ಬರ ನಿರ್ವಹಣೆಗೆ ಹಲವು ಮುಂಜಾಗ್ರತಾ ಕ್ರಮ: ಡಾ. ಪ್ರಕಾಶ್‌

| Published : Jan 01 2024, 01:15 AM IST

ಸಾರಾಂಶ

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬರ ನಿರ್ವಹಣೆ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಬಿ.ಸಿ.ಪ್ರಕಾಶ್ ಬರ ನಿರ್ವಹಣೆ ಸಂಬಂಧ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಬರ ನಿರ್ವಹಣೆ ಸಂಬಂಧ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಬಿ.ಸಿ.ಪ್ರಕಾಶ್ ಹೇಳಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬರ ನಿರ್ವಹಣೆ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಮರ್ಪಕವಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲ್ಲಿಯೂ ತೊಂದರೆ ಕಂಡು ಬಂದಿಲ್ಲ. ಮೇವಿಗೆ ಕೊರತೆ, ಜಾನುವಾರುಗಳಿಗೆ ತೊಂದರೆ ಇಲ್ಲ ಎಂದರು.

ಮುಂದೆ ಕುಡಿಯುವ ನೀರಿನ ಸಮಸ್ಯೆಗಳು ಎದುರಾಗಬಹುದು ಎನ್ನುವ ಹಿನ್ನೆಲೆಯಲ್ಲಿ ಬೋರ್‌ ವೆಲ್‌ಗಳನ್ನು ಗುರುತಿಸಿಟ್ಟು ಕೊಳ್ಳಲಾಗಿದೆ. ತೋಟಗಾರಿಕೆ ಬೆಳೆಗಳಿಗೆ ರೋಗಬಾಧೆ ನಿವಾರಣೆಗೆ ಅಗತ್ಯ ವಿರುವ ಔಷಧಿ, ಮತ್ತಿತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಗೃಹಲಕ್ಷ್ಮಿ ಸಂಬಂಧ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಗ್ರಾಮ ಸಭೆಗಳನ್ನು ನಡೆಸಲಾಗಿದೆ. ಶೇ.98 ರಷ್ಟು ಫಲಾನುಭವಿಗಳಿಗೆ ತಲುಪಿಸ ಲಾಗಿದೆ. ಇನ್ನೊಂದು ವಾರದಲ್ಲಿ ಶೇ. 100 ರಷ್ಟು ಸಾಧನೆ ಆಗಲಿದೆ ಎಂದರು.

ಅನ್ನಭಾಗ್ಯ ಯೋಜನೆಯಡಿ ಎಲ್ಲರಿಗೂ ಪ್ರಯೋಜನ ತಲುಪುವ ವ್ಯವಸ್ಥೆ ಮಾಡಲಾಗುತ್ತಿದೆ. ಉಳಿದಂತೆ ಬೇರೆ ಕಡೆಗೆ ಸ್ಥಳಾಂತರಗೊಂಡವರು, ಇನ್ನಿತರೆ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ ಎಂದು ತಿಳಿಸಿದರು.

ಸರ್ಕಾರಿ ಸೌಲಭ್ಯಗಳನ್ನ ಅಧಿಕಾರಿಗಳು ಸಮರ್ಪಕವಾಗಿ ತಲುಪಿಸಬೇಕು, ಮುಖ್ಯವಾಗಿ ಹಿರಿಯ ನಾಗರಿ ಕರು, ಅಂಗವಿಕಲರು, ದಿವ್ಯಾಂಗರನ್ನು ಗುರುತು ಮಾಡಿ ಅವರ ಮನೆ ಬಾಗಿಲಿಗೆ ಸೌಲಭ್ಯ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಅಧಿಕಾರಿಗಳು ಸಭೆಗೆ ಸರಿಯಾದ ಮಾಹಿತಿ ನೀಡಬೇಕು. ನಿಮ್ಮ ಸಮಸ್ಯೆಗಳು ಇದ್ದರೆ ತಕ್ಷಣ ನಮ್ಮ ಗಮನಕ್ಕೆ ತಂದರೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಸಮಸ್ಯೆಗಳನ್ನೇ ಹೇಳದಿದ್ದರೆ ನಾವು ಬಗೆಹರಿಸುವುದು ಕಷ್ಟವಾಗುತ್ತದೆ ಎಂದು ತಿಳಿಸಿದ್ದೇವೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕೇಂದ್ರಗಳಿಗೆ ಸರಿಯಾದ ಆಹಾರ ನೀಡುತ್ತಿಲ್ಲ ಎಂದು ಆರೋಪಗಳು ಬಂದಿವೆ. ಅಧಿಕಾರಿಗಳು, ಅಂಗನವಾಡಿ ಕೇಂದ್ರಗಳನ್ನು ಭೇಟಿ ಮಾಡಿ ಪರಿಶೀಲನೆ ಮಾಡಿ ಸಮಸ್ಯೆ ಬಗೆಹರಿಸಬೇಕು. ಗ್ಯಾರಂಟಿ ಯೋಜನೆ ನೂರರಷ್ಟು ಗುರಿ ಸಾಧನೆ ಮಾಡಬೇಕು ಎಂದು ಸೂಚಿಸಿದ್ದೇವೆ ಎಂದರು.

ಜಿಲ್ಲಾಧಿಕಾರಿ ಸಿ.ಎಸ್.ಮೀನಾ ನಾಗರಾಜ್ ಮಾತನಾಡಿ, ಅಧಿಕಾರಿಗಳು ಸರಿಯಾಗಿ ಕೆಲಸ ಮಾಡ ಬೇಕು ಮತ್ತು ಮಾಹಿತಿ ನೀಡಬೇಕು. ಕೆಲಸದಲ್ಲಿ ಹೆಚ್ಚು ತೊಡಗಿಸಿಕೊಂಡು ಸರ್ಕಾರದ ಸೌಲಭ್ಯವನ್ನು ಅರ್ಹ ಫಲಾನುಭವಿಗಳನ್ನು ಗುರುತಿಸಿ ಯಾವುದೇ ದೂರುಗಳು ಬರದಂತೆ ಕೆಲಸ ಮಾಡಬೇಕೆಂದು ತಿಳಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗೋಪಾಲಕೃಷ್ಣ ಇದ್ದರು. 31ಕೆಸಿಕೆಎಂ 6

ಚಿಕ್ಕಮಗಳೂರಿನ ಜಿಪಂ ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಬಿ.ಸಿ.ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಬರ ನಿರ್ವಹಣೆ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಡಿಸಿ ಮೀನಾ ನಾಗರಾಜ್‌, ಎಡಿಸಿ ನಾರಾಯಣರಡ್ಡಿ ಕನಕರಡ್ಡಿ, ಸಿಇಒ ಡಾ. ಗೋಪಾಲಕೃಷ್ಣ ಇದ್ದರು.