ಪ್ರಶ್ನೆಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ನಿಗಾ, ಜಿಪಿಎಸ್ ಅಳವಡಿಸಿರುವ ವಾಹನ ಹಾಗೂ ಪೊಲೀಸ್ ಎಸ್ಕಾರ್ಟ್‌ನೊಂದಿಗೆ ಅತ್ಯಂತ ಸುರಕ್ಷಿತವಾಗಿ ಸಾಗಿಸಬೇಕು. ನಿಗದಿತ ವೇಳಾಪಟ್ಟಿಯಂತೆ ಪ್ರಶ್ನೆಪತ್ರಿಕೆಗಳನ್ನು ತಲುಪಿಸುವ ಜವಾಬ್ದಾರಿಯನ್ನು ತಹಸೀಲ್ದಾರರು ಹಾಗೂ ಸಂಬಂಧಿತ ಅಧಿಕಾರಿಗಳಿಗೆ ವಹಿಸಬೇಕು.
ಕನ್ನಡಪ್ರಭ ವಾರ್ತೆ ಮಂಡ್ಯ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಉಳಿಕೆ ವೃಂದದ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಸೆ.6 ರಂದು ನಡೆಯಲಿರುವ ಲಿಖಿತ ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಅಭ್ಯರ್ಥಿಗಳಿಗೆ ಅನುಕೂಲಕರ ವಾತಾವರಣದಲ್ಲಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ 8 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, ಒಟ್ಟು 3,289 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಿ, ಅವುಗಳ ಕಾರ್ಯನಿರ್ವಹಣೆಯನ್ನು ಪೂರ್ವಭಾವಿಯಾಗಿ ಪರಿಶೀಲಿಸಬೇಕು. ವಿದ್ಯುತ್, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸೂಚಿಸಿದರು.ಪ್ರಶ್ನೆಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ನಿಗಾ, ಜಿಪಿಎಸ್ ಅಳವಡಿಸಿರುವ ವಾಹನ ಹಾಗೂ ಪೊಲೀಸ್ ಎಸ್ಕಾರ್ಟ್‌ನೊಂದಿಗೆ ಅತ್ಯಂತ ಸುರಕ್ಷಿತವಾಗಿ ಸಾಗಿಸಬೇಕು. ನಿಗದಿತ ವೇಳಾಪಟ್ಟಿಯಂತೆ ಪ್ರಶ್ನೆಪತ್ರಿಕೆಗಳನ್ನು ತಲುಪಿಸುವ ಜವಾಬ್ದಾರಿಯನ್ನು ತಹಸೀಲ್ದಾರರು ಹಾಗೂ ಸಂಬಂಧಿತ ಅಧಿಕಾರಿಗಳಿಗೆ ವಹಿಸಬೇಕು. ಪ್ರಶ್ನೆಪತ್ರಿಕೆಗಳ ಸುರಕ್ಷಿತ ಸಾಗಣೆಗೆ 8 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಮಾತನಾಡಿ, ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ಸೂಕ್ತ ಪೊಲೀಸ್ ಬಂದೋಬಸ್ತ್, ವೈದ್ಯಾಧಿಕಾರಿಗಳು ಹಾಗೂ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಗರಿಷ್ಠ 24 ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆ ಅವಕಾಶ ಕಲ್ಪಿಸಬೇಕು. ಪರೀಕ್ಷಾ ನಿರ್ವಹಣೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.ಅಭ್ಯರ್ಥಿಗಳು ನಿಷೇಧಿತ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಭ್ಯರ್ಥಿಗಳ ತಪಾಸಣೆಯನ್ನು ಸಮರ್ಪಕವಾಗಿ ನಡೆಸಲು ವಸ್ತ್ರ ಸಂಹಿತೆ (Dress Code) ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಪಾಸಣೆ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಅನಗತ್ಯ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳ ಹಾಜರಾತಿಯನ್ನು ಕ್ಯೂಆರ್ ಕೋಡ್ ಮೂಲಕ ದಾಖಲಿಸಲಾಗುತ್ತದೆ. ನಕಲು ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಜಾಮರ್‌ಗಳನ್ನು ಅಳವಡಿಸಲಾಗಿದೆ ಎಂದರು.ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಪ್ರವೇಶ ಪತ್ರ ಹಾಗೂ ಸರ್ಕಾರ ನಿಗದಿಪಡಿಸಿರುವ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪರಿಶೀಲಿಸಿ ನಂತರವೇ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನೀಡಬೇಕು. ದಾಖಲೆಗಳ ಪರಿಶೀಲನೆಯಲ್ಲಿ ಲೋಪವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಸಮಯಪಾಲನೆ, ಶಿಸ್ತು ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಪರೀಕ್ಷೆಯ ಪಾವಿತ್ರ್ಯ ಕಾಪಾಡಬೇಕು ಎಂದರು.