ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಅದರ ಜವಾಬ್ದಾರಿ ಹೊತ್ತಿರುವ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಮಂಗಳವಾರ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದವು. ಹಾಸನ, ಹಾವೇರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಅಥಣಿ, ರಾಯಬಾಗದಲ್ಲಿ ಭಕ್ತರು, ಹಿಂದೂ ಪರ ಸಂಘಟನೆಗಳು, ವಿವಿಧ ಮಠಗಳ ಸ್ವಾಮೀಜಿಗಳು ಹೋರಾಟ ನಡೆಸಿದರು.ಹಾಸನದಲ್ಲಿ ಯಸಳೂರಿನ ತೆಂಕಲಗೂಡು ಮಠದ ಮಠಾಧೀಶ ಚನ್ನಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ, ನಗರದ ಎನ್. ಆರ್.ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಹಾವೇರಿಯಲ್ಲಿ ಧರ್ಮಸ್ಥಳ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿಯಿಂದ ನಗರದ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಯಿತು.
ಬೀದರ್‌ನಲ್ಲಿ ನಗರದ ಬರೀದ್ ಶಾಹಿ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ರ‍್ಯಾಲಿ ನಡೆಯಿತು. ರ್‍ಯಾಲಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ಚಿಕ್ಕಬಳ್ಳಾಪುರದಲ್ಲಿ ಮರುಳ ಸಿದ್ದೇಶ್ವರ ದೇವಸ್ಥಾನದಿಂದ ಅಂಬೇಡ್ಕರ್ ವೃತ್ತದ ವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಯಿತು. ಬಳಿಕ, ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿನಿರ್ಮಿಸಿ, ಜನಾಗ್ರಹ ಸಭೆ ನಡೆಸಿ, ಅಪರ ಜಿಲ್ಲಾಧಿಕಾರಿ ಡಾ.ಎನ್.ಬಾಸ್ಕರ್ ಅವರಿಗೆ ಮನವಿ ಸಲ್ಲಿಸಿ, ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಚಿತ್ರದುರ್ಗದಲ್ಲಿ ನೀಲಕಂಠೇಶ್ವರ ದೇಗುಲದಿಂದ ಒನಕೆ ಓಬವ್ವ ವೃತ್ತದವರೆಗೆ ಹಿಂದೂಪರ ಸಂಘಟನೆಗಳ ಮುಖಂಡರಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.ಅಥಣಿಯಲ್ಲಿ ಡಾ.ಸಿದ್ಧಸೇನ ಮುನಿ ಮಹಾರಾಜರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಯಬಾಗದಲ್ಲಿ ಪಟ್ಟಣದ ಹನುಮಾನ ದೇವಸ್ಥಾನದಿಂದ ಮಹಾವೀರ ಭವನದವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಧರ್ಮಸ್ಥಳ ಭಕ್ತಾಭಿಮಾನಿಗಳು ಮತ್ತು ವಿವಿಧ ಹಿಂದೂ ಸಂಘಟನೆಯ ಮುಖಂಡರು ಯುಟ್ಯೂಬರ್ಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ಅಪಪ್ರಚಾರ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೈಸೂರಲ್ಲಿ ಹಿಂದೂಪರ ಸಂಘಟನೆಗಳ ವತಿಯಿಂದ ಸಹಿ ಸಂಗ್ರಹ ಅಭಿಯಾನ ಆರಂಭಿಸಲಾಗಿದೆ.