ಸಾರಾಂಶ
ಪಟ್ಟಣದಲ್ಲಿ ಮಂಗಳವಾರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ನಾಟಕ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಸಹಯೋಗದಲ್ಲಿ ಸೀಮಂತ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಪಟ್ಟಣದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ತುಂಬು ಗರ್ಭಿಣಿಯರಿಗೆ ತವರು ಮನೆಯಲ್ಲೂ ನೀಡದಂತಹ ಪ್ರೀತಿ ಆದರ ನೀಡಿ ಸೀಮಂತ ಕಾರ್ಯಕ್ರಮ ಅಪೂರ್ವ ಕ್ಷಣವೊಂದಕ್ಕೆ ಸಾಕ್ಷಿಯಾಯಿತು.ಪಟ್ಟಣದಲ್ಲಿ ಮಂಗಳವಾರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ನಾಟಕ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಬಿ.ಎಸ್.ಅರಳಿಚಂಡಿ ಮಾತನಾಡಿ, ಗರ್ಭಾವಸ್ಥೆಯ ಅವಧಿಯಲ್ಲಿ ಗರ್ಭಿಣಿಯರು ತೆಗೆದುಕೊಳ್ಳಬೇಕಾದ ಎಚ್ಚರಿಕೆ, ಸ್ತನಪಾನದ ಮಹತ್ವ ಹಾಗೂ ಮಕ್ಕಳ ಪೋಷಣೆ ಅಲ್ಲದೇ ಪೌಷ್ಟಿಕಾಂಶದ ಕೊರತೆ ಮಕ್ಕಳಲ್ಲಿ ಕಾಣಿಸಿಕೊಳ್ಳದಂತೆ ಯಾವ ಆಹಾರ ನೀಡಬೇಕೆಂಬುದರ ಬಗ್ಗೆ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಆಯುಷ್ ವೈದ್ಯಾಧಿಕಾರಿಗಳಾದ ಡಾ.ಸಂತೋಷ್ ಯಡಹಳ್ಳಿ, ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಯ ಆಪ್ತ ಸಮಾಲೋಚಕ ಡಾ. ಅರ್ಚನಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರಾಮನಗೌಡ ನೀರಲಗಿ, ಸುಕನ್ಯಾ ಚಳಗೇರಿ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಹಾಜರಿದ್ದರು. ಸ್ಥಳೀಯ ಆಪ್ತ ಸಮಾಲೋಚಕರಾದ ಎಸ್.ಬಿ.ಕಲ್ಲೂರ ಅವರು ಕಾರ್ಯಕ್ರಮ ನಿರೂಪಿಸಿದರು.