ಚುನಾವಣೆ ಪ್ರಕ್ರಿಯೆ ಯಶಸ್ವಿಗೊಳಿಸಿ: ಡಿಸಿ

| Published : Mar 31 2024, 02:06 AM IST

ಸಾರಾಂಶ

ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ನೊಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಧಿಲಾರಿ ಟಿ. ಭೂಬಾಲನ್ ವಿಡಿಯೋ ಸಂವಾದ ನಡೆಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರಲೋಕಸಭೆ ಚುನಾವಣೆ ಪಾರದರ್ಶಕ ಹಾಗೂ ಮುಕ್ತ, ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮಗೆ ವಹಿಸಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಲಾರಿ ಟಿ. ಭೂಬಾಲನ್ ಸೂಚಿಸಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ನೊಡಲ್ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಚುನಾವಣೆ ಅಕ್ರಮ ತಡೆಯಲು ಚೆಕ್‌ಪೋಸ್ಟ್ ಗಳಲ್ಲಿ ಹೆಚ್ಚಿನ ನಿಗಾವಹಿಸಬೇಕು. 24*7 ಸಿಸಿ ಕ್ಯಾಮೆರಾಗಳು ಕಾರ್ಯ ನಿರ್ವಹಿಸುತ್ತಿರಬೇಕು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಅಕ್ರಮ ಹಣ ಸಾಗಣೆ ಮತ್ತು ಉಚಿತ ಉಡುಗೊರೆ (ಫ್ರೀಬೀಸ್) ನಡೆಯುತ್ತಿರುವ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಬೇಕು. ಚೆಕ್‌ಪೋಸ್ಟ್ ಗಳಲ್ಲಿ ಮೂಲ ಸೌಕರ್ಯಗಳ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಚುನಾವಣೆ ನೀತಿ ಸಂಹಿತೆ ಮೀರಿದ ದೂರುಗಳು ಸಿ-ವಿಜಿಲ್ ಆ್ಯಪ್‌ನಲ್ಲಿ ದಾಖಲಾದರೆ 100 ನಿಮಿಷದ ಒಳಗಡೆ ಅದನ್ನು ಪರಿಹರಿಸಲು ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ಚುಣಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್‌ ಸಮಿತಿಯೊಂದಿಗೆ ಕ್ರಿಯಾತ್ಮಕ ಕಾರ್ಯಚಟುವಟಿಕೆ ಹಮ್ಮಿಕೊಂಡು ಕಾರ್ಯಕ್ರಮ ರೂಪಿಸಬೇಕು. ಯಾವುದೇ ಕಾರಣಕ್ಕೂ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಮತಗಟ್ಟೆ ಅಧಿಕಾರಿಗಳಿಗೆ 1ನೇ ಹಂತದ ತರಬೇತಿ ನೀಡುವ, ಅಂಚೆ ಮತಪತ್ರಗಳ ಕಾರ್ಯಗಳ ಬಗ್ಗೆ, ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ ತಂಡಗಳಿಗೆ ವಾಹನ ಹಂಚಿಕೆ ಕುರಿತು, ಚುನಾವಣೆ ಟೆಂಡರ್ ಹಾಗೂ ಚುನಾವಣೆ ವೀಕ್ಷಕರಿಗೆ ಸೌಲಭ್ಯ ಕಲ್ಪಿಸಿದ ಬಗ್ಗೆ, ಚುನಾವಣೆಗೆ ಸಂಬಂಧಿಸಿದ ವಿವಿಧ ದೂರಗಳ ವಿಲೇವಾರಿ ಕುರಿತು ಚರ್ಚಿಸಲಾಯಿತು.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.