ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತ ಮಾಡಿ : ಡಿಸಿ ಡಾ. ಕೆ ವಿದ್ಯಾಕುಮಾರಿ

| Published : Apr 02 2024, 01:02 AM IST / Updated: Apr 02 2024, 01:03 AM IST

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತ ಮಾಡಿ : ಡಿಸಿ ಡಾ. ಕೆ ವಿದ್ಯಾಕುಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಎಲ್ಲಾ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತವನ್ನಾಗಿಸುವಲ್ಲಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಐದನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, 3 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತವನ್ನಾಗಿಸುವಲ್ಲಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ಅವರು ಕರೆ ನೀಡಿದರು.

ಅವರು ಸೋಮವಾರ ನಗರದ ಪಶುವೈದ್ಯಕೀಯ ಪಾಲಿಕ್ಲಿನಿಕ್ ಆವರಣದಲ್ಲಿ, ಜಿಲ್ಲಾಡಳಿತ, ಜಿ.ಪಂ., ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಡುಪಿ ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಇವರ ಸಹಯೋಗದಲ್ಲಿ ನಡೆದ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಲಾಖೆಯ ಹಾಗೂ ಕೆ.ಎಂ.ಎಫ್ ಅಧಿಕಾರಿ, ಸಿಬ್ಬಂದಿ ಹಾಗೂ ಖಾಸಗಿ ಲಸಿಕೆದಾರರು ಲಸಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರಿಗೆ ಆರ್ಥಿಕವಾಗಿ ಸಂಕಷ್ಟ ಉಂಟುಮಾಡುವ ಕಾಲುಬಾಯಿ ರೋಗದ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವಂತೆ ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಪಶುಸಖಿಯವರು, ಗ್ರಾ.ಪಂ,. ಸಂಘ ಸಂಸ್ಥೆಗಳು ಮತ್ತು ಇತರ ಇಲಾಖೆಗಳ ಸಹಕಾರದೊಂದಿಗೆ ಅಭಿಯಾನವನ್ನು ಯಶಸ್ವಿಗೊಳಿಸಲು ತಿಳಿಸಿದರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಎಂ.ಸಿ.ರೆಡ್ಡಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಶುವೈದ್ಯ ಪಾಲಿಕ್ಲಿನಿಕ್‌ನ ಉಪ ನಿರ್ದೇಶಕರು (ಪ್ರಭಾರ) ಡಾ. ಚಂದ್ರಶೇಖರ ಸಾಲೀಮಠ, ದಕ್ಷಿಣ ಕನ್ನಡ ಹಾಲು ಒಕ್ಕೂಟ ನಿಯಮಿತ ವ್ಯವಸ್ಥಾಪಕ ಡಾ.ರಾಮಕೃಷ್ಣ ಭಟ್, ಜಿಲ್ಲಾ ನೋಡಲ್ ಅಧಿಕಾರಿ ಡಾ.ಸಂದೀಪ ಕುಮಾರ್, ಮುಖ್ಯ ಪಶುವೈದ್ಯಾಧಿಕಾರಿ ಡಾ. ವಾಗೀಶ್ ಚೌವಾಣ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಪಶುವೈದ್ಯಾಧಿಕಾರಿ ಡಾ. ಪ್ರಶಾಂತ್ ಕುಮಾರ್ ನಿರೂಪಿಸಿದರು.