ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಕಾಂಗ್ರೆಸ್ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.ಉಪ ಚುನಾವಣೆ ಫಲಿತಾಂಶ ಹೊರ ಬರುತ್ತಿದ್ದಂತೆ ಪಟ್ಟಣದ ಅನಂತ್‌ರಾಂ ವೃತ್ತದ ಬಳಿ ಸೇರಿದ ಕಾರ್ಯಕರ್ತರು ಶಾಸಕ ಪಿ.ಎಂ. ನರೇಂದ್ರಸ್ವಾಮಿ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕಾಂಗ್ರೆಸ್ ನಾಯಕರ ಪರ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ ಮಾತನಾಡಿ, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ಸುಳ್ಳುಗಳನ್ನು ಹೇಳಿದರೂ ಕೂಡ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಗೆಲ್ಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.ಕೇಂದ್ರ ಸರ್ಕಾರ ರಾಜ್ಯದ ತೆರಿಗೆ ಪಾಲಿನ ಹಣ ಕೊಡದೇ ಅರ್ಥಿಕವಾಗಿ ಕಿರುಕುಳ ನೀಡಿದರೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವ ಸಂಪುಟ ಸೇರಿದಂತೆ ಎಲ್ಲಾ ಶಾಸಕರು ರಾಜ್ಯದ ಸಂಪನ್ಮೂಲವನ್ನು ಕೃಢೀಕರಿಸಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ ಜನರು ಮೆಚ್ಚಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ ಮಾತನಾಡಿ, ಸರ್ಕಾರದ ವಿರುದ್ಧ ನಿರಂತರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಾ ಬಂದಿದ್ದರೂ ಮತದಾರರು ಆರೋಪ ಸುಳ್ಳು ಎನ್ನುವುದು ಚುನಾವಣೆಯಲ್ಲಿ ಸಾಬೀತಾಗಿದೆ. ಐದು ಗ್ಯಾರಂಟಿಗಳನ್ನು ರಾಜ್ಯದ ಜನರು ಒಪ್ಪಿಕೊಂಡಿದ್ದಾರೆ ಎಂದರು.ಮನ್ಮುಲ್ ನಿರ್ದೇಶಕ ಆರ್.ಎನ್ ವಿಶ್ವಾಸ್ ಮಾತನಾಡಿ, ಮೂರು ಕ್ಷೇತ್ರದ ಗೆಲುವಿಗೆ ಶ್ರಮಿಸಿದ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇವೆ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು, ಚನ್ನಪಟ್ಟಣ ತಾಲೂಕಿನ ಹಲವು ಜಿಪಂ ಕ್ಷೇತ್ರಗಳ ಜವಾಬ್ದಾರಿ ತೆಗೆದುಕೊಂಡು ಸತತ 15 ದಿನಗಳ ಕಾಲ ನಿರಂತರವಾಗಿ ಪ್ರಚಾರ ನಡೆಸಿ ಕಾಂಗ್ರೆಸ್ ಹೆಚ್ಚು ಲೀಡ್ ಬರುವಲ್ಲಿ ಶ್ರಮಿಸಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಕಾಂಗ್ರೆಸ್ ಮುಖಂಡರಾದ ಮಾರ್ಕಾಲು ಮಾಧು, ಶಿವಮಾದೇಗೌಡ, ದ್ಯಾಪೇಗೌಡ, ಪುಟ್ಟಸ್ವಾಮಿ, ಕಿರಣ್‌ಶಂಕರ್, ಕೆ.ಜೆ ದೇವರಾಜು, ಶಿವಸ್ವಾಮಿ, ಲಿಂಗರಾಜು, ಸುರೇಶ್, ಶಾಂತರಾಜು, ರೋಹಿತ್, ಶಿವಮೂರ್ತಿ, ಪ್ರಕಾಶ್, ಮಹದೇವು, ಶಿವಕುಮಾರ್, ಚೇತನ್‌ನಾಯಕ್, ಆಯೂಬ್, ಸೇರಿದಂತೆ ಇತರರು ಇದ್ದರು.