ಕೆಎಸ್‌ಆರ್‌ಟಿಸಿ ಕಂಡಕ್ಟರ್‌ ಮೇಲೆ ಮರಾಠಿಗರ ಹಲ್ಲೆ: ಕರವೇ ಖಂಡನೆ

| Published : Feb 25 2025, 12:46 AM IST

ಕೆಎಸ್‌ಆರ್‌ಟಿಸಿ ಕಂಡಕ್ಟರ್‌ ಮೇಲೆ ಮರಾಠಿಗರ ಹಲ್ಲೆ: ಕರವೇ ಖಂಡನೆ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಅಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದರು. ನಂತರ ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಿರ್ವಾಹಕನ ಮೇಲೆ ಹಲ್ಲೆ ಮಾಡಿದ ಮರಾಠಿಗರ ಅಲ್ಲಿನ ಜಿಲ್ಲಾಧಿಕಾರಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಆರ್.ಮೋಹನ್ ಮಾತನಾಡಿ, ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಗಡಿಪಾರು ಮಾಡಬೇಕು. ಸುಳ್ಳು ಮೊಕದ್ದಮೆ ದಾಖಲು ಮಾಡಿರುವ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಬೇಕು. ಕನ್ನಡಿಗರ ವಿರುದ್ಧ ಅವಹೇಳನಕಾರಿ-ಹೇಳಿಕೆ ನೀಡಿರುವ ಎಂಇಎಸ್. ಪುಂಡರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಕನ್ನಡಿಗರಿಗೆ ಅವಮಾನವಾದರೂ ಮರಾಠಿಗರ ಪರವಾಗಿ ನಿಂತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ನವೀನ್, ಪ್ರಧಾನ ಕಾರ್ಯದರ್ಶಿ ಅರ್ಜುನ್, ಪದಾಧಿಕಾರಿಗಳಾದ ನಾಗರಾಜು ವೈ.ಕೆ.ಮೋಳೆ, ಹರೀಶ್, ಅವಿನಾಶ್, ರಾಘು.. ಪುರುಷೋತ್ತಮ್, ಮಹೇಂದ್ರ, ಬಾಬು, ಮಂಗಳಮ್ಮ, ರೇಖಾ ಇತರರು ಭಾಗವಹಿಸಿದ್ದರು.