ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರಿನಲ್ಲಿ ಮಾ. 15 ರಂದು ನಡೆಯುವ ಕಾಂಗ್ರೆಸ್ ಗ್ಯಾರಂಟಿ ಸಮಾವೇಶವನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಹಿಳೆಯರು ಬಂದು ಯಶಸ್ವಿಗೊಳಿಸಬೇಕು ಎಂದು ಎಂಡಿಎ ಅಧ್ಯಕ್ಷ ಕೆ. ಮರೀಗೌಡ ಮನವಿ ಮಾಡಿದರು.ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರ ಗ್ಯಾರಂಟಿ ಪೂರ್ವ ಭಾವಿ ಸಭೆ ಹಾಗೂ ಇಲವಾಲ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷೆ ಭಾಗ್ಯ ಲೋಕೇಶ್ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
ಚಾಮುಂಡೇಶ್ವರಿ ಕ್ಷೇತ್ರದ ಜನತೆಯ ಆಶೀರ್ವಾದದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಮೇಲೆ ವಿಶ್ವಾಸವಿಟ್ಟು ಎಂಡಿಎ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ಹಾಗೂ ಕ್ಷೇತ್ರದ ಜನತೆಯ ಹೆಸರಿಗೆ ಚ್ಯುತಿ ಬಾರದಂತೆ ಕೆಲಸ ಮಾಡುವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಟ್ಟು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಯುವನಿಧಿ, ಅನ್ನಭಾಗ್ಯ ಯೋಜನೆಗಳನ್ನು ಜಾತಿ, ಭೇದವಿಲ್ಲದೆ ಜಾರಿಗೆ ತಂದಿದ್ದರಿಂದ ಇಂದು ರಾಜ್ಯದ ಮಹಿಳೆಯರು ಬಡವರು ನೆಮ್ಮದಿಯಾಗಿದ್ದಾರೆ ಎಂದರು.ಕಾಂಗ್ರೆಸ್ ಸರ್ಕಾರದ ಈ ಗ್ಯಾರಂಟಿ ಯೋಜನೆಯನ್ನು ಜನರಿಗೆ ತಿಳಿಸಬೇಕು. ಕೇಂದ್ರ ಸರ್ಕಾರ ಸುಳ್ಳು ಭರವಸೆ ನೀಡುತ್ತಾ ದಿನನಿತ್ಯ ವಸ್ತುಗಳ ಬೆಲೆಗಳನ್ನು ಏರಿಸುತ್ತಾ ದೇಶವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿದೆ. ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಎಂದು ಪ್ರಶ್ನಿಸಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲ್ಲಿದ್ದು. ಗೆಲುವು ಮೈಸೂರಿನಿಂದಲೇ ಪ್ರಾರಂಭವಾಗಬೇಕು ಎಂದು ಅವರು ತಿಳಿಸಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು, 1983 ರಿಂದಲೂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತ ನೀವು 341 ಭೂತಗಳ ಕಾರ್ಯಕರ್ತರು, ಮುಖಂಡರು ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಗ್ಯಾರಂಟಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದರು.ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ, ನಗರ ಅಧ್ಯಕ್ಷೆ ಪುಷ್ಪಲತಾ ಚಿಕ್ಕಣ್ಣ, ಕೆಪಿಸಿಸಿ ಸದಸ್ಯರಾದ ನರಸೇಗೌಡ, ನಾಗವಾಲ, ನರೇಂದ್ರ, ಮಾಜಿ ಮೇಯರ್ ಟಿ.ಬಿ. ಚಿಕ್ಕಣ್ಣ, ಮೋದಾಮಣಿ, ಜಿಪಂ ಮಾಜಿ ಸದಸ್ಯರಾದ ಲೇಖಾ ವೆಂಕಟೇಶ್, ಕೂರ್ಗಳ್ಳಿ ಮಹಾದೇವ, ಉದ್ಯಮಿ, ಗಂಧನಹಳ್ಳಿ ವೆಂಕಟೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಹೊಸಹುಂಡಿ ರಘು, ಶಿವಣ್ಣ, ಹಿನಕಲ್ ಹೊನ್ನಪ್ಪ, ಮಾರ್ಬಳ್ಳಿ ಕುಮಾರ್, ನಾಗರತ್ನ, ಹರೀಶ್ ಮೊಗಣ್ಣ, ಕೃಷ್ಣಕುಮಾರ ಸಾಗರ್, ಪ್ರೊ. ಶಿವಕುಮಾರ್, ಶಿವ ಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ಗುರುಸ್ವಾಮಿ, ಜೆ. ಸತೀಶ್ ಕುಮಾರ್, ಜವರೇಗೌಡ, ಕೆಂಚಪ್ಪ, ರವಿ ಚಂದ್ರು, ಬಸವರಾಜು, ಆನಂದೂರು ರಾಮೇಗೌಡ, ಪ್ರಕಾಶ್, ರಾಜಶೇಖರ ಮೂರ್ತಿ, ಹಂಚ್ಯಾ ಸಣ್ಣಸ್ವಾಮಿ, ಮಹದೇವ ಇದ್ದರು.
