ಸಾರಾಂಶ
ಕೊಪ್ಪಳ: ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರವಾಗಿದ್ದು, ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಚ್ಚುಕಟ್ಟಾಗಿ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಂಗವಾಗಿ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪ್ರತಿ ವರ್ಷ ವಿಶ್ವಾದ್ಯಂತ 60 ಲಕ್ಷಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಉಂಟಾಗುವ ಖಾಯಿಲೆಗಳಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವಿಶ್ವಾದ್ಯಂತ ಕ್ಯಾನ್ಸರ್, ಹೃದಯ ಸಂಬಂಧಿ ಖಾಯಿಲೆಗಳು, ಶ್ವಾಸಕೋಶದ ಖಾಯಿಲೆಗಳಿಗೆ ತಂಬಾಕು ಸೇವನೆಯೇ ಮುಖ್ಯ ಕಾರಣವಾಗಿದೆ. ವಿಶ್ವದಲ್ಲಿ ಪ್ರತಿ 6 ಸೆಕೆಂಡಿಗಳಿಗೊಮ್ಮೆ ಒಬ್ಬ ತಂಬಾಕು ಸೇವನೆಯಿಂದ ಸಾವನ್ನಪ್ಪುತ್ತಿದ್ದಾರೆ. ತಂಬಾಕು ಸೇವನೆಯಿಂದಾಗುವ ಶ್ವಾಸಕೋಶದ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ಹೃದಯ ಸಂಬಂಧಿ ಖಾಯಿಲೆಗಳು, ಹೆಣ್ಣು ಮಕ್ಕಳಿಗೆ ಗರ್ಭಪಾತ, ಗರ್ಭಕಂಠದ ಕ್ಯಾನ್ಸರ್ ಹಾಗೂ ಇತ್ಯಾದಿ ದುಷ್ಪರಿಣಾಮಗಳ ತಿಳಿವಳಿಕೆ ಮೂಡಿಸಿ. ತಂಬಾಕು ನಿಯಂತ್ರಣ ಕಾನೂನು-ಕೋಟ್ಪಾ-2003 ಅನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಸೆಕ್ಷನ್ 4ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿಸಲಾಗಿದೆ. ಸೆಕ್ಷನ್ 5 ರ ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹಿರಾತು, ಉತ್ತೇಜನ, ಪ್ರಾಯೋಜಕತ್ವವನ್ನೂ ನಿಷೇಧಿಸಲಾಗಿದೆ. ಸೆಕ್ಷನ್ 6ಎ ಪ್ರಕಾರ ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಹಾಗೂ ಅಪ್ರಾಪ್ತ ವಯಸ್ಕರಿಂದ ತಂಬಾಕು ಉತ್ಪನ್ನಗಳ ಮಾರಾಟ ನಡೆಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಇದೇವೇಳೆ, ತಂಬಾಕು ನಿಯಂತ್ರಣದ ಜಾಗೃತಿ ಪೋಸ್ಟರ್‌ಗಳನ್ನು ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್. ದರಗದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತ್ ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ ಟಿ. ಲಿಂಗರಾಜು, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳಾದ ಡಾ. ವಿ. ಪ್ರಕಾಶ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ರವಿಂದ್ರನಾಥ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳಾದ ಡಾ. ನಂದಕುಮಾರ, ಜಿಲ್ಲಾ ಕ್ಷಯರೋಗ ನಿರ್ಮಾಲನಾಧಿಕಾರಿಗಳಾಡ ಡಾ. ಶಶಿಧರ್, ಜಿಲ್ಲಾ ಕುಷ್ಟರೋಗ ನಿರ್ಮೂಲಾಣಾಧಿಕಾರಿಗಳಾದ ಡಾ. ಪ್ರಕಾಶ ಎಚ್., ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ. ವೆಂಕಟೇಶ್ ಸೇರಿದಂತೆ ಜಿಲ್ಲಾಸ್ಪತ್ರೆಯ ಹಾಗೂ ತಾಲೂಕು ಆಸ್ಪತ್ರೆಗಳ ಮುಖ್ಯ ವೈದ್ಯಾಧಿಕಾರಿಗಳು ಹಾಗೂ ಮತ್ತಿತರರಿದ್ದರು.