ನಾಡಿದ್ದು ಜಿಲ್ಲೆಯಲ್ಲಿ ಬೃಹತ್ ಮಾನವ ಸರಪಳಿ ನಿರ್ಮಾಣ

| Published : Sep 13 2024, 01:39 AM IST

ಸಾರಾಂಶ

ಭಾರತ ದೇಶದ ಪ್ರಜಾಪ್ರಭುತ್ವ, ಸಂವಿಧಾನದ ಮಹತ್ವವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದ ಡಿಸಿ ಮೊಹಮ್ಮದ್ ರೋಷನ್‌

ಕನ್ನಡಪ್ರಭ ವಾರ್ತೆ ಬೆಳಗಾವಿ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತ ದೇಶದ ಪ್ರಜಾಪ್ರಭುತ್ವ, ಸಂವಿಧಾನದ ಮಹತ್ವವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸೆ.15. ರಂದು ಜಿಲ್ಲೆಯಲ್ಲಿ 145 ಕಿಮೀ ಉದ್ದದ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದ ಮೌಲ್ಯ ಹಾಗೂ ಅದರ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಕಳೆದ ವರ್ಷ ಸೆ.15ರಂದು ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಏಕಕಾಲದಲ್ಲಿ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನಿಡಲಾಗಿತ್ತು. ಈ ಬಾರಿ ಬೀದರ ಜಿಲ್ಲೆಯ ಬಸವಕಲ್ಯಾಣದಿಂದ 30 ಜಿಲ್ಲೆಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಪೀಠಿಕೆಯನ್ನು ಓದುವುದರ ಮೂಲಕ ಭಾರತದ ಸಂವಿಧಾನದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.

ರಾಮದುರ್ಗ ಟು ಕಿತ್ತೂರುವರೆಗೆ ಮಾನವ ಸರಪಳಿ:

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಬಾಗಲಕೋಟೆ ಜಿಲ್ಲೆಯಿಂದ ಜೋಡಿಸಲಾಗುವ ಮಾನವ ಸರಪಳಿಯು ಜಿಲ್ಲೆಯಲ್ಲಿ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಿಂದ ಪ್ರಾರಂಭವಾಗಿ ಕಿತ್ತೂರ ತಾಲೂಕಿನ ತೇಗೂರ ಗ್ರಾಮಕ್ಕೆ ಕೊನೆಗೊಳ್ಳುತ್ತದೆ. ಜಿಲ್ಲೆಯಲ್ಲಿ 145 ಕಿಮೀ ವ್ಯಾಪ್ತಿಯಲ್ಲಿ ಮಾನವ ಸರಪಳಿ ನಿರ್ಮಿಸಲು ಯೋಜಿಸಲಾಗಿದೆ. ಅಂದಾಜು 1.25 ಲಕ್ಷ ಜನ ಭಾಗಿಯಾಗುವ ನೀರಿಕ್ಷೆ ಹೊಂದಲಾಗಿದೆ. ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ, ಕೆ.ಚಂದರಗಿ, ಸವದತ್ತಿ ತಾಲೂಕಿನ ಸೋಪಡ್ಲ್, ಯರಗಟ್ಟಿ, ಇಂಚರಲ ಕ್ರಾಸ್, ಬೈಲಹೊಂಗಲ ತಾಲೂಕಿನ ನೇಸರಗಿ ಕ್ರಾಸ್, ಸುತಗಟ್ಟಿ ಕ್ರಾಸ್, ಬೆಳಗಾವಿ ತಾಲೂಕಿನ ಕರಡಿಗುದ್ದಿ, ಸಾಂಬ್ರಾ, ಬೆಳಗಾವಿ ನಗರ, ಸುವರ್ಣ ವಿಧಾನ ಸೌಧ, ಹಿರೇಬಾಗೆವಾಡಿ, ಎಂ.ಕೆ.ಹುಬ್ಬಳ್ಳಿ, ಇಟಗಿ ಕ್ರಾಸ್, ಚನ್ನಮನ ಕಿತ್ತೂರು ಮಾರ್ಗವಾಗಿ ತೇಗೂರ ಗ್ರಾಮದವರೆಗೆ ಮಾನವರ ಸರಪಳಿ ನಿರ್ಮಿಸಲಾಗುವುದು. ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಮಾತನಾಡಿ, ಕಾರ್ಯಕ್ರಮದ ಯಶಸ್ವಿಗಾಗಿ ಪ್ರತಿ ಗ್ರಾಮಗಳಿಂದ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಪಾಲ್ಗೊಳ್ಳುವಂತೆ ಕ್ರಮ ವಹಿಸಲಾಗಿದೆ. ಸ್ಥಳೀಯವಾಗಿ ತಂಡಗಳನ್ನು ರಚಿಸಿಲಾಗಿದ್ದು, ಪ್ರತಿ 200 ಮೀ.ಗೆ ಒಬ್ಬ ಸೆಕ್ಟೆರ್ ಅಧಿಕಾರಿಯನ್ನು, ಪ್ರತಿ 1 ಕಿಮೀ ತಾಲೂಕು ಮಟ್ಟದ ಹಾಗೂ ಪ್ರತಿ 5 ಕಿ.ಮೀ ಒಬ್ಬ ಜಿಲ್ಲಾಮಟ್ಟದ ಅಧಿಕಾರಿಯನ್ನು ನೇಮಿಸಲಾಗಿದೆ ಎಂದರು.

ಗೋಷ್ಠಿಯಲ್ಲಿ ಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೆಶಕ ರಾಮನಗೌಡ ಕನ್ನೋಳಿ, ಬಸವರಾಜ ಕುರಿಹುಲಿ ಉಪಸ್ಥಿತರಿದ್ದರು.

----------ಸೆ.15 ರಂದು ಬೆಳಗ್ಗೆ 9.30 ರಿಂದ 10.30ರ ವರೆಗೆ ಜರುಗಲಿರುವ ಈ ಕಾರ್ಯಕ್ರಮದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಸದಸ್ಯರು, ಸಂಘ-ಸಂಸ್ಥೆಗಳು ಹಾಗೂ ವಿವಿಧ ಸಂಘಟನೆಗಳು ಪಾಲ್ಗೊಳ್ಳಲಿದ್ದು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕು.

- ಮೊಹಮ್ಮದ್ ರೋಷನ್, ಜಿಲ್ಲಾಧಿಕಾರಿ.

ಮಾನವ ಸರಪಳಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜನರು ಸ್ವಯಂ ಪ್ರೇರಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಕೆ.ಎಸ್.ಆರ್.ಟಿ.ಸಿ ಹಾಗೂ ಶಾಲಾ ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದೆ.

-ರಾಹುಲ ಶಿಂಧೆ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ.