ಸಾರಾಂಶ
200ಕ್ಕೂಹೆಚ್ಚು ಅಹವಾಲುಗಳ ಸಲ್ಲಿಕೆ । ಸಾರ್ವಜನಿಕರೊಂದಿಗೆ ಸೌಜನ್ಯದಿಂದ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ
ಕನ್ನಡಪ್ರಭ ವಾರ್ತೆ ಬಾಗೇಪಲ್ಲಿಆಡಳಿತವನ್ನು ಜನರ ಬಳಿಗೆ ತೆಗೆದುಕೊಂಡು ಹೋಗಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವ ವ್ಯವಸ್ಥೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಜನಸ್ಪಂದನಾ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಈ ಕಾರ್ಯಕ್ರಮವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ.ಸುಧಾಕರ್ ಮನವಿ ಮಾಡಿದರು.
ಜಿಲ್ಲಾಡಳಿತ, ತಾಲೂಕಾಡಳಿತದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾ ಆವರಣದಲ್ಲಿನ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪ್ರತಿ ಅರ್ಹರಿಗೂ ದೊರಕಿಸಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರ ಬಳಿಗೆ ಸರ್ಕಾರದ ಕಾರ್ಯಕ್ರಮಗಳನ್ನು ನಡೆಸುವ,ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.
ಸಾರ್ವಜನಿಕರು ತಮ್ಮ ಕೆಲಸಗಳ ನಿಮಿತ್ತ ವಿವಿಧ ಇಲಾಖೆಗಳ ಕಚೇರಿಗೆ ಬಂದಾಗ ಅಧಿಕಾರಿಗಳು ಸರಿಯಾಗಿ ಸ್ಪಂದಿಸಬೇಕು, ಆಗಲೇ ಜನರ ಸಮಸ್ಯೆಗಳನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ಯಂತ್ರವನ್ನು ಚುರುಕುಗೊಳಿಸುವ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ದೇಶನದಂತೆ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದರು.
ಜಿಲ್ಲಾಧಿಕಾರಿ ಪಿ.ವಿ.ರವೀಂದ್ರ, ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ, ಜಿಪಂ ಮುಖ್ಯ ಕಾರ್ಯನಿರ್ವಹಣಾದಿಕಾರಿ ಪ್ರಕಾಶ್ ನಿಟ್ಟಾಲಿ, ಉಪವಿಭಾಗಾಧಿಕಾರಿ ಅಶ್ವಿನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರಾಜ್ ಇಮಾಮ್ ಖಾಸಿಂ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿದ್ದರು.----
ಬಾಕ್ಸ್....ಭಾಗೇಪಲ್ಲಿಯನ್ನು ಭಾಗ್ಯನಗರವನ್ನಾಗಿಸಿ
ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ನೇತೃತ್ವದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ, ಪುರಸಭೆ, ಲೋಕೋಪಯೋಗಿ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ದೂರುಗಳ ಮಹಾಪೂರವೇ ಹರಿದು ಬಂದಿತ್ತು. ಬಾಗೇಪಲ್ಲಿ ಎಂಬ ಹೆಸರನ್ನು ಭಾಗ್ಯನಗರವನ್ನಾಗಿ ಮರುನಾಮಕರಣಗೊಳಿಸುವಂತೆ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ಸಚಿವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಇದಕ್ಕೆ ಸಚಿವರು ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಭಾಗ್ಯನಗರವನ್ನಾಗಿ ಮರುನಾಮಕರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಾರ್ವಜನಿಕರ ಹಲವು ಸಮಸ್ಯೆಗಳಿಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಸಂಬಂಧಪಟ್ಟ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು. ಉಳಿದ ಸಮಸ್ಯೆಗಳಿಗೆ ಕಾಲಮಿತಿಯೊಳಗೆ ಆಯಾ ಇಲಾಖೆಗಳಿಗೆ ಪರಿಹಾರಕ್ಕೆ ಸೂಚಿಸಿದರು.ಈ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ, ಪುರಸಭೆಗೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಸಮಸ್ಯೆಗಳ ಬಗ್ಗೆ 200 ಕ್ಕೂ ಹೆಚ್ಚಿನ ಅಹವಾಲುಗಳನ್ನು ಸಾರ್ವಜನಿಕರು ಸಚಿವರಿಗೆ ಸಲ್ಲಿಸಿದರು. ಈ ದೂರುಗಳ ಪೈಕಿ ಕಂದಾಯ ಇಲಾಖೆ ಹಾಗೂ ಪುರಸಭೆಗೆ ಸಂಬಂಧಿಸಿದ ದೂರುಗಳೇ ಹೆಚ್ಚಾಗಿದ್ದವು ಎನ್ನುವುದು ವಿಶೇಷವಾಗಿತ್ತು. ------17ಬಿಜಿಪಿ-1: ಬಾಗೇಪಲ್ಲಿಯಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಉದ್ಘಾಟಿಸಿದರು.ಜಿಲ್ಲಾಧಿಕಾರಿಗಳಾದ ರವೀಂದ್ರ ಇದ್ದರು.----
17ಬಿಜಿಪಿ-2: ಜನತಾದರ್ಶನ ಕಾರ್ಯಕ್ರಮದಲ್ಲಿ ಸಚಿವರಿಗೆ ಸಾರ್ವಜನಿಕರು ಅಹವಾಲು ಸಲ್ಲಿಸುತ್ತಿರುವುದು.---17ಬಿಜಿಪ-3: ಜನತಾ ದರ್ಶನದಲ್ಲಿ ಸಚಿವರಿಗೆ ಅಹವಾಲು ಸಲ್ಲಿಸಲು ವೇಧಿಕೆ ಮುಂದೆ ಸಾರ್ವಜನಿಕರು ಸರತಿಯಲ್ಲಿ ನಿಂತಿರುವುದು.