ಜಗಜೀವನ್ ರಾಂ ಅವರಿಗೆ ಕೇವಲ ಅಧಿಕಾರ ಮುಖ್ಯವಾಗಿರಲಿಲ್ಲ. ಬದಲಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ಹಂಬಲವಿತ್ತು. ಇಂದಿನ ಯುವ ಪೀಳಿಗೆಯು ಅವರ ದೇಶಪ್ರೇಮ, ಸಾಮಾಜಿಕ ಕಳಕಳಿ ಹಾಗೂ ಉನ್ನತ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಮಂಡ್ಯ:
ಹಸಿರು ಕ್ರಾಂತಿ ಹರಿಕಾರ ದೇಶದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 40ನೇ ಪುಣ್ಯಸ್ಮರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಉದ್ಯಾನವನದ ಜಗಜೀವನ ರಾಮ್ ಪ್ರತಿಮೆಗೆ ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆ ಮುಖಂಡರು ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.ಡೀಸಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಎಸ್ಪಿ ಡಾ.ವಿ.ಜೆ.ಶೋಭರಾಣಿ ಸೇರಿದಂತೆ ವಿವಿಧ ಸಂಘಟನೆ ಮುಖಂಡರು ಹಸಿರು ಹರಿಕಾರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಬಳಿಕ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಡಾ. ಬಾಬು ಜಗಜೀವನ್ ರಾಮ್ ಅವರು ದೇಶ ಕಂಡ ಅಪರೂಪದ ಮತ್ತು ಧೀಮಂತ ನಾಯಕರಾಗಿದ್ದರು. ಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಸರ್ಕಾರದ ವಿವಿಧ ಉನ್ನತ ಹುದ್ದೆಗಳಲ್ಲಿ ಹಾಗೂ ಸಚಿವರಾಗಿ ಸೇವೆ ಸಲ್ಲಿಸಿದರೂ ಸದಾ ಸಾಮಾಜಿಕ ಕಳಕಳಿಯೊಂದಿಗೆ ದೀನದಲಿತರ ಮತ್ತು ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದವರು ಎಂದರು.ಜಗಜೀವನ್ ರಾಂ ಅವರಿಗೆ ಕೇವಲ ಅಧಿಕಾರ ಮುಖ್ಯವಾಗಿರಲಿಲ್ಲ. ಬದಲಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ಹಂಬಲವಿತ್ತು. ಇಂದಿನ ಯುವ ಪೀಳಿಗೆಯು ಅವರ ದೇಶಪ್ರೇಮ, ಸಾಮಾಜಿಕ ಕಳಕಳಿ ಹಾಗೂ ಉನ್ನತ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಕರೆ ನೀಡಿದರು.
ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಬಾಬು ಜಗಜೀವನ್ ರಾಮ್ ಅವರ ಉದಾತ್ತ ಆಶಯಗಳು ಮತ್ತು ತತ್ವಗಳ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಕರೆ ನೀಡಿದರು.ಕಾರ್ಯಕ್ರಮದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮನುಜಶ್ರೀ, ವಿವಿಧ ಸಮುದಾಯದ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.