ಪ್ರಸ್ತುತ ಇಲ್ಲಿ 68 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಸುಮಾರು 23 ತಿಂಗಳ ಅವಧಿಯಲ್ಲಿ 3.82 ಕೋಟಿ ರು. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು ವಿವರಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ತಾಲೂಕಿನ ಗಾಣಿಗ ಮಂಗಲ ಗ್ರಾಮದಲ್ಲಿ ಸುಮಾರು 3.82 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡವನ್ನು ಶಾಸಕ ಎಂ.ಆರ್‌. ಮಂಜುನಾಥ್ ಲೋಕಾರ್ಪಣೆಗೊಳಿಸಿದರು.

ಬಳಿಕ ಅವರು ಮಾತನಾಡಿ, ಆದಿವಾಸಿ ಮತ್ತು ಬುಡಕಟ್ಟು ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಬೇಕು ಎಂಬ ಸದುದ್ದೇಶದಿಂದ ಸರ್ಕಾರ ವಸತಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಂತೆ ಶಿಥಿಲಗೊಂಡಂಥ ಕಟ್ಟಡಗಳಲ್ಲಿ ಶಾಲಾ ಮಕ್ಕಳು ಪಾಠ- ಪ್ರವಚನ ಕೇಳಬೇಕಾದಂತಹ ಪರಿಸ್ಥಿತಿ ಮನಗಂಡು ಕೋಟ್ಯಂತರ ರು. ಖರ್ಚು ಮಾಡಿ ಕಟ್ಟಡ ನಿರ್ಮಿಸಲಾಗಿದೆ. ಈ ನೂತನ ಕಟ್ಟಡವು ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ದಾರಿ ತೋರಿಸುವ ಕೇಂದ್ರವಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ ಮಾತನಾಡಿ, 1969ರಲ್ಲಿ ಕೇವಲ 30 ಮಕ್ಕಳೊಂದಿಗೆ ಆರಂಭವಾದ ಈ ವಸತಿ ಶಾಲೆ ಇಂದು ಮಹತ್ವದ ಹಂತಕ್ಕೆ ತಲುಪಿದೆ ಎಂದು ತಿಳಿಸಿದರು. ಈ ಶಾಲೆಯ ಅಭಿವೃದ್ಧಿಗೆ ಇದುವರೆಗೂ ಎಲ್ಲ ಜನಪ್ರತಿನಿಧಿಗಳ ಶ್ರಮ ಕಾರಣವಾಗಿದೆ ಎಂದು ಹೇಳಿದರು.

ಪ್ರಸ್ತುತ ಇಲ್ಲಿ 68 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಸುಮಾರು 23 ತಿಂಗಳ ಅವಧಿಯಲ್ಲಿ 3.82 ಕೋಟಿ ರು. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು ವಿವರಿಸಿದರು.

ಈಗಾಗಲೇ ಎಂಟನೇ ತರಗತಿಯವರೆಗೆ ಬೋಧನೆ ಮುಂದುವರಿಸಲು ಅನುಮತಿ ನೀಡಲಾಗಿದೆ ಎಂದರು.

ಇಲ್ಲಿನ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉನ್ನತ ಮಟ್ಟದ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಸ್ಥಾನ ಗಳಿಸಲಿ ಎಂದು ಅವರು ಆಶಯ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಂಗಮ್ಮ, ಉಪಾಧ್ಯಕ್ಷೆ ಮಹದೇವಮ್ಮ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯಪಾಲಕ ಇಂಜಿನಿಯರ್‌ ಪಂಪಾಪತಿ, ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ತನುಜ್ ಕುಮಾರ್, ಜಿಲ್ಲಾ ಬುಡಕಟ್ಟು ಅಭಿವೃದ್ಧಿ ಸಂಘದ ಕಾರ್ಯದರ್ಶಿ ಮಾದೇಗೌಡ, ತಾಲೂಕು ಆರೋಗ್ಯಾಧಿಕಾರಿ ಪ್ರಕಾಶ್ ಹಾಗೂ ಗ್ರಾಮ ಲೆಕ್ಕ ಅಧಿಕಾರಿ ಶೇಷಣ್ಣ, ಪಿಡಿಒ ಸಿದ್ದಪ್ಪ ಹಾಜರಿದ್ದರು.