ಕೆಆರ್‌ಎಸ್ ಜಲಾಶಯದಲ್ಲಿ 106 ಅಡಿ ನೀರಿದ್ದರೂ ನಮ್ಮ ತಾಲೂಕಿನ ನಾಲೆಗಳಿಗೆ ಹಾಗೂ ಕೆರೆಕಟ್ಟೆಗಳಿಗೆ ನೀರು ಹರಿಸದೇ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಜಿಲ್ಲೆಯವರೇ ನೀರಾವರಿ ಮತ್ತು ಕೃಷಿ ಸಚಿವರಾಗಿದ್ದರೂ ಪರಿಸ್ಥಿತಿ ಸುಧಾರಿಸಲು ಸಾಧ್ಯವಾಗಿಲ್ಲ. ಇವರ ನಿರ್ಲಕ್ಷ್ಯದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕನ್ನಡಪ್ರಭ ವಾರ್ತೆ ಮಳವಳ್ಳಿ
ಕೆರೆ-ಕಟ್ಟೆಗಳಿಗೆ ನೀರು ತುಂಬಿಸದಿರುವುದನ್ನು ವಿರೋಧಿಸಿ, ಟಿಎಪಿಸಿಎಂಎಸ್‌ನಲ್ಲಿ ನಡೆದಿರುವ ಭ್ರಷ್ಟಾಚಾರ ಖಂಡಿಸಿ ಪಟ್ಟಣದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಜೊತೆಗೂಡಿ ಪ್ರತಿಭಟನೆ ನಡೆಸಿದರು.ಪಟ್ಟಣದ ಸುಲ್ತಾನ್ ರಸ್ತೆಯ ಟಿಎಪಿಸಿಎಂಎಸ್ ಕಚೇರಿ ಎದುರು ಮಾಜಿ ಶಾಸಕ ಡಾ.ಕೆ.ಅನ್ನದಾನಿ ನೇತೃತ್ವದಲ್ಲಿ ಸೇರಿದ ಎರಡು ಪಕ್ಷಗಳ ನೂರಾರು ಕಾರ್ಯಕರ್ತರು ವಿವಿಧ ಇಲಾಖೆಗಳ ಸಚಿವರು ಹಾಗೂ ಇಲಾಖೆಗಳ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.
ತಾಲೂಕಿನ ನೀರಾವರಿ ಸಮಸ್ಯೆ ನಿವಾರಿಸಲು ತಾಲೂಕು ಆಡಳಿತ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಟಿಎಪಿಸಿಎಂಎಸ್‌ನಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.ಮಾಜಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿ, ಕೆಆರ್‌ಎಸ್ ಜಲಾಶಯದಲ್ಲಿ 106 ಅಡಿ ನೀರಿದ್ದರೂ ನಮ್ಮ ತಾಲೂಕಿನ ನಾಲೆಗಳಿಗೆ ಹಾಗೂ ಕೆರೆಕಟ್ಟೆಗಳಿಗೆ ನೀರು ಹರಿಸದೇ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಜಿಲ್ಲೆಯವರೇ ನೀರಾವರಿ ಮತ್ತು ಕೃಷಿ ಸಚಿವರಾಗಿದ್ದರೂ ಪರಿಸ್ಥಿತಿ ಸುಧಾರಿಸಲು ಸಾಧ್ಯವಾಗಿಲ್ಲ. ಇವರ ನಿರ್ಲಕ್ಷ್ಯದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮೊಳಗಿ ಹೋಗಿದೆ. ಮಳವಳ್ಳಿಯಲ್ಲಿ ಯಾವ ಇಲಾಖೆಗಳ ಅಧಿಕಾರಿಗಳು ಹಣವಿಲ್ಲದೇ ಕೆಲಸ ಮಾಡುವುದಿಲ್ಲ. ತಾಲೂಕು ಆಡಳಿತ ಸಂಪೂರ್ಣ ಹಳ್ಳ ಹಿಡಿದಿದೆ. ಸಮರ್ಪಕವಾಗಿ ಮಳೆವಿಲ್ಲದೇ ಬೆಳೆಗಳು ಒಣಗುತ್ತಿವೆ. ಕೆಆರ್‌ಎಸ್ ಜಲಾಶಯದಲ್ಲಿ ನೀರು ಇದ್ದರೂ ಕೆರೆ ಕಟ್ಟೆಗಳಿಗೆ ನೀರು ಹರಿಸುತ್ತಿಲ್ಲ. ಇದ್ದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ರೈತರಿಗೆ ಸೂಕ್ತ ಪರಿಹಾರ ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು.ರೈತರ 40ಕ್ಕೂ ಹೆಚ್ಚು ಸಹಕಾರ ಸಂಘಗಳಿಗೆ ಚುನಾವಣೆ ನಡೆಸದೇ ಆಡಳಿತಾಧಿಕಾರಿಗಳನ್ನು ನೇಮಿಸಿರುವುದರಿಂದ ಅನೇಕ ಸಮಸ್ಯೆಗಳು ಕಾಡುತ್ತಿವೆ. ಟಿಎಪಿಸಿಎಂಎಸ್ ನಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ 70 ಲಕ್ಷಕ್ಕೂ ಅಧಿಕ ಹಣವನ್ನು ದುರುಪಯೋಗ ಪಡಿಸಿಕೊಂಡು ಅಕ್ರಮ ಎಸಗಿದ್ದಾರೆ. ಅದನ್ನು ಪ್ರಶ್ನೆ ಮಾಡಿದರೆ ನಿರ್ದೇಶಕನೊಬ್ಬನ ವಿರುದ್ಧ ಎಫ್ಐಆರ್ ದಾಖಲಿಸುತ್ತಾರೆ ಎಂದು ಕಿಡಿಕಾರಿದರು.
ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು. ಟಿಎಪಿಸಿಎಂಎಸ್ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಬೇಕು. ನಿರ್ದೇಶಕನ ವಿರುದ್ಧ ಎಫ್ಐಆರ್ ರದ್ದುಗೊಳಿಸಬೇಕು. ಆಡಳಿತಾಧಿಕಾರಿಗಳು ನೇಮಕವಾಗಿರುವ ಸಹಕಾರ ಸಂಘಗಳಿಗೆ ಕೂಡಲೇ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು.ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಎಚ್.ಆರ್.ಅಶೋಕ್ ಕುಮಾರ್ ಮಾತನಾಡಿ, ರಾಜ್ಯದ ಅನೇಕ ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಕಾಡುತ್ತಿದ್ದರೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ವಿರೋಧ ಪಕ್ಷಗಳ ನಾಯಕರನ್ನು ಟೀಕಿಸುವುದರಲ್ಲಿ ಕಾಲ ಕಳೆಯುತ್ತಿದ್ದಾರೆ. ಕೂಡಲೇ ಸಂಕಷ್ಟದಲ್ಲಿ ಇರುವ ರೈತರಿಗೆ ಪ್ರತಿ ಎಕರೆ 50 ಸಾವಿರ ರೂ.ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಪುಟ್ಟರಾಮು ಮಾತನಾಡಿ, ತಾಲೂಕಿನಲ್ಲಿ ಸಹಕಾರ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾಜಕೀಯ ರಹಿತ ಸಹಕಾರ ಕ್ಷೇತ್ರವನ್ನು ಕೆಲವರು ಕಲುಷಿತಗೊಳಿಸಿದ್ದಾರೆ. ಹಲವು ಸಂಘಗಳಿಗೆ ಚುನಾವಣೆ ನಡೆಸದೇ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಪ್ರತಿಭಟನೆಯಲ್ಲಿ ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು, ಜೆಡಿಎಸ್ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಅಧ್ಯಕ್ಷ ಜಯರಾಮು, ಪುರಸಭೆ ಮಾಜಿ ಉಪಾಧ್ಯಕ್ಷರಾದ ಟಿ.ನಂದಕುಮಾರ್, ಎಂ.ಟಿ.ಪ್ರಶಾಂತ್, ಮುಖಂಡರಾದ ಶಿವರುದ್ರಪ್ಪ, ಮಧು ಗಂಗಾಧರ್, ಅಶೋಕ್, ಚಿಕ್ಕಣ್ಣ, ಬಸವರಾಜು, ಮೆಹಬೂಬ್ ಪಾಷಾ, ಚಿಕ್ಕಣ್ಣ, ಹನುಮಂತು ಹಾಗೂ ಟಿಎಪಿಸಿಎಂಎಸ್ ನ ಜೆಡಿಎಸ್ ಬೆಂಬಲಿತ ನಿರ್ದೇಶಕರು ಪಾಲ್ಗೊಂಡಿದ್ದರು.
ಸಚಿವ ಶಿವಲಿಂಗೇಗೌಡ ವಿರುದ್ಧ ಕೆ.ಅನ್ನದಾನಿ ಕಿಡಿಹಾಸನದ ಪ್ರಜಾಸೇವೆ ಆಂದೋಲನದಲ್ಲಿ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರು ಕೆಲಸ ಮಾಡಿದ ಮೇಲೆ ಅಧಿಕಾರಿಗಳಿಗೆ ಹಣ ನೀಡಬೇಕು ಎಂದು ಸಾರ್ವಜನಿಕರಿಗೆ ಕರೆ ನೀಡಿರುವುದು ಸರಿಯಲ್ಲ. ಸಾರ್ವಜನಿಕ ವೇದಿಕೆಯಲ್ಲಿ ಲಂಚಕ್ಕೆ ಪ್ರೇರಿಸಿರುವುದು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ಅಬಕಾರಿ ಸಚಿವರಾದ ಮೇಲೆ ಸಿಎಲ್-7 ಪರವಾನಗಿಗೆ ಇಂತಿಷ್ಟು ಲಂಚಕ್ಕೆ ಬೇಡಿಕೆಗೆ ಇಟ್ಟು ಹಣ ಲೂಟಿಗೆ ಮುಂದಾಗಿದ್ದಾರೆ. ಇವರ ವಿರುದ್ಧ ಹಿಂದೆಯೂ ಅನೇಕ ಆರೋಪಗಳು ಕೇಳಿ ಬಂದಿದ್ದವು ಎಂದು ಮಾಜಿ ಶಾಸಕ ಕೆ.ಅನ್ನದಾನಿ ಆರೋಪಿಸಿದರು.