ಸಿಎಂಗೆ ಮರಿತಿಬ್ಬೇಗೌಡ ಅಭಿನಂದನೆಕನ್ನಡಪ್ರಭ ವಾರ್ತೆ ಮೈಸೂರು
ಎಸ್ಸೆಸ್ಸೆಲ್ಸಿ ಪರೀಕ್ಷಾ ಕಾರ್ಯಗಳಿಗೆ ಪ್ರೌಢಶಾಲಾ ಶಿಕ್ಷಕರನ್ನೇ ಎಂದಿನಂತೆ ನೇಮಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಧನ್ಯವಾದ ಅರ್ಪಿಸಿದ್ದಾರೆ.ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಕಾರ್ಯಗಳಿಗೆ ಪ್ರೌಢಶಾಲಾ ಶಿಕ್ಷಕರನ್ನು ಹೊರತುಪಡಿಸಿ, ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿಕೊಳ್ಳಲು ಹೊರಡಿಸಿದ ಅವೈಜ್ಞಾನಿಕ ಸುತ್ತೋಲೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಆತಂಕ ಹುಟ್ಟಿಸುವ ಹಾಗೂ ಆತ್ಮಸ್ಥೈರ್ಯ ಕುಗ್ಗಿಸುವಂತಾಗುತ್ತದೆ ಮತ್ತು ಬೋಧನೆ ಮಾಡುವ ಪ್ರೌಢಶಾಲಾ ಶಿಕ್ಷಕರನ್ನು ಸಾರ್ವಜನಿಕವಾಗಿ ಅವಮಾನಿಸಿದಂತಾಗುತ್ತದೆ ಎಂದರು.ಶಿಕ್ಷಣ ಇಲಾಖೆಯು ಶಿಕ್ಷಕರನ್ನು ಸಂಶಯದಿಂದ ನೋಡುವುದು ಸಮಾಜವೇ ತಲೆ ತಗ್ಗಿಸುವಂತಾಗುತ್ತದೆ. ಆದ್ದರಿಂದ ಈ ಸುತ್ತೋಲೆಯನ್ನು ಹಿಂಪಡೆಯುವಂತೆ ನಾನು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೇನೆ. ನಂತರ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರನ್ನು ಖುದ್ದು ಭೇಟಿ ಮಾಡಿ, ಸಮಸ್ಯೆಯ ಗಂಭೀರತೆಯನ್ನು ಮನವರಿಕೆ ಮಾಡಿಕೊಟ್ಟ ಬಳಿಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಸುತ್ತೋಲೆ ಹೊರಡಿಸಿ, ಕಳೆದ ಸಾಲಿನಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕಾರ್ಯಗಳಿಗೆ ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರನ್ನೇ ನಿಯೋಜಿಸಿಕೊಳ್ಳಲು ಅನುಮತಿ ನೀಡಿ ಆದೇಶಿಸಲಾಗಿದೆ.ಈ ಸಂಬಂಧ ಸಮಸ್ತ ಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪರವಾಗಿ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಿಗೆ ಈ ಮೂಲಕ ಅನಂತಾನಂತ ಧನ್ಯವಾದ ಅರ್ಪಿಸುವುದಾಗಿ ಹೇಳಿದರು.