ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಹಾಗೂ ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ಜಲಮೂಲಗಳು ಮಲಿನಗೊಳ್ಳುತ್ತವೆ.

ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ । ನೈಸರ್ಗಿಕ ಜಲಸಂಪನ್ಮೂಲಗಳ ಸಂರಕ್ಷಣೆಗೆ ಸಹಕರಿಸಿ: ಡಿಸಿ ಜಿ ಪ್ರಭು

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬಗಳು ಸಮೀಪಿಸುತ್ತಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ರೀತಿಯಲ್ಲಿ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲಮೂಲಗಳ ಸಂರಕ್ಷಣೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಜಿ ಪ್ರಭು ಮನವಿ ಮಾಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿ, ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಹಾಗೂ ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ಜಲಮೂಲಗಳು ಮಲಿನಗೊಳ್ಳುತ್ತವೆ. ಇದರಿಂದ ಜಲಚರಗಳು ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವ ಹಿನ್ನೆಲೆಯಲ್ಲಿ ಇಂತಹ ವಿಗ್ರಹಗಳ ತಯಾರಿಕೆ, ಮಾರಾಟ, ಬಳಕೆ ಮತ್ತು ಜಲಮೂಲಗಳಲ್ಲಿ ವಿಸರ್ಜನೆಯನ್ನು ನಿಷೇಧಿಸಲಾಗಿದೆ ಎಂದರು.

ರಾಜ್ಯ ಸರ್ಕಾರದ ಆದೇಶ, ಉಚ್ಚ ನ್ಯಾಯಾಲಯದ ಆದೇಶ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶಗಳಂತೆ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಬಣ್ಣ ಲೇಪಿತ ವಿಗ್ರಹಗಳ ಉತ್ಪಾದನೆ, ಮಾರಾಟ ಮತ್ತು ಯಾವುದೇ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1974ರ ಕಲಂ 33(ಎ) ಅನ್ವಯ ರಾಜ್ಯದ ಯಾವುದೇ ಜಲಮೂಲಗಳಲ್ಲಿ ಪಿ.ಒ.ಪಿ ಹಾಗೂ ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಪಿ.ಒ.ಪಿ ಹಾಗೂ ರಾಸಾಯನಿಕ ಬಣ್ಣದ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಮಾರಾಟ, ಬಳಕೆ ಮತ್ತು ವಿಸರ್ಜನೆಗೆ ಸಂಬಂಧಿಸಿದ ನಿಷೇಧ ಉಲ್ಲಂಘಿಸಿದಲ್ಲಿ ಜಲ ಕಾಯ್ದೆ, 1974ರ ಕಲಂ 41 ಮತ್ತು 43ರಡಿ ದಂಡದೊಂದಿಗೆ ಕನಿಷ್ಠ ಒಂದು ವರ್ಷ ಆರು ತಿಂಗಳಿಂದ ಗರಿಷ್ಠ ಆರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಅಲ್ಲದೆ, ಪರಿಸರ (ಸಂರಕ್ಷಣೆ) ಕಾಯ್ದೆ, 1986ರ ಕಲಂ 5 ಮತ್ತು 15ರಡಿ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂ.ವರೆಗೆ ದಂಡ ಅಥವಾ ಎರಡೂ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.

ಪರಿಸರ ಸ್ನೇಹಿ ಹಬ್ಬ ಆಚರಿಸಿ:

ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಅಥವಾ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ವಿಗ್ರಹಗಳನ್ನು ಮಾತ್ರ ಬಳಸಿ ಗೌರಿ-ಗಣೇಶ ಹಬ್ಬ ಆಚರಿಸಬೇಕು. ಪೂಜೆಯ ನಂತರ ವಿಗ್ರಹಗಳನ್ನು ನಗರಸಭೆ/ಪುರಸಭೆ ವತಿಯಿಂದ ನಿಗದಿಪಡಿಸಿರುವ ವಿಸರ್ಜನಾ ಸ್ಥಳಗಳಲ್ಲಿ ಅಥವಾ ಸಂಚಾರಿ ವಿಸರ್ಜನಾ ವಾಹನಗಳಲ್ಲಿ ಮಾತ್ರ ವಿಸರ್ಜಿಸಬೇಕು.

ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಸೇರಿದಂತೆ ಹಸಿ ಕಸ ಹಾಗೂ ಅಲಂಕಾರಿಕ ವಸ್ತುಗಳನ್ನು ಪ್ರತ್ಯೇಕಿಸಿ, ನೀರಿಗೆ ವಿಸರ್ಜಿಸದೆ ನಗರಸಭೆ, ಪುರಸಭೆಯ ಕಸ ಸಂಗ್ರಹಣಾ ವಾಹನಗಳಿಗೆ ನೀಡಬೇಕು.

ಅದೇ ರೀತಿ ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿರುವುದರಿಂದ, ಗೌರಿ-ಗಣೇಶ ಹಬ್ಬದ ಆಚರಣೆಯಲ್ಲಿಯೂ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಬಳಸಬಾರದು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲಸಂಪನ್ಮೂಲಗಳ ಸಂರಕ್ಷಣೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಜಿ ಪ್ರಭು ಅವರು ಮನವಿ ಮಾಡಿದರು.

ಸಿಕೆಬಿ-1 ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರರೊಂದಿಗೆ ಜಿಲ್ಲಾಧಿಕಾರಿ ಜಿ ಪ್ರಭು ಮಾತನಾಡಿದರು