ಸಾರಾಂಶ
ರೈತರ ಸಾಲ ಮನ್ನಾ ಮಾಡಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ರೈತರ ಸಾಲ ಮನ್ನಾ ಮಾಡಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.ತೆಲಂಗಾಣ ಮಾದರಿಯಂತೆ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು. ಪ್ರತಿ ಎಕರೆ ಬೆಳೆ ಹಾನಿಗೆ ₹25 ಸಾವಿರ ಪರಿಹಾರ ನೀಡಬೇಕು. ಎಲ್ಲ ಬೆಳೆಗಳಿಗೆ ಬೆಳೆ ವಿಮೆ ಜಾರಿಗೊಳಿಸಬೇಕು. ಕಾರ್ಖಾನೆಗಳು ಸಕ್ಕರೆ ಇಳುವರಿ ತೋರಿಸಲು ವೈಜ್ಞಾನಿಕ ಮಾನದಂಡ ಬಳಸಬೇಕು. ಕಬ್ಬಿನ ಎಥನಾಲ್ ಉತ್ಪಾದನಾ ಲಾಭದ ಆದಾಯವನ್ನು ಕಬ್ಬು ದರ ನಿಗದಿಯಲ್ಲಿ ಪರಿಗಣಿಸಬೇಕು ಎಂದು ರೈತರು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್, ಅತಿವೃಷ್ಟಿ-ಅನಾವೃಷ್ಟಿಯಿಂದಾಗಿ ರೈತರು ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ರೈತರ ಆತ್ಮಹತ್ಯೆ ಹೆಚ್ಚಾಗುತ್ತಿವೆ. ಆದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿವೆ. ಆದ್ದರಿಂದ ಕಳೆದ ಹತ್ತು ವರ್ಷದಲ್ಲಿ ಕೃಷಿ ಕ್ಷೇತ್ರಕ್ಕೆ ಬಿಡುಗಡೆಯಾಗಿರುವ ಅನುದಾನ, ವೆಚ್ಚದ ಬಗ್ಗೆ ಈ ಎರಡೂ ಸರ್ಕಾರಗಳು ಶ್ವೇತಪತ್ರ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.ಪ್ರತಿಭಟನೆ ವಾಪಾಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ಡಿ.ಸುಧಾಕರ್ ಅವರು ಬೇಡಿಕೆಗಳ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲು ಮುಖಂಡರಿಗೆ ಶೀಘ್ರದಲ್ಲೇ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಇದರಿಂದ ತೃಪ್ತರಾದ ರೈತರು ಪ್ರತಿಭಟನೆ ವಾಪಸ್ ಪಡೆದರು.