ಸಂವಿಧಾನದ ಕಗ್ಗೊಲೆ: ರಾಘವೇಂದ್ರ ಹಿಟ್ನಾಳ

| Published : Aug 18 2024, 01:45 AM IST

ಸಾರಾಂಶ

ಖಾಸಗಿ ದೂರು ಆಧರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ಸಂವಿಧಾನವನ್ನು ಹತ್ಯೆ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಕೊಪ್ಪಳ

ರಾಜ್ಯದ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಸಂವಿಧಾನದ ಕಗ್ಗೊಲೆ ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜಭವನ ರಾಜಕೀಯ ಭವನವಾಗಿ ಪರಿವರ್ತನೆಗೊಂಡಿರುವುದಕ್ಕೆ ರಾಜ್ಯಪಾಲರ ಈ ನಡೆ ಸಾಕ್ಷಿಯಾಗಿದೆ. ಹಿಂದುಳಿದ ವರ್ಗದ ನಾಯಕ, ಜನಪರ ಆಡಳಿತ ನಡೆಸುತ್ತಿರುವುದನ್ನು ಅರಗಿಸಿಕೊಳ್ಳಲಾಗದೆ ಕೇಂದ್ರ ಬಿಜೆಪಿ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜಭವನವನ್ನು ಉಪಯೋಗಿಸಿಕೊಂಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ.

ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಹೈಕಮಾಂಡ್ ನಾಯಕರು, ಸಚಿವರು ಹಾಗೂ ಶಾಸಕರು ಸಿಎಂ ಪರ ಇದ್ದೇವೆ ಎಂದಿದ್ದಾರೆ.

ರಾಜ್ಯಪಾಲರಿಂದ ಸಂವಿಧಾನದ ಹತ್ಯೆ-ಶಿವರಾಜ ತಂಗಡಗಿ:

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಯ್ಕೆಯಾದ ಸರ್ಕಾರವನ್ನು ಅಸ್ಥಿರಗೊಳಿಸುವುದಕ್ಕಾಗಿ ಮುಖ್ಯಮಂತ್ರಿಗಳ ವಿರುದ್ಧ ಖಾಸಗಿ ದೂರು ಆಧರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ಸಂವಿಧಾನವನ್ನು ಹತ್ಯೆ ಮಾಡಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕಿಡಿಕಾರಿದ್ದಾರೆ.

ತುಂಗಭದ್ರಾ ಜಲಾಶಯದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಮತ್ತು ಕೇಂದ್ರದ ವಿರುದ್ಧ ವಾಗ್ದಾಳಿ ಮಾಡಿದರು.ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಅವರ ಕೈಗೊಂಬೆಯಂತೆ ರಾಜ್ಯಪಾಲರು ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ, ನಾವು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿಯೇ ನೀಡುತ್ತಾರೆ ಎಂದು ಮೊದಲೇ ಅಂದುಕೊಂಡಿದ್ದೇವು, ಅದರಂತೆ ಆಗಿದೆ ಎಂದರು.

ಬಿಜೆಪಿಯವರು ರಾಜ್ಯಪಾಲರು ಮತ್ತು ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ 136 ಮಂದಿ ಶಾಸಕರನ್ನು ಹೊಂದಿರುವ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನವಾಗಿದೆ. ರಾಷ್ಟ್ರಪತಿಗಳು ಕೂಡಲೇ ರಾಜ್ಯಪಾಲರನ್ನು ವಾಪಸ್ಸು ಕರೆಯಿಸಿಕೊಳ್ಳಬೇಕು. ಈ ಮೂಲಕ ಸಂವಿಧಾನ ಎತ್ತಿಹಿಡಿಯಬೇಕಾಗಿದೆ. ಇಂಥ ಷಡ್ಯಂತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ಕೊಡುವುದಕ್ಕೆ ಬಿಡುವುದಿಲ್ಲ ಎಂದರು.ಬಿಜೆಪಿಯವರು ಏನೆಲ್ಲ ಮಾಡಿದ್ದಾರೆ ಎನ್ನುವುದನ್ನು ನಾವು ನೋಡಿದ್ದೇವೆ. ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ. ವಿಜೇಯಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಏನು ಮಾಡಿದ್ದಾರೆ ಎನ್ನುವುದು ಜಗತ್ತಿಗೆ ಗೊತ್ತಿದೆ. ಅದೇ ರೀತಿ ಈಗ ಸಿಎಂ ಅವರ ಮೇಲೆ ಗೂಬೆ ಕೂರಿಸುವ ಷಡ್ಯಂತ್ರ ಮಾಡುತ್ತಿದ್ದಾರೆ. ಇದನ್ನು ಕಾಂಗ್ರೆಸ್ ಸಮರ್ಥವಾಗಿ ಎದುರಿಸುತ್ತದೆ ಎಂದರು.