ಕಾರಿನಲ್ಲಿ ಕೂತು ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯಿಂದ ಮೊಬೈಲ್ ಪೋನ್ ಕಿತ್ತುಕೊಳ್ಳಲು ಪ್ರಯತ್ನಿಸಿದ ಹಾಗೂ ಚಾಕುವಿನಿಂದ ಕೈ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದ ಪ್ರಕರಣದಲ್ಲಿ ಎಂ.ಆರ್ಮುಗಂ ಎಂಬಾತನಿಗೆ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಏಳು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಕಾರಿನಲ್ಲಿ ಕೂತು ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯಿಂದ ಮೊಬೈಲ್ ಪೋನ್ ಕಿತ್ತುಕೊಳ್ಳಲು ಪ್ರಯತ್ನಿಸಿದ ಹಾಗೂ ಚಾಕುವಿನಿಂದ ಕೈ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದ ಪ್ರಕರಣದಲ್ಲಿ ಎಂ.ಆರ್ಮುಗಂ ಎಂಬಾತನಿಗೆ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಏಳು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.ಪ್ರಕರಣದ ವಿಚಾರಣೆ ನಡೆಸಿದ ನಗರದ 68ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ರಶ್ಮಿ ಅವರು ಈ ಆದೇಶ ಮಾಡಿದ್ದಾರೆ.
ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 312 ಅನ್ವಯ ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಪ್ರಯತ್ನಿಸಿದ ಅಪರಾಧದಲ್ಲಿ ಎಂ.ಆರ್ಮುಗಂ ಅನ್ನು ದೋಷಿಯಾಗಿ ಪರಿಗಣಿಸಿ ಏಳು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿರುವ ನ್ಯಾಯಾಲಯ, ಪ್ರಕರಣ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚಿಸಿದೆ.ಪ್ರಕರಣದ ಹಿನ್ನೆಲೆ:
ವಿ. ಸುಮನ್ ಎಂಬುವರು 2024ರ ಅ.26ರಂದು ಮಧ್ಯರಾತ್ರಿ 2 ಗಂಟೆಗೆ ಕಲಾಸಿಪಾಳ್ಯದ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿಕೊಂಡು ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಆರೋಪಿ ಆರ್ಮುಗಂ ಮೊಬೈಲ್ ಫೋನ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದ. ಸುಮನ್ ಮೊಬೈಲ್ ಗಟ್ಟಿಯಾಗಿ ಹಿಡಿದುಕೊಂಡಾಗ, ಆತನ ಬಲಗೈಗೆ ಆರೋಪಿಯು ಚಾಕುವಿನಿಂದ ಇರಿದಿದ್ದನು. ಈ ಸಂಬಂಧ ಗಾಯಾಳು ಕಲಾಸಿಪಾಳ್ಯ ಠಾಣೆಗೆ ದೂರು ನೀಡಿದ್ದರು. ಆ ದೂರು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ನಂತರ ಕಲಾಸಿಪಾಳ್ಯ ಇನ್ಸ್‌ಪೆಕ್ಟರ್ ಕಿರಣ್ ಕುಮಾರ್ ನೀಲಗಾರ ತನಿಖೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪೊಲೀಸರ ಪರ ಸರ್ಕಾರಿ ಅಭಿಯೋಜಕ ಆರ್.ವಿ. ಭಟ್ ವಾದಿಸಿದ್ದರು.