ಮಾಲೂರು ಪುರಸಭೆ ಕಾಂಗ್ರೆಸ್‌ ತೆಕ್ಕೆಗೆ ಕೋಮಲ ಅಧ್ಯಕ್ಷೆ

| Published : Aug 24 2024, 01:28 AM IST

ಸಾರಾಂಶ

ಕಳೆದ ಒಂದು ವರ್ಷದಿಂದ ಖಾಲಿಯಾಗಿದ್ದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದ ಪುರಸಭೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಅಧಿಕಾರಿ ತಹಸೀಲ್ದಾರ್ ಕೆ.ರಮೇಶ್ ಅವರ ನೇತೃತ್ವದಲ್ಲಿ ಚುನಾವಣೆ ನಡೆಯಿತು.

ಕನ್ನಡ ವಾರ್ತೆ ಮಾಲೂರು

ಪುರಸಭೆ ೨ನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರುಗಳ ಸ್ಥಾನಗಳಿಗೆ ಪುರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯೆ ಕೋಮಲ ಕೋಳಿ ನಾರಾಯಣ ೧೯ ಮತಗಳು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೆ, ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಬಂಡಾಯ ಸದಸ್ಯೆ ವಿಜಯಲಕ್ಷ್ಮಿ ಕೃಷ್ಣಪ್ಪ ಅವರು ೧೯ ಮತಗಳು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದರಿಂದಾಗಿ ಪುರಸಭೆಯ ಆಡಳಿತ ಕಾಂಗ್ರೆಸ್ ತೆಕ್ಕೆಗೆ ಮರಳಿದೆ.

ಕಳೆದ ಒಂದು ವರ್ಷದಿಂದ ಖಾಲಿಯಾಗಿದ್ದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದ ಪುರಸಭೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಅಧಿಕಾರಿ ತಹಸೀಲ್ದಾರ್ ಕೆ.ರಮೇಶ್ ಅವರ ನೇತೃತ್ವದಲ್ಲಿ ಚುನಾವಣೆ ನಡೆಯಿತು.

ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಕೋಮಲ ಬಿಜೆಪಿಯಿಂದ ಸುಮಿತ್ರಾ ಅವರು ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದರು, ಉಪಾಧ್ಯಕ್ಷ ಸ್ಥಾನಕ್ಕೆ ಸದಸ್ಯೆ ವಿಜಯಲಕ್ಷ್ಮಿ ಕಾಂಗ್ರೆಸ್‌ನಿಂದ ಬಿಜೆಪಿ ಸದಸ್ಯೆ ಅನಿತಾ ನಾಗರಾಜ್ ಅವರು ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದರು, ನಂತರ ನಡೆದ ಚುನಾವಣೆಯಲ್ಲಿ ಕೋಮಲ ನಾರಾಯಣ ಅಧ್ಯಕ್ಷರಾದರು. ಬಿಜೆಪಿ ಅಭ್ಯರ್ಥಿ ಸುಮಿತ್ರ ರಾಮಮೂರ್ತಿ ೭ ಮತಗಳು ಪಡೆದು ಪರಾಭವಗೊಂಡರು.

ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಜಯಲಕ್ಷ್ಮಿ ೧೯ ಮತಗಳು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾದರು, ಬಿಜೆಪಿ ಪಕ್ಷದ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಅನಿತಾ ನಾಗರಾಜ್ ೭ ಮತಗಳು ಪಡೆದು ಪರಾಭವಗೊಂಡರು.

ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ಪಟ್ಟಣದ ಪುರಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಉಪಾಧ್ಯಕ್ಷರು ಆಯ್ಕೆಯಾದ ಹಿನ್ನೆಲೆಯಲ್ಲಿ ಪುರಸಭೆ ಮುಂಭಾಗ ಪಟಾಕಿ ಸೇರಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.