ಆಗಸ್ಟ್‌ 21ರಂದು ಮಾದಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ

| Published : Jun 25 2024, 12:32 AM IST

ಸಾರಾಂಶ

ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ಇಂದು ನಡೆಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ಇಂದು ನಡೆಯಿತು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದಲ್ಲಿ ಪ್ರತೀ ವರ್ಷ ನಡೆಸುವ ಉಚಿತ ಸಾಮೂಹಿಕ ವಿವಾಹವನ್ನು ಈ ಬಾರಿ ಆಗಸ್ಟ್ ೨೧ರಂದು ನಡೆಸುವ ಸಂಬಂಧ ವಿವರವಾಗಿ ಚರ್ಚಿಸಲಾಯಿತು. ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಮಾಸ್ಟರ್ ಪ್ಲಾನ್ ಆವರಣದ ವಿವಿಧ ಕಡೆಗಳಲ್ಲಿ ಹೊಸದಾಗಿ ಕಾಮಗಾರಿ ನಿರ್ವಹಣೆ ಸಂಬಂಧ ಪ್ರಸ್ತಾಪಿಸಿ ವಿಸೃತವಾಗಿ ಚರ್ಚೆ ನಡೆಸಲಾಯಿತು. ಸಂಪರ್ಕ ರಸ್ತೆ, ಮಲೆ ಮಹದೇಶ್ವರ ಬೆಟ್ಟದ ಗ್ರಾಪಂ ವ್ಯಾಪ್ತಿಗೆ ಒಳಪಡುವ ಶಾಲೆಗಳಿಗೆ ಪ್ರಾಧಿಕಾರದಿಂದ ಮೂಲ ಸೌಕರ್ಯ, ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ವಿವಿಧ ಹಕ್ಕು ಬಾದ್ಯತೆಗಳು ಮುಡಿ ಕಾಣಿಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.ದಾಸೋಹ, ಲಾಡು, ಪೂಜಾ ವಿಭಾಗಕ್ಕೆ ಬೇಕಾದ ಪಡಿತರ ಸಾಮಾಗ್ರಿಗಳ ಸರಬರಾಜು, ವಾಹನ ಪ್ರವೇಶ ಶುಲ್ಕ, ಮಲೈಮಹದೇಶ್ವರಸ್ವಾಮಿ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಘೋಷಿಸುವ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ತಪಾಸಣಾ ಕೇಂದ್ರ ತೆರೆಯುವ ಕುರಿತು ಪ್ರಸ್ತಾಪಿಸಲಾಯಿತು. ಪ್ರಾಧಿಕಾರಕ್ಕೆ ಸೇರಿದ ಮಾಸ್ಟರ್ ಪ್ಲಾನ್ ಆವರಣದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ೫೧೨ ಕೊಠಡಿಗಳುಳ್ಳ ಕಟ್ಟಡ ನಿರ್ಮಾಣ ಕಾಮಗಾರಿ ಸಂಬಂಧ ಪ್ರಗತಿ ವಿವರ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು ಆಗಸ್ಟ್ ೨೧ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೂ ಮೊದಲೇ ಕಟ್ಟಡ ಪೂರ್ಣಗೊಳಿಸಲು ಸೂಚಿಸಿದರು. ಕ್ಷೇತ್ರದ ಕಾಮಗಾರಿ ಹಾಗೂ ಅಭಿವೃದ್ಧಿ ಕುರಿತು ಸೇರಿ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಾಲೂರು ಮಠದ ಶ್ರೀಗಳಾದ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿ, ಎಂಎಸ್‌ಐಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ಹೆಚ್.ಎಂ. ಗಣೇಶ್ ಪ್ರಸಾದ್, ಸಿ.ಎನ್. ಮಂಜೇಗೌಡ, ಡಾ. ಡಿ ತಿಮ್ಮಯ್ಯ, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಚ್.ವಿ. ಚಂದ್ರು, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಎಸ್ಪಿ ಪದ್ಮಿನಿ ಸಾಹು, ಎಡಿಸಿ ಗೀತಾ ಹುಡೇದ, ಶ್ರೀ ಮಲೈಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಎ.ಇ. ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಉಪವಿಭಾಗಾಧಿಕಾರಿ ಮಹೇಶ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೋಷ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಮಹೇಶ್, ಸೇರಿ ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.