ಮಾ.3 ನಗರದಲ್ಲಿ ‘ಗ್ಯಾರಂಟಿ’ಯೋಜನೆಗಳ ಸಮಾವೇಶ, ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

| Published : Feb 28 2024, 02:31 AM IST

ಮಾ.3 ನಗರದಲ್ಲಿ ‘ಗ್ಯಾರಂಟಿ’ಯೋಜನೆಗಳ ಸಮಾವೇಶ, ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರಿನಲ್ಲಿ ಮಾರ್ಚ್‌ 3ರಂದು ನಡೆಯಲಿರುವ ಗ್ಯಾರಂಟಿ ಯೋಜನೆಗಳ ಸಮಾವೇಶದ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾ ಆಟದ ಮೈದಾನದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಅವರು ಸ್ಥಳ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಮಾ.3 ರಂದು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ. ಇದರ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಾವೇಶವನ್ನು ನೇತಾಜಿ ಸುಭಾಷ್‌ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು. ಜಿಲ್ಲಾ ಆಟದ ಮೈದಾನದಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಸ್ಥಳ ಪರಿಶೀಲನೆ ನಡೆಸಿ, ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಸುದ್ದಿಗಾರರಿಗೆ ಅವರು ಮಾಹಿತಿ ನೀಡಿದರು.ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಿ ಅನುಷ್ಠಾನಕ್ಕೆ ತರಲಾಗಿದ್ದು, ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ ನಡೆಸುವ ಮೂಲಕ ಅಂದು ಫಲಾನುಭವಿಗಳು ಸಂಭ್ರಮಾಚರಣೆ ನಡೆಸಲಿದ್ದಾರೆಂದು ಹೇಳಿದರು. ಈ ಜಿಲ್ಲಾ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ವಿವಿಧ ಇಲಾಖೆಗಳ ಸಚಿವರುಗಳು ಆಗಮಿಸಲಿದ್ದಾರೆ ಎಂದರು. ಶೋಷಿತ ವರ್ಗದ ಬಡ ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕೆಂಬ ದೃಷ್ಠಿಯಿಂದ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮಹಿಳೆಗೆ 2 ಸಾವಿರ ರು., ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ, ಉಚಿತ ವಿದ್ಯುತ್, ಅನ್ನಭಾಗ್ಯ, ಯುವನಿಧಿ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡಲಾಗಿದ್ದು, ಅರ್ಜಿ ಹಾಕದೆ ಇರುವವರು ಈ ಸಮಾವೇಶದಲ್ಲಿ ಭಾಗವಹಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಇದೇ ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜಿಲ್ಲೆಯ ಹಾಗೂ ಕ್ಷೇತ್ರದ ಜನರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಮಾ.3ರಂದು ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಲಿದ್ದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರೆವೇರಿಸಲಿದ್ದು, ಅದಕ್ಕಾಗಿ ಪೂರ್ಣ ಸಿದ್ದತೆಗಳು ನಡೆಯುತ್ತಿದ್ದು ಈಗಾಗಲೇ ಜಿಲ್ಲೆಯ ಐವರು ಶಾಸಕರುಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಿವಿಧ ಇಲಾಖೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿಗಳೊಂದಿಗೆ ವಿವಿಧ ಇಲಾಖೆಗಳ ಸಚಿವರುಗಳು ಭಾಗವಹಿಸಲಿದ್ದಾರೆ. ಸುಮಾರು 15 ರಿಂದ 20 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು. ಮಾ.3 ರಂದು ಮಧ್ಯಾಹ್ನ 1 ಗಂಟೆಯಿಂದ 3.30 ರವರೆಗೆ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಐದೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಈ ಜಿಲ್ಲಾ ಸಮಾವೇಶದಲ್ಲಿ ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ. ಸಮಾವೇಶದಲ್ಲಿ ಭಾಗವಹಿಸುವ ಎಲ್ಲಾ ಕಾರ್ಯಕರ್ತರಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್‌ ಅಮಟೆ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಶ್ರೀಧರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಗವಿರಂಗಪ್ಪ ಉಪಸ್ಥಿತರಿದ್ದರು.