ಶಿಕ್ಷಕರ ಬಡಾವಣೆಯಲ್ಲಿ ನಿರ್ಮಾಣಗೊಳ್ಳಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿ ಮುಂದಿನ ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ. ನಿಲಯದಲ್ಲಿ ಸುಮಾರು 100 ಮಂದಿ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ದೊರಕಲಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ಕೆ.ಎಂ.ಉದಯ್ ಭಾನುವಾರ ಹೇಳಿದರು.

ಪಟ್ಟಣದ ಶಿಕ್ಷಕರ ಬಡಾವಣೆಯಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ 4 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಹಿಂದುಳಿದ ವರ್ಗ ಬಡತನ, ತಾರತಮ್ಯ ಮತ್ತು ಕಳಪೆ ಸಾಮಾಜಿಕ ಸ್ಥಾನಮಾನಗಳನ್ನು ಎದುರಿಸುತ್ತಿವೆ. ಈ ಜನರಿಗೆ ಶಿಕ್ಷಣ ಮತ್ತು ಉದ್ಯೋಗ ಮೀಸಲಾತಿ ಒದಗಿಸುವ ನಿಟ್ಟಿನಲ್ಲಿ ಮಾಜಿ ಸಿಎಂ ದಿ.ದೇವರಾಜ ಅರಸು ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಶಿಕ್ಷಣ ಮತ್ತು ಉದ್ಯೋಗದ ಮೀಸಲಾತಿ ಒದಗಿಸುವ ಅವಕಾಶ ಕಲ್ಪಿಸಿದ್ದರು ಎಂದರು.ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಬೇಕು ಎಂಬ ಉದ್ದೇಶದಿಂದ ಉಚಿತವಾಗಿ ವಸತಿ, ಸಮವಸ್ತ್ರ ಮತ್ತು ಪಠ್ಯೇತರ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಶಿಕ್ಷಕರ ಬಡಾವಣೆಯಲ್ಲಿ ನಿರ್ಮಾಣಗೊಳ್ಳಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿ ಮುಂದಿನ ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ. ನಿಲಯದಲ್ಲಿ ಸುಮಾರು 100 ಮಂದಿ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ದೊರಕಲಿದೆ ಎಂದು ತಿಳಿಸಿದರು.

ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಇಲಾಖಾ ಕಚೇರಿಯನ್ನು ವಿದ್ಯಾರ್ಥಿ ನಿಲಯದಲ್ಲೇ ಸ್ಥಳಾವಕಾಶ ಕಲ್ಪಿಸಲು ಕ್ರಮ ವಹಿಸಲಾಗುವುದು. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ತಗ್ಗಲಿದೆ ಎಂದು ಹೇಳಿದರು.

ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಪುರಸಭಾ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಸದಸ್ಯರಾದ ಸಚಿನ್, ಬಸವರಾಜು, ಸರ್ವಮಂಗಳ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಸುನೀತಾ ಗುಳಪ್ಪನವರ, ನಿಲಯಗಳ ಮೇಲ್ವಿಚಾರಕರಾದ ಅರ್ಚನಾ, ಅಶೋಕ್, ಶಿವರಾಜ್, ಸುನೀಲ್ ಕುಮಾರ್, ಧರಿಯಪ್ಪ, ಟಿ.ರವಿ, ನಾಗೇಶ್, ಗೋಪಿ ಮತ್ತಿತರರು ಇದ್ದರು.