಬಲಿಯಾಗಬಹುದು, ಮಾದಕ ವ್ಯಸನಿಗಳಾಗಬಹುದು, ಕಾರ್ಮಿಕರಾಗಿ ದುಡಿಯುತ್ತಾ ಕಿರುಕುಳ, ಹಲ್ಲೆ ಅಥವಾ ದೌರ್ಜನ್ಯಗಳಿಗೆ ಸಿಲುಕಬಹುದಾಗಿದೆ, ಬಾಲ್ಯವಿವಾಹಕ್ಕೆ ತುತ್ತಾಗಿ ಪ್ರತಿ ದಿನವು ಲೈಂಗಿಕ ದೌರ್ಜನ್ಯಗಳಿಗೆ, ಬಾಲ ಗರ್ಭಿಣಿಯರಾಗಿ ಸಾವಿಗೆ ತುತ್ತಾಗಬಹುದಾಗಿದೆ. ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಬಹುದಾಗಿದೆ. ಇದರಿಂದ ಪ್ರತಿಯೊಬ್ಬ ಅಧಿಕಾರಿಗಳು ಮಕ್ಕಳನ್ನು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಮಕ್ಕಳ ಮೇಲೆ ನಡೆಯುವ ದೌರ್ಜನ್ಯವನ್ನು ಆಯೋಗವು ಸಹಿಸುವುದಿಲ್ಲ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟೆಪ್ಪನವರ್ ಮಾತನಾಡಿ, ಮಕ್ಕಳು ತಮ್ಮ ಹಕ್ಕುಗಳನ್ನು ಅನುಭವಿಸಲು ಮತ್ತು ಆನಂದಿಸಲು ಅನುಕೂಲಕರವಾದ ಪರಿಸರ ನಿರ್ಮಿಸಲು ಮುಂದಾಗಬೇಕು. ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಭೋದಕೇತರ ಸಿಬ್ಬಂದಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ-2012ರಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯವು ಶಿಕ್ಷೆಯನ್ನು ವಿಧಿಸಿರುವ ಘಟನೆಗಳು ವರದಿಯಾಗಿವೆ. ಆದ್ದರಿಂದ ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಮಕ್ಕಳ ಸುರಕ್ಷತಾ ನೀತಿಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.ಪೊಲೀಸ್ ಉಪಾಧೀಕ್ಷಕ ಮುತ್ತಣ್ಣ ಸವರಗೋಳ ಮಾತನಾಡಿ, ಮಕ್ಕಳ ಕಾನೂನಾತ್ಮಕ ಹಕ್ಕುಗಳನ್ನು ರಕ್ಷಿಸುವುದರೊಂದಿಗೆ ಅವರ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಅಗತ್ಯಗಳನ್ನು ಒಳಗೊಂಡಂತೆ ಅವರ ಸುರಕ್ಷತೆಯನ್ನು ಖಚಿತಪಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪೊಲೀಸ್ ಇಲಾಖೆಯಿಂದ ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ್ ಮಾತನಾಡಿ, ಯಾವುದೇ ಮಗು ಶಾಲೆಯಿಂದ ಹೊರಗುಳಿದಿದ್ದಲ್ಲಿ, ಮಗುವಿನ, ಪಾಲಕರ ಮನವೋಲಿಸಿ ಮರಳಿ ಶಾಲೆಗೆ ಕರೆತರುವುದು ಮುಖ್ಯೋಪಾಧ್ಯಾಯರು, ಶಿಕ್ಷಕರ ಜವಾಬ್ದಾರಿಯಾಗಿದೆ ಎಂದರು.ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ಡಾ. ಕೆ. ರಾಘವೇಂದ್ರ ಭಟ್ ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ ಎಂಬ ವಿಷಯದ ಕುರಿತು ತರಬೇತಿ ನೀಡಿದರು.
ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ವ್ಯವಸ್ಥಾಪಕ ಹರೀಶ ಜೋಗಿ ಕಾಯ್ದೆ ಕುರಿತು ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಮಂಜುನಾಥ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಕಾಶ ಕಡಗದ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಸೇರಿದಂತೆ ಜಿಲ್ಲೆಯ ಎಲ್ಲಾ ಸಮೂಹ ಸಂಪನ್ಮೂಲ, ವಲಯ ಸಂಪನ್ಮೂಲ, ಶಿಕ್ಷಣ ಸಂಯೋಜಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಾರ್ಮಿಕ ನಿರೀಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಸ್ವಾಗತಿಸಿದರು. ಡಾ. ಸುಮಲತಾ ನಿರೂಪಿಸಿ, ಶಿವಲೀಲಾ ವಂದಿಸಿದರು.