ವಿಶೇಷ ಶಿಕ್ಷಕರ ಸಾಮೂಹಿಕ ವರ್ಗಾವಣೆ ಕ್ರಮ ಖಂಡನೀಯ: ಶಂಕರ ಹಲಗತ್ತಿ

| Published : Jul 13 2025, 01:18 AM IST

ಸಾರಾಂಶ

ಕನ್ನಡ ಶಾಲೆಗಳು ಮುಚ್ಚುವ ನಿಟ್ಟಿನಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಹೊರಟಿರುವ ರಾಜ್ಯ ಸರ್ಕಾರ ಗ್ರಾಮೀಣ ಭಾಗದ ಶಾಲೆಯ ವಿಶೇಷ ಶಿಕ್ಷಕರನ್ನು ಹೆಚ್ಚುವರಿ ಎಂದು ವರ್ಗಾವಣೆ ಮಾಡಲಾಗುತ್ತಿದೆ.

ಧಾರವಾಡ: ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರನ್ನು ಅವೈಜ್ಞಾನಿಕವಾಗಿ ಸಾಮೂಹಿಕ ವರ್ಗಾವಣೆ ಕ್ರಮ ಖಂಡನೀಯ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಶಾಲೆಗಳು ಮುಚ್ಚುವ ನಿಟ್ಟಿನಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಹೊರಟಿರುವ ರಾಜ್ಯ ಸರ್ಕಾರ ಗ್ರಾಮೀಣ ಭಾಗದ ಶಾಲೆಯ ವಿಶೇಷ ಶಿಕ್ಷಕರನ್ನು ಹೆಚ್ಚುವರಿ ಎಂದು ವರ್ಗಾವಣೆ ಮಾಡಲಾಗುತ್ತಿದೆ. ಪ್ರತಿ ಶಾಲೆಯಲ್ಲೂ ಚಿತ್ರಕಲೆ, ನಾಟಕ, ಸಂಗೀತ ಶಿಕ್ಷಕರು ಇರಬೇಕು. ಮಕ್ಕಳ ಮಾನಸಿಕ ಮನೋಬಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಎಲ್ಲ ಶಿಕ್ಷಕರೂ ಅವಶ್ಯಕತೆ ಇದೆ. ಸರ್ಕಾರ ವಿನಾಕಾರಣ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದರು.

ಹಿರಿಯ ಚಿತ್ರಕಲಾವಿದ ಆರ್.ಬಿ. ಗರಗ ಮಾತನಾಡಿ, ವಿಶೇಷ ಶಿಕ್ಷಕರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡಬೇಕಾದ ಸರ್ಕಾರ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ಮೂಗಿಗೆ ತುಪ್ಪ ಸವರುವ ಕೆಲಸ ಬಿಟ್ಟು ವಿಶೇಷ ಶಿಕ್ಷಕರಿಗೆ ಅನ್ಯಾಯ ಆಗದಂತೆ ಕ್ರಮ ವಹಿಸಬೇಕು. ಈ ಕುರಿತು ಗಂಭೀರವಾಗಿ ಪರಿಗಣಿಸಿ ಜನಪ್ರತಿನಿಧಿಗಳು ವಿಶೇಷ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ತೊಡಗಿ, ಕೆ.ವಿ. ಶಂಕರ, ಜಿ.ಆರ್. ಹರ್ಲಾಪುರ, ಬಾಬಾಜಾನ ಮುಲ್ಲಾ, ಕಲ್ಲಪ ಪೂಜಾರಿ ಇದ್ದರು.