ರಾಜ್ಯಮಟ್ಟದ ಯುವಜನೋತ್ಸವ ಯಶಸ್ವಿಗೊಳಿಸಿ: ನಾಗೇಂದ್ರ

| Published : Jan 02 2024, 02:15 AM IST

ಸಾರಾಂಶ

ರಾಜ್ಯಮಟ್ಟದ ಯುವಜನೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೇರಿದಂತೆ ಸಚಿವ ಸಂಪುಟದ ಮಂತ್ರಿಗಳನ್ನು ಆಹ್ವಾನಿಸಲಾಗುವುದು.

ಬಳ್ಳಾರಿ: ಜಿಲ್ಲೆಯಲ್ಲಿ ಮೊದಲ ಬಾರಿಗೆ ಜ. 6 ಮತ್ತು 7ರಂದು ನಗರದ ಡಾ. ರಾಜ್‌ಕುಮಾರ್ ರಸ್ತೆಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗುತ್ತಿರುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಂದು ಜಿಲ್ಲಾ ಸಚಿವ ಬಿ. ನಾಗೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಮ್ಸ್ ಆಡಳಿತ ಭವನದ ಸಭಾಂಗಣದಲ್ಲಿ ಜರುಗಿದ ರಾಜ್ಯ ಮಟ್ಟದ ಯುವಜನೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯಮಟ್ಟದ ಯುವಜನೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೇರಿದಂತೆ ಸಚಿವ ಸಂಪುಟದ ಮಂತ್ರಿಗಳನ್ನು ಆಹ್ವಾನಿಸಲಾಗುವುದು. ಜ. 6ರಂದು ಸಂಜೆ 6 ಗಂಟೆಗೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ನಂತರದಲ್ಲಿ ಸಾಂಸ್ಕೃತಿಕ ಹಾಗೂ ಮನರಂಜನೆ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಯುವಕರ ಪ್ರತಿಭೆ ಅನಾವರಣಕ್ಕೆ ಯುವಜನೋತ್ಸವ ಆಯೋಜನೆಯಾಗಿದೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು, ಶಾಲಾ- ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ವಹಿಸಬೇಕು. ಯುವಜನೋತ್ಸವಕ್ಕೆ ಕನ್ನಡದ ನಟ- ನಟಿಯರನ್ನು ಆಹ್ವಾನಿಸಲಾಗುವುದು ಹಾಗೂ ವಿವಿಧ ಗಾಯಕ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ, ಸುಗಮ ಸಂಗೀತ ಏರ್ಪಡಿಸಲಾಗುವುದು ಎಂದರು.

ಕ್ರೀಡಾ ಇಲಾಖೆ ಆಯುಕ್ತ ಶಶಿಕುಮಾರ್ ಮಾತನಾಡಿ, ರಾಜ್ಯದ ಪ್ರತಿ ಜಿಲ್ಲೆಗಳಿಂದ 30ರಿಂದ 40 ಪ್ರತಿನಿಧಿಗಳ ತಂಡದಂತೆ ಆಯಾ ಜಿಲ್ಲೆಯ ಇಲಾಖೆಯ ಸಹಾಯಕ ನಿರ್ದೇಶಕರು ಕರೆತರಲಿದ್ದಾರೆ. ಯುವಜನೋತ್ಸವದಲ್ಲಿ 10 ವಿವಿಧ ರೀತಿಯ ಸ್ಪರ್ಧೆಗಳು ನಡೆಯಲಿವೆ ಎಂದರು. ಶಾಸಕ ನಾರಾ ಭರತ್ ರೆಡ್ಡಿ ಅವರು ಕಾರ್ಯಕ್ರಮ ಯಶಸ್ವಿಗೆ ಸಲಹೆ, ಸೂಚನೆಗಳನ್ನು ನೀಡಿದರು. ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಸ್ಪಿ ರಂಜಿತ್‌ಕುಮಾರ್ ಬಂಡಾರು, ಎಡಿಸಿ ಮೊಹಮ್ಮದ್ ಝುಬೇರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.