ಸಾರಾಂಶ
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಗುರುವಾರ ಧಾರ್ಮಿಕ ದತ್ತಿ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು.
ಮಂಗಳೂರು: ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ನಾಡಿನ ಹೆಮ್ಮೆಯ ಉತ್ಸವವಾಗಿ ರೂಪುಗೊಂಡಿದೆ ಎಂದು ರಾಜ್ಯ ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಜನಾರ್ದನ ಪೂಜಾರಿ ಅವರು ಬೆಂಗಳೂರಿನಲ್ಲೂ ಒಂದು ಬಾರಿ ದಸರಾ ಹಬ್ಬವನ್ನು ಮಾಡಿಸಿದ್ದರು ಎಂದು ಸ್ಮರಿಸಿದ ರಾಮಲಿಂಗ ರೆಡ್ಡಿ, ನಾಡದೇವಿ ಒಳಿತನ್ನು ಮಾಡಲಿ ಎಂದು ಶುಭ ಹಾರೈಸಿದರು.ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ನಮ್ಮ ದೇಶದ ಸಂಸ್ಕೃತಿಯ ಸಾರ ಕುದ್ರೋಳಿ ಕ್ಷೇತ್ರದಲ್ಲಿ ಇದೆ. ಈ ಕ್ಷೇತ್ರದ ಜತೆ ನಾವು ಭಾವನಾತ್ಮಕ ಸಂಬಂಧವನ್ನು ಹೊಂದಿದ್ದೇವೆ. ಆ ರೀತಿಯ ಒಡನಾಟ ಕ್ಷೇತ್ರ ಮತ್ತು ಜನಾರ್ದನ ಪೂಜಾರಿ ಅವರ ಜತೆಗಿದೆ. ಯಾವುದೇ ಧರ್ಮವು, ಮನಸ್ಸು ಮತ್ತು ದೇಹಕ್ಕೆ ಘಾಸಿ ಮಾಡುವ ಕತ್ತಿಯಾಗಬಾರದು. ನಾರಾಯಣ ಗುರುಗಳ ಹಾದಿಯಲ್ಲಿ ನಾವು ಮುನ್ನಡೆಯಬೇಕಾಗಿದೆ ಎಂದರು.ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ಬಿ. ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮಾಜಿ ಶಾಸಕ ಜೆ.ಆರ್. ಲೋಬೊ, ಶಾಸಕ ಅಶೋಕ್ ಪಠಾಣ್, ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕ್ಷೇತ್ರದ ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಟ್ರಸ್ಟಿಗಳಾದ ಸಂತೋಷ್ ಪೂಜಾರಿ, ಕೃತಿನ್ ಡಿ. ಅಮೀನ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ.ಬಿ.ಜಿ. ಸುವರ್ಣ, ಸದಸ್ಯರಾದ ಹರಿಕೃಷ್ಣ ಬಂಟ್ವಾಳ, ಕಿಶೋರ್ ದಂಡೆಕೇರಿ, ಹರೀಶ್ ಕುಮಾರ್ ಇದ್ದರು.ದಸರಾ ಗೌರವ ಸನ್ಮಾನ:ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ತುಕಾರಾಂ ಪೂಜಾರಿ, ಲೇಡಿಗೋಶನ್ ವೈದ್ಯಾಧಿಕಾರಿ ಡಾ. ದುರ್ಗಾಪ್ರಸಾದ್ ಅವರನ್ನು ದಸರಾ ಅಂಗವಾಗಿ ಗೌರವಿಸಲಾಯಿತು.ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.ಕಾರ್ಯಕ್ರಮವನ್ನು ಸ್ಮಿತೇಶ್ ಎಸ್. ಬಾರ್ಯ ನಿರೂಪಿಸಿದರು.