ಸಾರಾಂಶ
ಮಾಗಡಿ: ತಿಪ್ಪಗೊಂಡನಹಳ್ಳಿ ಜಲಾಶಯದ ಸುತ್ತಮುತ್ತ ಉತ್ತಮ ಮಳೆಯಾಗುತ್ತಿದ್ದು ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿರುವುದರಿಂದ ಮಂಚನಬೆಲೆ ಜಲಾಶಯದಿಂದ 10 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ ಎಂದು ಮಂಚನಬೆಲೆ ಯೋಜನಾ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ನದಿ ಪಾತ್ರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮಂಚನಬೆಲೆ ಜಲಾಶಯದ ಮೇಲ್ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಂಚನಬೆಲೆ ಜಲಾಶಯಕ್ಕೆ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು ಇದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಿತಿ ತಲುಪಿರುವುದರಿಂದ ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನೀರು ಹೊರ ಬಿಡಲಾಗುತ್ತಿದೆ. ಜಲಾಶಯದ ಕೆಳಗಿನ ನದಿ ಪಾತ್ರದ ಅಕ್ಕಪಕ್ಕದ ಸಾರ್ವಜನಿಕರು ತಮ್ಮ ಜಾನುವಾರುಗಳನ್ನು ನದಿ ಪಾತ್ರದಲ್ಲಿ ಬಿಡುವುದಾಗಲಿ, ಸಾರ್ವಜನಿಕರು ನದಿಯನ್ನು ದಾಟುವುದಾಗಲಿ ಮಾಡಬಾರದೆಂದು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಹೆಚ್ಚುವರಿ ನೀರು ಬಿಡುತ್ತಿರುವುದರಿಂದ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಲಾಗಿದೆ.ಶಾಸಕ ಬಾಲಕೃಷ್ಣ ಈ ಕುರಿತು ಪ್ರತಿಕ್ರಿಯಿಸಿ, ಉತ್ತಮ ಮಳೆಯಾಗುತ್ತಿದ್ದು ಮಂಚನಬೆಲೆ ಜಲಾಶಯದಿಂದ ಹೆಚ್ಚುವರಿ ನೀರನ್ನು ಬಿಡುತ್ತಿರುವುದರಿಂದ ಸಾರ್ವಜನಿಕರು ತಮ್ಮ ಜಾನುವಾರುಗಳನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದರ ಜೊತೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾಗಿದೆ. ನದಿ ದಡದಲ್ಲಿ ಅನಗತ್ಯ ಓಡಾಡುವುದು, ನೀರಿನಲ್ಲಿ ಈಜುವಂತಹ ಸಾಹಸಕ್ಕೆ ಕೈ ಹಾಕಬಾರದು. ಅಧಿಕಾರಿಗಳು ನೀಡಿರುವ ಸೂಚನೆಗಳನ್ನು ಪಾಲನೆ ಮಾಡಬೇಕು ಮನವಿ ಮಾಡಿದರು.
ಹೊಸ ಸೇತುವೆ ನಿರ್ಮಾಣಕ್ಕೆ ಒತ್ತಾಯ:ಕಳೆದ ಬಾರಿ ಮಂಚನಬೆಲೆ ಜಲಾಶಯದಿಂದ ಹೆಚ್ಚುವರಿ ನೀರು ಬಿಟ್ಟ ಪರಿಣಾಮ ಜಲಾಶಯದ ಪಕ್ಕದ ಮುಖ್ಯ ಸೇತುವೆ ಕೊಚ್ಚಿ ಹೋಗಿತ್ತು. ಈಗ ತಾತ್ಕಾಲಿಕ ಸೇತುವೆಯಲ್ಲಿ ಸಾರ್ವಜನಿಕರು ಸಂಚರಿಸುತ್ತಿದ್ದಾರೆ. ಕಾವೇರಿ ನೀರಾವರಿ ನಿಗಮದಿಂದ ಹೊಸ ಸೇತುವೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರದಲ್ಲೇ ಹೊಸ ಸೇತುವೆ ಕಾಮಗಾರಿ ನಿರ್ಮಿಸಿಕೊಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪೋಟೋ 22ಮಾಗಡಿ1:ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯದಿಂದ ಹೆಚ್ಚುವರಿ ನೀರು ಬಂದ ಹಿನ್ನೆಲೆಯಲ್ಲಿ ಜಲಾಶಯದಿಂದ ನೀರು ಹೊರ ಬಿಟ್ಟಿರುವುದು.