ಸಾರಾಂಶ
ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತಿ ವಾರ ತಾಲೂಕಿನ ಪ್ರತಿಯೊಂದು ಶಾಲೆಗಳಿಗೆ, ಭೇಟಿ ನೀಡಿ ಸರಿಯಾದ ಮಾಹಿತಿ ಪಡೆದುಕೊಂಡು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು.
ಕನ್ನಡಪ್ರಭ ವಾರ್ತೆ ಅಫಜಲ್ಪುರ
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಿಲ್ಲೆ ಹಾಗೂ ತಾಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಂಠಿತವಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತಿ ವಾರ ತಾಲೂಕಿನ ಪ್ರತಿಯೊಂದು ಶಾಲೆಗಳಿಗೆ, ಭೇಟಿ ನೀಡಿ ಸರಿಯಾದ ಮಾಹಿತಿ ಪಡೆದುಕೊಂಡು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಕಲಬುರಗಿ ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿ ಎಸ್.ಎಸ್. ಮಠಪತಿ ಹೇಳಿದರು.ಅವರು ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು.ಈ ಬಾರಿ ಯಾವ ಕಾರಣಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ ಕುಂಠಿತವಾಗಿದೆ ಎಂದು ಕೂಲಂಕುಷವಾಗಿ ಪರಿಶೀಲಿಸಿ ಅದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಎಚ್ಚರಿಕೆ ವಹಿಸಿ ಕೆಲಸ ನಿರ್ವಹಿಸಬೇಕು.ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಬೀದಿ ದೀಪಗಳನ್ನು ಅಳವಡಿಸಬೇಕು.ಮಳೆಗಾಲ ಇರುವ ಕಾರಣ ಹೆಚ್ಚು ರೋಗಗಳು ಹರಡುವ ಸಾದ್ಯತೆಯಿದೆ.ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯವರು ಹೆಚ್ಚು ಮುತುವರ್ಜಿ ವಹಿಸಿ ಕೆಲಸ ನಿರ್ವಹಿಸಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಪಿಡಿಒಗಳಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಕವಲಗಿ, ಸಹಾಯಕ ನಿರ್ದೇಶಕ ರಮೇಶ ಪಾಟೀಲ, ತಾಲೂಕು ಯೋಜನಾಧಿಕಾರಿ ಡಾ.ರೇಣುಕಾ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ತಾಲೂಕು ಪಂಚಾಯತ ಸಿಬ್ಬಂದಿ ಇದ್ದರು.