ಸಾರಾಂಶ
ಅರ್ಹರಿಗೆ ತಪ್ಪದೆ ಔಷಧಿ ನುಂಗಿಸಿ । 10ರಿಂದ 28ರ ವರೆಗೆ ಆಯೋಜನೆ
ಕನ್ನಡಪ್ರಭ ವಾರ್ತೆ ಯಾದಗಿರಿ
ಆನೆಕಾಲು ರೋಗ ನಿವಾರಣೆಗಾಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಫೆ.10 ರಿಂದ 28 ರವರೆಗೆ ಜಿಲ್ಲೆಯ ವಡಗೇರಾ ಬ್ಲಾಕ್‌ನಲ್ಲಿ ಸಾಮೂಹಿಕ ಔಷಧಿ ನುಂಗಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆನೆಕಾಲು ರೋಗ ನಿವಾರಣೆಗೆ ವಡಗೇರಾ ಬ್ಲಾಕಿನಲ್ಲಿ ಸಾಮೂಹಿಕ ಔಷಧಿ ನುಂಗಿಸುವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಆನೆಕಾಲು ರೋಗ ಸೋಂಕಿತ ಕ್ಯೂಲೆಕ್ಸ್ ಸೊಳ್ಳೆಗಳು ಕಚ್ಚುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಒಮ್ಮೆ ಈ ರೋಗ ಬಂದಲ್ಲಿ ಗುಣಮುಖ ಕಷ್ಟ ಸಾಧ್ಯ. ಕಾರಣ, ವರ್ಷಕ್ಕೊಮ್ಮೆ ಉಚಿತವಾಗಿ ಐವರ್ ಮೆಕ್ಟಿನ್, ಡಿ.ಇ.ಸಿ, ಅಲ್ಬೆಂಡಜೋಲ್, ತ್ರಿವಳಿ ಗುಳಿಗೆಗಳನ್ನು ಅರ್ಹರಿಗೆ ತಪ್ಪದೇ ನುಂಗಿಸಬೇಕು. ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಇಲ್ಲದೇ ಇರುವುದರಿಂದ ಈ ಕುರಿತು ಅರಿವು ಮೂಡಿಸುವ ಜೊತೆಗೆ ಅರ್ಹರು ನುಂಗಿದ ಬಗ್ಗೆ ಖಾತ್ರಿ ಪಡಿಸಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಅತೀ ಅಪಾಯವುಳ್ಳ ಗ್ರಾಮಗಳಲ್ಲಿ ಯೋಜನಾಬದ್ಧವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಅಂಕಿ-ಅಂಶಗಳ ಮೇಲೆ ಅಷ್ಟೇ ಅಲ್ಲದೇ ಕ್ಷೇತ್ರ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ಹಿಸಬೇಕು. ಅರ್ಹರು ಗುಳಿಗೆ ನುಂಗಲು ನಿರಾಕರಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ತಾಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿಗಳ ಅಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು, ಆಯಾ ಶಾಲೆಗಳ ಮುಖ್ಯೋಪಾಧ್ಯಾಯರು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಗುರಿಗೆ ತಕ್ಕಂತೆ ಗುಳಿಗೆ ನುಂಗಿಸುವ ಕಾರ್ಯದಲ್ಲಿ ಪ್ರಗತಿ ಸಾಧಿಸಬೇಕು. ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ, ಶೌಚಾಲಯ ಶುಚಿತ್ವ, ಸೊಳ್ಳೆಗಳ ನಿಯಂತ್ರಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ. ಎಂ.ಎ. ಸಾಜೀದ್ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಡಿವೈಎಸ್ಪಿ ಅರುಣಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಹೇಶ್ ಬಿರಾದಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.