ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ರಾಷ್ಟ್ರೀಯ ಲೋಕ ಅದಾಲತ್‌ನ್ನು ಮಾ.14ರಂದು ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ, ಸುಳ್ಯ ನ್ಯಾಯಾಲಯ ಆವರಣಗಳಲ್ಲಿ ಆಯೋಜಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್, ಪರಸ್ಪರ ಒಪ್ಪಿಗೆಯ ಮೂಲಕ ವಿವಾದಗಳನ್ನು ಇತ್ಯರ್ಥಪಡಿಸಿಕೊಳ್ಳಲು ಮತ್ತು ದೀರ್ಘಕಾಲದ ಮೊಕದ್ದಮೆಗಳನ್ನು ತಪ್ಪಿಸಲು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.3000 ರಾಜಿಯಾಗಬಹುದಾದ ಪ್ರಕರಣಗಳು: ಫೆಬ್ರವರಿ 1ರವರೆಗೆ ದಕ್ಷಿಣ ಕನ್ನಡದಲ್ಲಿ ಒಟ್ಟು 54,677 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ. ಈ ಪೈಕಿ 3 ಸಾವಿರ ಪ್ರಕರಣಗಳನ್ನು ರಾಜಿಯಾಗಬಹುದಾದ ಪ್ರಕರಣಗಳೆಂದು ಗುರುತಿಸಲಾಗಿದ್ದು, ಅದರಲ್ಲಿ ಈಗಾಗಲೇ 220 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. 2780 ಪ್ರಕರಣಗಳು ಈ ರಾಷ್ಟ್ರೀಯ ಅದಾಲತ್‌ನಲ್ಲಿ ಇತ್ಯರ್ಥಕ್ಕೆ ಸೂಕ್ತವಾಗಿವೆ ಎಂದು ತಿಳಿಸಿದರು.ಇದರ ಜತೆಗೆ ಜನವರಿ 2ರಿಂದ ನಡೆಯುತ್ತಿರುವ ‘ಮಧ್ಯಸ್ಥಿಕೆ ಡ್ರೈವ್ 2.0’ಗೆ ಒಟ್ಟು 931 ಪ್ರಕರಣಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 126 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇದಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 79 ನುರಿತ ವಕೀಲರನ್ನು ಮಧ್ಯಸ್ಥಗಾರರನ್ನಾಗಿ ನೇಮಿಸಲಾಗಿದೆ ಎಂದು ಬಸವರಾಜ್ ಹೇಳಿದರು.
ರಾಜಿ ಯೋಗ್ಯ ಪ್ರಕರಣಗಳು:ರಾಜಿ ಸಂಧಾನದ ಮುಖಾಂತರ ಮೋಟಾರು ವಾಹನ ಅಪಘಾತ ಪ್ರಕರಣಗಳು, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಮರಳು ಅಕ್ರಮ ಸಾಗಾಟ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಚೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಭೂಸ್ವಾಧೀನ ಹಾಗೂ ಭೂಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳ ಹಾಗೂ ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾನೂನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಸಾರ್ವಜನಿಕರು ಈ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು.ಈ ಪ್ರಕ್ರಿಯೆಯಲ್ಲಿ ನ್ಯಾಯಾಧೀಶರು ಹಾಗೂ ಸಂಬಂಧಪಟ್ಟ ಪ್ರಕರಣಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸುತ್ತಾರೆ. ಇಬ್ಬರೂ ಪಕ್ಷಗಾರರು ಪ್ರಕರಣವನ್ನು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡರೆ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಈ ಆದೇಶದ ವಿರುದ್ಧ ಯಾವುದೇ ಮೇಲ್ಮನವಿ ಇರುವುದಿಲ್ಲ. ಕಡಿಮೆ ಖರ್ಚಿನಲ್ಲಿ ತ್ವರಿತ ನ್ಯಾಯ ಪಡೆದುಕೊಂಡು ತಮ್ಮ ಸಮಯ ಹಾಗೂ ಸಂಬಂಧಗಳನ್ನು ಉಳಿಸಿಕೊಳ್ಳಲು ಇದೊಂದು ವಿಶೇಷ ಅವಕಾಶ ಎಂದು ನ್ಯಾಯಾಧೀಶರು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ ಇದ್ದರು.
ಹೊಸ ತಾಲೂಕು ಕೋರ್ಟ್‌ಗೆ ಜಾಗ ಗುರುತು
ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾದ ತಾಲೂಕುಗಳಲ್ಲಿ ನ್ಯಾಯಾಲಯ ಸ್ಥಾಪನೆಯ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮೂಲ್ಕಿ ಮತ್ತು ಉಳ್ಳಾಲ ತಾಲೂಕುಗಳಲ್ಲಿ ಜಾಗ ಗುರುತಿಸಲಾಗುತ್ತಿದೆ. ಕಡಬ ತಾಲೂಕಿನಲ್ಲಿ ಈಗಾಗಲೇ ಭೂಮಿಯನ್ನು ಗುರುತಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ತಿಳಿಸಿದ್ದಾರೆ.
ಪ್ರಸ್ತುತ ಮಂಗಳೂರಿನ 6 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 8 ಜೆಎಂಎಫ್‌ಸಿ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ಹುದ್ದೆಗಳು ಖಾಲಿಯಿವೆ. ಏಪ್ರಿಲ್‌ನಲ್ಲಿ ವರ್ಗಾವಣೆಯ ಸಮಯದಲ್ಲಿ ಹುದ್ದೆಗಳನ್ನು ಭರ್ತಿ ಮಾಡುವ ಸಾಧ್ಯತೆಯಿದೆ. ಎಲ್ಲ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ನೇಮಕವಾದರೆ ಪ್ರಕರಣಗಳ ಇತ್ಯರ್ಥಕ್ಕೆ ವೇಗ ಸಿಗಲಿದೆ ಎಂದರು.ಚೆಕ್ ಬೌನ್ಸ್, ವಿಮೆ ಪ್ರಕರಣಗಳೇ ಹೆಚ್ಚುಈ ರಾಷ್ಟ್ರೀಯ ಲೋಕ ಅದಾಲತ್‌ಗೆ ಗುರುತಿಸಲಾದ ಹೆಚ್ಚಿನ ಪ್ರಕರಣಗಳು ಚೆಕ್ ಬೌನ್ಸ್, ಮೋಟಾರು ವಾಹನ ಅಪಘಾತ ವಿಮೆಗೆ ಸಂಬಂಧಿಸಿದವುಗಳು. ಕಳೆದ ವರ್ಷ ಡಿ.13ರಂದು ನಡೆದ ಲೋಕ ಅದಾಲತ್‌ನಲ್ಲಿ 32,54,73,958 ರು. ಮೊತ್ತದ ಒಟ್ಟು 3499 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಅಲ್ಲದೆ ಆಸ್ತಿ ತೆರಿಗೆ, ಸಂಚಾರ ಉಲ್ಲಂಘನೆ ದಂಡ ಮತ್ತು ಇತರ ಪ್ರಕರಣಗಳಿಗೆ ಸಂಬಂಧಿಸಿದ ಒಟ್ಟು 2,94,167 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದ್ದು, 102,94,65,632 ರು. ವಸೂಲಿ ಮಾಡಲಾಗಿದೆ.