ಶಿಗ್ಗಾಂವಿ: ಸಾಮೂಹಿಕ ವಿವಾಹದಂತಹ ಕಾರ್ಯಕ್ರಮಗಳಿಂದಾಗಿ ಬಡವರಿಗೆ ಹೆಚ್ಚಿನ ಅನುಕೂಲವಾಗಲಿದೆ. ಇಂತಹ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು ಎಂದು ರಟ್ಟಿಹಳ್ಳಿ ಕಬ್ಬಿಣಕಂತಿ ಮಠದ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ ವಿರಕ್ತಮಠದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಉಚಿತ ಸರ್ವ ಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಸಾಮೂಹಿಕ ವಿವಾಹಗಳಿಂದ ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯವಾಗುವ ಜತೆಗೆ ಬಡವರಿಗೆ ಹೆಚ್ಚಿನ ಸಹಕಾರಿಯಾಗಲಿದೆ ಎಂದರು.ಹೆಬ್ಬಾಳದ ಮಹಾಂತರುದ್ರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಮದುವೆ ಪ್ರತಿಯೊಬ್ಬರ ಜೀವನದ ಮಹತ್ತರ ಘಟ್ಟ. ಇದಕ್ಕಾಗಿ ಅನಗತ್ಯ ಹಣ ವ್ಯರ್ಥ ಮಾಡುವ ಅಗತ್ಯವಿಲ್ಲ. ಸಾಮೂಹಿಕ ವಿವಾಹದಲ್ಲಿ ಸಂಸಾರ ಜೀವನಕ್ಕೆ ಪದಾರ್ಪಣೆ ಆದರ್ಶ. ಇದು, ಕುಟುಂಬಕ್ಕೆ ಮಾತ್ರವಲ್ಲದೇ ದೇಶದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂದರು.
ಗುತ್ತಲ ಪ್ರಭುಸ್ವಾಮಿಮಠದ ಗುರುಸಿದ್ದೇಶ್ವರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಸಾಮೂಹಿಕ ವಿವಾಹ ಎಂದರೆ ಅದು ಕೇವಲ ಬಡ ಜನರ ಮದುವೆ ಕಾರ್ಯಕ್ರಮ ಎಂದು ಭಾವಿಸುವುದು ತಪ್ಪು. ಪವಿತ್ರವಾದ ಧಾರ್ಮಿಕ ಕ್ಷೇತ್ರ, ಸಹಸ್ರಾರು ಭಕ್ತರ ಮತ್ತು ಮಠಾಧೀಶರ ಆಶೀರ್ವಾದದೊಂದಿಗೆ ವಿವಾಹ ಬಂಧನಕ್ಕೊಳಗಾಗುವ ಭಾಗ್ಯ, ಜೀವನದ ಸಾರ್ಥಕತೆಯ ಕ್ಷಣವಾಗಿದೆ ಎಂದರು.ನಂತರ ಲಿಂ. ಸಂಗನಬಸವ ಮಹಾಸ್ವಾಮಿಗಳವರ ಹಾಗೂ ಲಿಂ. ಶ್ರೀ ಬಸವಲಿಂಗ ಮಹಾಸ್ವಾಮಿಗಳ ಭಾವಚಿತ್ರದ ಭವ್ಯ ಮೆರವಣಿಗೆ ಶಿಗ್ಗಾಂವಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಸಾಮೂಹಿಕ ವಿವಾಹದಲ್ಲಿ ೭ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟವು.
ಹತ್ತಿಮತ್ತೂರು ವಿರಕ್ತಮಠದ ನಿಜಗುಣ ಮಹಾಸ್ವಾಮಿಗಳು, ಹೊಳೆಇಟಗಿ ವಿರಕ್ತಮಠದ ಮಡಿವಾಳ ಮಹಾಸ್ವಾಮಿಗಳು, ಲಿಂಗನಾಯಕನಹಳ್ಳಿಯ ಚೆನ್ನವೀರ ಮಹಾಸ್ವಾಮಿಗಳು, ಅಗಡಿ ಅಕ್ಕಿ ಮಠದ ಡಾ. ಗುರುಲಿಂಗ ಮಹಾಸ್ವಾಮಿಗಳು, ಬಂಕಾಪುರ ಅರಳೆಲೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶಿಗ್ಗಾಂವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು, ವಿರಕ್ತಮಠದ ಬಸವಲಿಂಗ ದೇವರು, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಡಿ. ಯತ್ನಳ್ಳಿ, ಮುಖಂಡರಾದ ಶಿವಾನಂದ ಮ್ಯಾಗೇರಿ, ಡಾ. ಮಲ್ಲೇಶಪ್ಪ ಹರಿಜನ, ಫಕ್ಕೀರೇಶ ಮಾಸ್ತರ್ ಕೊಂಡಾಯಿ ಹಾಗೂ ಮಠದ ಭಕ್ತರು ಇದ್ದರು.