ಸಾರಾಂಶ
ಈಗಾಗಲೇ ಮಳೆಗಾಲ ಆರಂಭವಾಗಿದ್ದು, ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಕೆಲ ಕಡೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ಎಲ್ಲೆಂದರಲ್ಲಿ ನಿಂತು, ವಾತಾವರಣ ಕಲುಷಿತಗೊಳ್ಳುತ್ತಿದೆ. ಇದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚುತ್ತಿದೆ.
ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲೆಯ ವಡಗೇರಾ ತಾಲೂಕಿನ್ಯಾದ್ಯಂತ ಮಲೇರಿಯಾ, ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿ, ಫಾಗಿಂಗ್ ಮಾಡಬೇಕೆಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕರವೇ ವಡಗೇರಾ ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ಚಿಗಾನೂರ ಆಗ್ರಹಿಸಿದ್ದಾರೆ .ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈಗಾಗಲೇ ಮಳೆಗಾಲ ಆರಂಭವಾಗಿದ್ದು, ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಕೆಲ ಕಡೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ಎಲ್ಲೆಂದರಲ್ಲಿ ನಿಂತು, ವಾತಾವರಣ ಕಲುಷಿತಗೊಳ್ಳುತ್ತಿದೆ. ಇದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚುತ್ತಿದೆ. ಆದರೆ, ಸಂಬಂಧಿಸಿದ ಅಧಿಕಾರಿಗಳು ಮಾತ್ರ ಸ್ವಚ್ಛತೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಕಲುಷಿತ ವಾತಾವರಣದಿಂದ ಡೆಂಘೀ, ಮಲೇರಿಯಾ, ವಾಂತಿಭೇದಿ ಪ್ರಕರಣಗಳಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ತಕ್ಷಣ ಸಂಬಂಧಿಸಿದ ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ, ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಹಾಗೂ ಪ್ರತಿ ಗ್ರಾಮಗಳಲ್ಲಿ ಫಾಗಿಂಗ್ ಮಾಡಬೇಕೆಂದು ಒತ್ತಾಯಿಸಿದ್ದಾರೆ.