ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯಲ್ಲಿ ಸದ್ಯಕ್ಕೆ ಜನ- ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿಲ್ಲ. ಇಂಡಿ ಹಾಗೂ ಚಡಚಣ ಭಾಗದಲ್ಲಿ ನೀರಿನ ಸಮಸ್ಯೆ ತಲೆದೋರಬಹುದು. ಗ್ರಾಪಂ ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ನಿರ್ವಹಣೆ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಇಂಡಿ ಸೇರಿದಂತೆ ಎಲ್ಲೆಲ್ಲಿ ನೀರಿನ ಸಮಸ್ಯೆ ಉದ್ಭವಿಸಿದಲ್ಲಿ ತಕ್ಷಣವೇ ಪರ್ಯಾಯ ವ್ಯವಸ್ಥೆಗಳನ್ನು ಕೈಗೆತ್ತಿಕೊಂಡು ಯಾವುದೇ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಸಾಧ್ಯವಾದರೆ ಬೋರ್‌ವೆಲ್‌ನಂತಹ ಜಲಮೂಲಗಳನ್ನು ಗುರುತಿಸಿಟ್ಟುಕೊಳ್ಳಬೇಕು. ಬೇಸಿಗೆ ಸಂದರ್ಭದಲ್ಲಿ ಜನ- ಜಾನುವಾರುಗಳಿಗೆ ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಸದಾ ಸನ್ನದ್ಧವಾಗಿರಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಮುಂದಿನ ಇಪ್ಪತ್ತು ದಿನಗಳ ವರೆಗೆ ನೀರು ಬಿಡುಗಡೆ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಲು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಭೆ ನಡೆಸಿ, ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಆನಂದ.ಕೆ ಮಾತನಾಡಿ, ಜಿಲ್ಲೆಯ ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಲ್ಲಿ ಕಳೆದ ವರ್ಷ ಇದ್ದ ನೀರಿನ ಲಭ್ಯತೆ ಎರಡೂ ಜಲಾಶಯದಲ್ಲಿ ಇದೆ ಎಂದು ಮಾಹಿತಿ ನೀಡುತ್ತಿದ್ದಂತೆಯೇ ಮಧ್ಯೆ ಪ್ರವೇಶಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಆಗಸ್ಟ್ ತಿಂಗಳ ವರೆಗೆ ಕುಡಿಯುವ ನೀರಿನ ಲಭ್ಯತೆಯನ್ನು ಬಳಸಿಕೊಳ್ಳಬೇಕು ಎಂದರು. ಗ್ರಾಮೀಣ ಪ್ರದೇಶ 40 ಬಹುಹಳ್ಳಿ ಕುಡಿಯುವ ನೀರಿನ (ಎಂವಿಎಸ್) ಯೋಜನೆಗಳು ಸಮರ್ಪಕವಾಗಿ ನಡೆಯುತ್ತಿವೆ ಎಂದರು.


ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಜಲಾಶಯದ ಸ್ಟೋರೇಜ್ ನೋಡಿಕೊಂಡು ನೀರಿನ ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ಸಲಹೆ ಮಾಡಿದರು.

ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ನಗರದ ಹಳೆಯ ಬೋರವೆಲ್ ಗಳು ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸಲಹೆ ಮಾಡಿದರು. ಯಾವ ಯಾವ ವಾರ್ಡಿಗೆ ಎಷ್ಟು ನೀರು ಎಂಬುದಾಗಿ ಶೆಡ್ಯೂಲ್ ಮಾಡಿ ಸಮರ್ಪಕವಾಗಿ ನೀರು ಪೂರೈಸಬೇಕು ಎಂದರು.

ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸಿ.ಎಸ್‌.ನಾಡಗೌಡ, ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಮೇಯರ್‌ ಮಡಿವಾಳಪ್ಪ ಕರಡಿ, ಜಿಪಂ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಆಲಮಟ್ಟಿ ಜಲಾಶಯದ ಮುಖ್ಯ ಎಂಜಿನೀಯರ್‌ಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿ ಉಪಸ್ಥಿತರಿದ್ದರು.---------

ಬಾಕ್ಸ್‌....

ಬೇಸಿಗೆ ಸಂದರ್ಭದಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಕೇಂದ್ರಗಳಿಗೆ ತಕ್ಷಣ ತೆರಳಿ ಸಭೆ ನಡೆಸಿ ನಿಮ್ಮ ನಿಮ್ಮ ಹಂತದಲ್ಲಿ ಸಮಸ್ಯೆ ಬಗೆಹರಿಸಬೇಕು.

- ಡಾ.ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ

--------

10bij03