ಕೊಪ್ಪಳದಲ್ಲಿ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಕೇಂದ್ರ ಸಚಿವರಿಗೆ ಹಲವು ಸಂಘಟನೆಗಳ ಮನವಿ

| Published : Mar 03 2025, 01:48 AM IST

ಕೊಪ್ಪಳದಲ್ಲಿ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಕೇಂದ್ರ ಸಚಿವರಿಗೆ ಹಲವು ಸಂಘಟನೆಗಳ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಕೊಪ್ಪಳ ಬಳಿ ಉಕ್ಕು ಕಾರ್ಖಾನೆ ಮತ್ತು ಅಣು ವಿದ್ಯುತ್ ಸ್ಥಾವರ ಸ್ಥಾಪಿಸದಂತೆ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹಲವಾರು ಸಂಘಟನೆಗಳು ಮನವಿ ಸಲ್ಲಿಸಿವೆ. ಬಳಿಕ ವಿವಿಧ ಸಂಘಟನೆಗಳ ಮುಖಂಡರು ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಕೊಪ್ಪಳ: ಕೊಪ್ಪಳ ಬಳಿ ಉಕ್ಕು ಕಾರ್ಖಾನೆ ಮತ್ತು ಅಣು ವಿದ್ಯುತ್ ಸ್ಥಾವರ ಸ್ಥಾಪಿಸದಂತೆ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹಲವಾರು ಸಂಘಟನೆಗಳು ಮನವಿ ಸಲ್ಲಿಸಿವೆ.

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಪ್ಪಳ ತಾಲೂಕು ಪರಿಸರ ಹಿತರಕ್ಷಣಾ ಸಮಿತಿ, ಕೊಪ್ಪಳ ಬಚಾವೋ ಆಂದೋಲನ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವಾರು ಸಂಘಟನೆಗಳು ಮತ್ತು ಮುಖಂಡರು ಮನವಿ ಸಲ್ಲಿಸಿದರು.

ಕೊಪ್ಪಳ ಬಳಿ ಯಾವುದೇ ಕಾರಣಕ್ಕೂ ಕಾರ್ಖಾನೆ ಸ್ಥಾಪಿಸುವುದಕ್ಕೆ ಅವಕಾಶ ನೀಡಬಾರದು. ಹಾಗೊಂದು ವೇಳೆ ಅನುಮತಿ ನೀಡಿದ್ದೇ ಆದರೆ ದೊಡ್ಡ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈಗಾಗಲೇ ರಾಜ್ಯ ಸರ್ಕಾರ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ₹54 ಸಾವಿರ ಕೋಟಿ ವೆಚ್ಚದಲ್ಲಿ ಬಿಎಸ್‌ಪಿಎಲ್‌ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡಿದೆ. ಆದರೆ, ಇದರಿಂದ ಕೊಪ್ಪಳವನ್ನೇ ಸ್ಥಳಾಂತರ ಮಾಡಬೇಕಾಗುತ್ತದೆ. ಈಗಾಗಲೇ ಇರುವ ಕಾರ್ಖಾನೆಗಳಿಂದಲೇ ಹತ್ತಾರು ಗ್ರಾಮಗಳು ನರಕಯಾತನೆ ಅನುಭವಿಸುತ್ತಿವೆ. ಇದನ್ನು ಕೂಡಲೇ ತಡೆಯುವಂತೆ ಆಗ್ರಹಿಸಿದರು.

ಇದರ ಜತೆಗೆ ಕೊಪ್ಪಳ ಬಳಿ ಅಣುವಿದ್ಯುತ್ ಸ್ಥಾವರ ಸ್ಥಾಪನೆಗೂ ಸರ್ವೆ ನಡೆದಿದೆ. ಹೀಗಾಗಿ, ಇದನ್ನು ಕೈಬಿಡುವಂತೆಯೂ ಆಗ್ರಹಿಸಿದರು.

ಕೊಪ್ಪಳ ತಾಲೂಕು ಪರಿಸರ ಹಿತರಕ್ಷಣಾ ವೇದಿಕೆ ಸಂಚಾಲಕ ಡಾ. ಮಂಜುನಾಥ, ರಮೇಶ ತುಪ್ಪದ, ಶಿವಕುಮಾರ ಕುಕನೂರು, ಹುಲಗಪ್ಪ ಕಟ್ಟಿಮನಿ, ನೀಲಕಂಠ ಹಿರೇಮಠ, ರಾಜು ಚೀಲವಾಡಗಿ ಪ್ರತ್ಯೇಕ ಮನವಿ ಸಲ್ಲಿಸಿ, ಕೇಂದ್ರ ಸಚಿವರನ್ನು ಆಗ್ರಹಿಸಿದರು.

ಕೊಪ್ಪಳ ಬಚಾವೋ ಆಂದೋಲನ ಸಮಿತಿ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಕೆ.ಬಿ. ಗೋನಾಳ, ಬಸವರಾಜ ಶೀಲವಂತರ, ಶಿವಪ್ಪ ಹಡಪದ ಇದ್ದರು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಗಿರೀಶನಾಂದ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.