30ರಂದು ಹುತಾತ್ಮರ ದಿನಾಚರಣೆ: ಪೂರ್ವಭಾವಿ ಸಭೆ

| Published : Jan 24 2025, 12:47 AM IST

ಸಾರಾಂಶ

ಹುತಾತ್ಮರ ದಿನವನ್ನು 30ರಂದು ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧಿಕಾರಿಗಳಿಗೆ ವಿವಿಧ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಹುತಾತ್ಮರ ದಿನವನ್ನು 30ರಂದು ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕಳೆದ ಬಾರಿಯಂತೆ ಹುತಾತ್ಮರ ದಿನ ಪ್ರಯುಕ್ತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಿಂದ ತೆಗೆದುಕೊಂಡು ಹೋಗಿ ಮೆರವಣಿಗೆ ಮೂಲಕ ಗಾಂಧಿ ಮಂಟಪದಲ್ಲಿರಿಸಿ ಸರ್ವಧರ್ಮ ಪ್ರಾರ್ಥನೆ ಮೂಲಕ ಹುತಾತ್ಮರ ದಿನ ಆಚರಿಸಬೇಕಿದೆ ಎಂದರು.

ಜಿಲ್ಲಾ ಖಜಾನೆಯಿಂದ ಮಹಾತ್ಮ ಗಾಂಧೀಜಿ ಚಿತಾ ಭಸ್ಮ ಹೊರತೆಗೆದು ಪುಷ್ಪಾಲಂಕಾರ ಮೂಲಕ ವಿಶೇಷ ಗೌರವ ಸಲ್ಲಿಸಿ, ನಂತರ ಪೊಲೀಸ್ ಗೌರವದೊಂದಿಗೆ ಮೆರವಣಿಗೆ ಮೂಲಕ ಹೊರಟು ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತ ಮೂಲಕ ಗಾಂಧಿ ಮಂಟಪಕ್ಕೆ ತೆರಳಿ ಅಲ್ಲಿ ಸರ್ವಧರ್ಮ ಪ್ರಾರ್ಥನೆ ನಡೆಯಲಿದೆ. ಬಳಿಕ ಪೊಲೀಸ್ ಗೌರವ ಸಲ್ಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಗಾಂಧಿ ಮಂಟಪ ಆವರಣದಲ್ಲಿ ಸ್ವಚ್ಛಗೊಳಿಸಬೇಕು. ಪೊಲೀಸ್ ಬ್ಯಾಂಡ್ ನಿಯೋಜಿಸುವಂತಾಗಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಮಹಾತ್ಮ ಗಾಂಧೀಜಿ ಕುರಿತು ಪ್ರಿಯವಾದ ಹಾಡುಗಳನ್ನು ಹಾಡಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಸೈರನ್ ಮೊಳಗುವಂತಾಗಬೇಕು ಎಂದರು.

ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಮಾತನಾಡಿ, ಹುತಾತ್ಮರ ದಿನಾಚರಣೆಯಂದು ಸಂಜೆ ನಗರದ ಗಾಂಧಿಭವನದಲ್ಲಿ ಕೊಡಗು ಜಿಲ್ಲಾ ಜಾನಪದ ಪರಿಷತ್ತು ವತಿಯಿಂದ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮ ನಡೆಯಲಿದೆ ಎಂದರು.

ಸಮಿತಿ ಸದಸ್ಯ ಅಂಬೆಕಲ್ಲು ನವೀನ್ ಮಾತನಾಡಿ, ಗಾಂಧಿ ಮಂಟಪದ ಆವರಣದಲ್ಲಿ ಹುತಾತ್ಮರ ದಿನದಂದು ವಿದ್ಯಾರ್ಥಿಗಳಿಗೆ ಲಘು ಉಪಾಹಾರ ಹಾಗೂ ಕುಡಿಯುವ ನೀರು ವ್ಯವಸ್ಥೆ ಮಾಡಬೇಕು ಎಂದು ಕೋರಿದರು.

ಸರ್ವೋದಯ ಸಮಿತಿ ಸದಸ್ಯ ತೆನ್ನಿರಾ ಮೈನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಸದಸ್ಯ ಚಂದ್ರಶೇಖರ್, ತಹಸೀಲ್ದಾರ್ ಪ್ರವೀಣ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುಳ, ಜಿ.ಪಂ.ಇಇ ನಾಯಕ್, ಪೌರಾಯುಕ್ತ ಎಚ್.ಆರ್.ರಮೇಶ್, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಪ್ರಸನ್ನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕವಿತಾ. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಸ್ಕೌಟ್ಸ್ ಮತ್ತು ಗೈಡ್ಸ್ನ ಸಮನ್ವಯಾಧಿಕಾರಿ ದಮಯಂತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ, ದೇವರಾಜು, ಮಣಜೂರು ಮಂಜುನಾಥ್ ಇತರರು ಇದ್ದರು.