ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯಗಳ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.

| Published : Jun 26 2024, 12:32 AM IST

ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯಗಳ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರದಿಂದ ಸಫಾಯಿ ಕರ್ಮಚಾರಿಗಳಿಗೆ ಸಿಗುವ ವಿವಿಧ ಸೌಲಭ್ಯಗಳನ್ನು ಒದಗಿಸಬೇಕು. ಅವರಿಗೆ ಒದಗಿಸುವ ಪರಿಕರಗಳನ್ನು ಸಮರ್ಪಕವಾಗಿ ಬಳಸುವ ಕುರಿತು ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ಕನ್ನಡಪ್ರಭ ವಾರ್ತೆ ಗದಗ

ಸರ್ಕಾರದಿಂದ ಸಫಾಯಿ ಕರ್ಮಚಾರಿಗಳಿಗೆ ಸಿಗುವ ವಿವಿಧ ಸೌಲಭ್ಯಗಳನ್ನು ಒದಗಿಸಬೇಕು. ಅವರಿಗೆ ಒದಗಿಸುವ ಪರಿಕರಗಳನ್ನು ಸಮರ್ಪಕವಾಗಿ ಬಳಸುವ ಕುರಿತು ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಫಾಯಿ ಕರ್ಮಚಾರಿಗಳ ಸೌಲಭ್ಯದ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಫಾಯಿ ಕರ್ಮಚಾರಿಗಳಿಗೆ ವರ್ಷದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಕೈಗೊಳ್ಳಲು ಕ್ರಮ ವಹಿಸಬೇಕು. ಸಫಾಯಿ ಕರ್ಮಚಾರಿಗಳ ಸುರಕ್ಷಿತ ಪರಿಕರ ವಿತರಣೆಯ ನಂತರ ಅವುಗಳನ್ನು ಬಳಸುವ ಕುರಿತು ನಿಯಮಿತವಾಗಿ ಅರಿವು ಮೂಡಿಸಬೇಕು. ಸರ್ಕಾರದ ಸೌಲಭ್ಯಗಳ ಕುರಿತು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಫಾಯಿ ಕರ್ಮಚಾರಿಗಳಿಗಾಗಿ ಕಾರ್ಯಾಗಾರಗಳನ್ನು ಏರ್ಪಡಿಸಬೇಕು ಎಂದು ನಿರ್ದೇಶನ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ, ಜಿಲ್ಲೆಯಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಆ್ಯಕ್ಟ್ ಉಲ್ಲಂಘನೆಯಾದ ಪ್ರಕರಣಗಳು ಕಂಡು ಬಂದಿರುವುದಿಲ್ಲ ಎಂದು ಸಭೆಗೆ ತಿಳಿಸಿದರು.

ಜಿಪಂ ಸಿಇಒ ಭರತ್‌ ಎಸ್. ಮಾತನಾಡಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಗ್ರಾಮ ಪಂಚಾಯತಿಗಳ ಪಿಡಿಒಗಳಿಗೆ ತಮ್ಮ ವ್ಯಾಪ್ತಿಯ ಗ್ರಾಮ ಸಭೆಗಳಲ್ಲಿ ಪೌರಕಾರ್ಮಿಕರಿಗೆ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.ಸಭೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಮನೆ ನಿರ್ಮಾಣ, ಪೌರಕಾರ್ಮಿಕ ಮಹಿಳೆಯರ ಸಮಿತಿ ರಚನೆ, ಪೌರಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಸೌಲಭ್ಯದ ಕುರಿತು ಚರ್ಚಿಸಲಾಯಿತು.

ಈ ವೇಳೆ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ, ವಿವಿಧ ತಾಲೂಕುಗಳ ಸಮಾಜ ಕಲ್ಯಾಣಾಧಿಕಾರಿಗಳು, ಸಮಿತಿಯ ನಾಮನಿರ್ದೇಶಿತ ಸದಸ್ಯರು ಇದ್ದರು.